ಮಂಡ್ಯ

ನೀತಿ ಸಂಹಿತೆ ಪಾಲನೆ ಕಡ್ಡಾಯ

Published On :

ಕನ್ನಡಪ್ರಭ ವಾರ್ತೆ, ಮಂಡ್ಯ ಮಾ.21
ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಜಾರಿಯಾಗಿರುವ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ರಾಜಕೀಯ ಪಕ್ಷಗಳ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಬಿ.ಎನ್.ಕೃಷ್ಣಯ್ಯ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಯ್ಯ, ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸಲು ಪೂರ್ವಾನುಮತಿ ಪಡೆದುಕೊಳ್ಳುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಗಿದೆ ಎಂದರು.
ತೆರವು ಗೊಳಿಸಲು ಸೂಚನೆ: ಚುನಾವಣೆ ಸಂದರ್ಭದಲ್ಲಿ ಸರ್ಕಾರಿ ವಾಹನಗಳ ಬಳಕೆಗೆ ನಿಯಂತ್ರಣ ಹಾಕಲಾಗಿದೆ. ಸ್ಥಳೀಯ ಸಂಸ್ಥೆಗಳು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರಿಗೆ ನೀಡಲಾಗಿದ್ದ ವಾಹನಗಳನ್ನು ವಾಪಸ್ ಪಡೆದುಕೊಳ್ಳಲಾಗಿದೆ. ಅಲ್ಲದೆ, ಸ್ಥಳೀಯ ಸಂಸ್ಥೆಗಳಿಗೆ ರಸ್ತೆ ಬದಿಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಸಿರುವುದನ್ನು ಕೂಡಲೇ ತೆರವುಗೊಳಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಎಲ್ಲೆಲ್ಲಿ ನಿಷೇಧ: ಬಯಲು ನಾಟಕಗಳು, ಜಾತ್ರೆ, ಧಾರ್ಮಿಕ ಕಾರ್ಯಗಳಲ್ಲಿ ರಾಜಕಾರಣಿಗಳು ಪಾಲ್ಗೊಂಡು ಭಾಷಣ ಮಾಡುವುದು. ಪ್ರವಾಸಿ ಮಂದಿರಗಳಂತಹ ಸರ್ಕಾರಿ ಸ್ಥಳಗಳಲ್ಲಿ ಸಭೆ ಸೇರುವುದನ್ನು ನಿಷೇಧಿಸಲಾಗಿದೆ.ಯಾವುದೇ ಬಗೆಯ ಸಭೆ ಸಮಾರಂಭ ನಡೆಸಬೇಕಾದರು ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.
ನೋಂದಣಿಗೆ ಅವಕಾಶ: ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಚುನಾವಣೆ ಅಧಿಸೂಚನೆ ಹೊರಡುವವರೆಗೂ ಅಂದರೆ ಏ.10ರವರೆಗೆ ಮತದಾರರು ಹೆಸರು ನೋಂದಣಿ ಮಾಡಲು ಅವಕಾಶವಿದೆ. ಈ ಬಾರಿ ಮಂಗಳಮುಖಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದು, ಅವರಿಗೂ ಮತದಾನದ ಅವಕಾಶ ಕಲ್ಪಿಸಲಾಗುತ್ತಿದೆ.
ಗುರುತಿನ ಚೀಟಿ ಕಡ್ಡಾಯ: ಭಾವಚಿತ್ರ ಹೊಂದಿರುವ ಮತದಾರರ ಪಟ್ಟಿಯನ್ನು ಚುನಾವಣೆಯಲ್ಲಿ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಭಾವಚಿತ್ರ ಇರುವ ಗುರುತಿನ ಪತ್ರ (ಐಡೆಂಟಿಟಿ)ವನ್ನು ಕಡ್ಡಾಯ ಮಾಡಲಾಗಿದೆ. ಇಲೆಕ್ಟ್ರೋಲ್ ಫೋಟೋ ಐಡೆಂಟಿಟಿ ಕಾರ್ಡ್ (ಇಪಿಐಸಿ)ನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣಯ್ಯ ಈ ಸಂದರ್ಭದಲ್ಲಿ ತಿಳಿಸಿದರು.
ವೀಕ್ಷಕರ ನೇಮಕ: ಚುನಾವಣೆ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯುವಂತೆ ಚುನಾವಣಾ ಆಯೋಗ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ವಹಿಸಲು ವೀಕ್ಷಕರನ್ನು ಹಾಗೂ ಕಾನೂನು ಸುವ್ಯವಸ್ಥೆ ಮೇಲೆ ನಿಗಾ ಇಡಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವೀಕ್ಷಕರನ್ನಾಗಿ ನಿಯೋಜಿಸಲಿದೆ ಎಂದು ಹೇಳಿದರು.
ಅಭ್ಯರ್ಥಿಗಳ ಚುನಾವಣೆ ಖರ್ಚಿನ ಮೇಲೆ ಕಣ್ಣಿಡಲು ಪ್ರತ್ಯೇಕವಾಗಿ ವೀಕ್ಷಕರು ಹಾಗೂ ಸಹಾಯಕ ವೀಕ್ಷಕರನ್ನು ಆಯೋಗ ನೇಮಕ ಮಾಡುತ್ತಿದೆ. ನಿಗದಿಗಿಂತ ಹೆಚ್ಚಿನ ವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆದಾಯ ತೆರಿಗೆ ಅಧಿಕಾರಿಗಳನ್ನು ಒಳಗೊಂಡ ವಿಶೇಷ ದಳಗಳನ್ನು ರಚಿಸಲಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.