ಮಂಡ್ಯ: ಕಬ್ಬು ಬೆಳೆಯನ್ನು ಹನಿ ನೀರಾವರಿ ಪದ್ಧತಿಗೆ ಅಳವಡಿಸುವ ಯೋಜನೆಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಬುಧವಾರ ಹೇಳಿದರು.
ಕೃಷ್ಣರಾಜಸಾಗರ ಜಲಾಶಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ತರುವಾಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಯನ್ನು ಹನಿ ನೀರಾವರಿ ಪದ್ಧತಿಗೆ ಅಳವಡಿಸಿ ಹೊಸದೊಂದು ಕ್ರಾಂತಿಗೆ ನಾಂದಿ ಹಾಡಲಾಗುವುದು ಎಂದರು.
ರಾಜ್ಯದಲ್ಲಿ 5 ಲಕ್ಷ 26 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಈ ಬೆಳೆಗೆ ಹೆಚ್ಚಿನ ನೀರಿನ ಅವಶ್ಯಕತೆ ಇರುವುದರಿಂದ ಹನಿ ನೀರಾವರಿ ಪದ್ಧತಿ ಅಳಪವಡಿಸುವ ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆಯುವುದು ಬಾಕಿಯಿದೆ ಎಂದು ತಿಳಿಸಿದರು.
ಕಬ್ಬು ಬೆಳೆಯನ್ನು ಹನಿ ನೀರಾವರಿ ಪದ್ಧತಿಗೆ ಅಳವಡಿಸುವುದರಿಂದ ಕಬ್ಬಿನ ಇಳುವರಿ ಹೆಚ್ಚುತ್ತದೆ. ನೀರಿನ ಮಿತ ಬಳಕೆ, ವಿದ್ಯುತ್ ಉಳಿತಾಯ, ಸಾಗಾಣಿಕೆ ವೆಚ್ಚವೂ ಕಡಿಮೆಯಾಗುತ್ತದೆ. ಸುಮಾರು 40 ರಿಂದ 50 ಟಿಎಂಸಿ ನೀರಿನ ಉಳಿತಾಯವಾಗುತ್ತದೆ ಎಂದು ಹೇಳಿದರು. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನೀರಾವರಿ ಯೋಜನೆಗಳಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಹಾಗೂ ಸಣ್ಣ ನೀರಾವರಿ ಯೋಜನೆಗಳಿಗೆ 1300 ಕೋಟಿ ಮೀಸಲಿಡಲಾಗಿದೆ. ಇದು ಕಾಂಗ್ರೆಸ್ ಸರ್ಕಾರ ರೈತರ ಮೇಲಿಟ್ಟಿರುವ ಕಾಳಜಿಯನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದರು.
ದೇಶದಲ್ಲಿಯೇ ನಂಬರ್ ಒನ್: ಕಾವೇರಿ, ತುಂಗಭದ್ರಾ, ಕೃಷ್ಣ ಸೇರಿದಂತೆ ಎಲ್ಲಾ ಯೋಜನೆಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿ ಮುಗಿಯುವುದರೊಳಗೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನೂ ಪೂರ್ಣಗೊಳಿಸಿ ನೀರಾವರಿ ಕ್ಷೇತ್ರದಲ್ಲಿ ಕರ್ನಾಟಕ, ದೇಶದಲ್ಲಿಯೇ ನಂಬರ್ ಒನ್ ಸ್ಥಾನ ಅಲಂಕರಿಸುವಂತೆ ಮಾಡಲಾಗುವುದು ಎಂದರು.
ಮಂಡ್ಯ ಜಿಲ್ಲೆಯಲ್ಲಿನ ನಾಲೆಗಳ ಆಧುನೀಕರಣಕ್ಕೆ 400ಕೋಟಿ, ಕಾವೇರಿ ನೀರಾವರಿ ನಿಗಮಕ್ಕೆ 1800 ಕೋಟಿ ರುಪಾಯಿ ನೀಡಲಾಗಿದೆ. ಮಳವಳ್ಳಿ ತಾಲೂಕಿನಲ್ಲಿ ಪೂರಿಗಾಲಿ ಯೋಜನೆಗೆ 715 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಎಚ್. ಅಂಬರೀಶ್, ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕರಾದ ಕೆ.ಎಸ್. ಪುಟ್ಟಣ್ಣಯ್ಯ, ನರೇಂದ್ರಸ್ವಾಮಿ, ಡಿ.ಸಿ. ತಮ್ಮಣ್ಣ, ಜಿಪಂ ಅಧ್ಯಕ್ಷೆ ಮಂಜುಳಾ ಪರಮೇಶ್ ಮತ್ತಿತರರು ಹಾಜರಿದ್ದರು.
Advertisement