ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ: ಅಂಬರೀಷ್ ಸುಳಿವು
ಕ.ಪ್ರ.ವಾರ್ತೆ ಮಂಡ್ಯ ಮಾ. 19
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಗೊಂದಲದಲ್ಲಿದ್ದ ಕೆಪಿಸಿಸಿ ಉಪಾಧ್ಯಕ್ಷ ಅಂಬರೀಷ್, ಮಂಗಳವಾರ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಕೇಂದ್ರ ಸ್ಥಾನವಾಗಿರುವ ಕಾರಣ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ಹೊಂದಿದ್ದೇನೆ. ಜತೆಗೆ ಸೋತ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಹೆಚ್ಚಾಗಿದೆ ಎಂದು ಹೇಳಿದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಾಗಿ ನಾನು ಅರ್ಜಿ ಸಲ್ಲಿಸಿರಲಿಲ್ಲ. ಆದರೂ, ಮಂಡ್ಯ ಮತ್ತು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ನನ್ನ ಹೆಸರನ್ನು ಸೂಚಿಸಲಾಗಿದೆ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಿದರೆ, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬುದನ್ನು ಶೀಘ್ರದಲ್ಲಿಯೇ ಕೇಂದ್ರ ಮಾಜಿ ಸಚಿವ ಎಸ್.ಎಂ. ಕೃಷ್ಣ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಆತ್ಮಾನಂದ ಅವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮವಾಗಿದ್ದು, ಅದಕ್ಕೆ ಬದ್ಧನಾಗಿ ನಡೆಯುತ್ತೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸುತ್ತಾರೋ ಅದೇ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತೇನೆ. ನನಗೆ ಅಧಿಕಾರದ ಆಸೆಯಿಲ್ಲ. ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರ ಹಿಡಿದರೆ ಸಾಕು ಎಂದು ಹೇಳಿದರು.
ನಾಗಮಂಗಲ ಕ್ಷೇತ್ರದಲ್ಲಿ ಶಾಸಕ ಸುರೇಶ್‌ಗೌಡ ಹಾಗೂ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಕೆ.ಬಿ. ಚಂದ್ರಶೇಖರ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮದ್ದೂರು ಕ್ಷೇತ್ರದಿಂದ ಮಾಜಿ ಶಾಸಕ ಮಧು ಮಾದೇಗೌಡ ಹಾಗೂ ಜಿಪಂ ಮಾಜಿ ಅಧ್ಯಕ್ಷ ಗುರುಚರಣ್ ಅವರ ಹೆಸರನ್ನು ಸೂಚಿಸಲಾಗಿದೆ. ಶಾಸಕಿ ಕಲ್ಪನಾ ಸಿದ್ದರಾಜು ಕಾಂಗ್ರೆಸ್ ಸೇರುವ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ. ಹಾಗೊಂದು ವೇಳೆ ಪಕ್ಷಕ್ಕೆ ಸೇರ್ಪಡೆಯಾದರೂ ಕಲ್ಪನಾ ಅವರಿಗೆ ಟಿಕೆಟ್ ಕೊಡುವುದು ಶೇ. 90ರಷ್ಟು ಭಾಗ ಕಷ್ಟ ಎಂದು ಅಂಬರೀಷ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶ್ರೀರಂಗಪಟ್ಟಣ ಪುರಸಭೆ ಚುನಾವಣೆಯಲ್ಲಿ ಡಬಲ್ ಬಿ ಫಾರಂ ಸಾಕಷ್ಟು ಗೊಂದಲ ಸೃಷ್ಟಿಸಿತು. ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ. ರವೀಂದ್ರ ಅವರಿಗೆಯೇ 23 ಬಿ ಫಾರಂಗಳನ್ನು ನೀಡಿದ್ದರೆ ನನಗೆ ಬೇಸರ ಆಗುತ್ತಿರಲಿಲ್ಲ. ಆದರೆ, ಡಬಲ್ ಬಿ ಫಾರಂ ನೀಡಿದ್ದು ಅಶಿಸ್ತು ಎಂದು ಹೇಳಿದರು.
ಮಂಡ್ಯ ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವ ಅನುಮಾನವೂ ಬೇಡ. ಈಗಾಗಲೇ ಕೆಲ ಪಕ್ಷೇತರರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಗರದ ಅಭಿವೃದ್ಧಿ ಮತ್ತು ಪಕ್ಷದ ಮೇಲೆ ಪ್ರೀತಿ ವಿಶ್ವಾಸ ಹೊಂದಿರುವ ಪಕ್ಷೇತರರು ಕಾಂಗ್ರೆಸ್ ಸೇರುತ್ತಾರೆ ಎಂಬ ನಂಬಿಕೆಯಿದೆ ಎಂದು ತಿಳಿಸಿದರು.
ಪಕ್ಷೇತರ ಸದಸ್ಯರು ಜನಪ್ರತಿನಿಧಿಗಳು. ಅವರಿಗೂ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳುವ ಅವಕಾಶಗಳಿವೆ. ಜತೆಗೆ ಸಾಕಷ್ಟು ಒತ್ತಡಗಳು ಇರುತ್ತವೆ. ನಾವು ಯಾವ ತಂತ್ರಗಾರಿಕೆ ಮಾಡಲ್ಲ. ಪ್ರೀತಿ ಇದ್ದರೆ ಪಕ್ಷಕ್ಕೆ ಬರುತ್ತಾರೆ ಎಂದು ಅಂಬರೀಷ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಸ್. ಆತ್ಮಾನಂದ ಹಾಗೂ ನಗರಸಭೆ ನೂತನ ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

