ಮೈಸೂರು

ರಾಜಕಾರಣಿಗಳಿಗೆ ಧ್ವಜಾರೋಹಣ ಭಾಗ್ಯವಿಲ್ಲ

Published On :

ಕ.ಪ್ರ.ವಾರ್ತೆ    ಮೈಸೂರು    ಆ. 13
ಜಿಲ್ಲಾಡಳಿತದಿಂದ ಹಮ್ಮಿಕೊಳ್ಳುತ್ತಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸುತ್ತಿದ್ದ ರಾಜಕಾರಣಿಗಳಿಗೆ ಈ ಬಾರಿ ಆ ಸುಯೋಗ ಕೂಡಿಬಂದಿಲ್ಲ. ಅದಕ್ಕೆ ಕಾರಣ ಚುನಾವಣೆ ನೀತಿ ಸಂಹಿತೆ.
ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯ ಕೆ.ಆರ್. ನಗರ ಬರುತ್ತದೆ. ಅಲ್ಲದೆ, ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಮೇಲ್ಮನೆಗೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಸಾಮಾನ್ಯವಾಗಿ ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರು, ತಾಲೂಕು ಕೇಂದ್ರಗಳಲ್ಲಿ ಶಾಸಕರು ಧ್ವಜಾರೋಹಣ ನೆರವೇರಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಆ. 15ರ ಬೆಳಗ್ಗೆ 9ಕ್ಕೆ ನಗರದ ಮೈಸೂರು ವಿವಿ ಓವಲ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಧ್ವಜಾರೋಹಣ ನೆರವೇರಿಸುವರು. ನಂತರ ರಾಷ್ಟ್ರಗೀತೆ, ಪಥಸಂಚಲನ, ಸ್ವಾತಂತ್ರ್ಯೋತ್ಸವ ಸಂದೇಶ, ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಸಂಜೆ 6ಕ್ಕೆ ಕಲಾಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ. ಶಿಖಾ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ. ನೀ. ಗಿರಿಗೌಡ ಭಾಗವಹಿಸುವರು. ಮಹಾಲಿಂಗು ತಂಡದಿಂದ ದೇಶಭಕ್ತಿ ಗೀತೆ, ಹೆಜ್ಜೆ- ಗೆಜ್ಜೆ ತಂಡದಿಂದ ಶ್ರೀಧರ್ ಜೈನ್ ನಿರ್ದೇಶನದಲ್ಲಿ ಸ್ವಾತಂತ್ರ್ಯ ಸಂಗ್ರಾಮ- ನೃತ್ಯ ರೂಪಕ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಡುವರು.
ಡಿಡಿಪಿಐ ಸೂಚನೆ: ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ, ಅಗೌರವ ಆಗದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹಾಗೂ ಚುನಾವಣೆ ನೀತಿ ಸಂಹಿತೆ ಗಮನದಲ್ಲಿಟ್ಟುಕೊಳ್ಳಲು ತಿಳಿಸಲಾಗಿದೆ. ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಖಾಸಗಿ ಶಾಲೆಗಳು ನಿಯಮಾನುಸಾರ ಕಡ್ಡಾಯವಾಗಿ ಸೂಚನೆ ಪಾಲಿಸುವಂತೆ ಡಿಡಿಪಿಐ ಬಿ.ಕೆ. ಬಸವರಾಜು ತಿಳಿಸಿದ್ದಾರೆ.
ವಿವಿಧೆಡೆ ಸ್ವಾತಂತ್ರ್ಯ ದಿನಾಚರಣೆ: ನಟರಾಜ ಪ್ರತಿಷ್ಠಾನದಿಂದ ಅಂದು ಬೆಳಗ್ಗೆ 8ಕ್ಕೆ ಕಾಲೇಜು ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಹಮ್ಮಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರ ರಾಮಣ್ಣ ಧ್ವಜಾರೋಹಣ ನೆರವೇರಿಸುವರು. ಎನ್.ಆರ್. ಮೊಹಲ್ಲಾದಲ್ಲಿರುವ ಟಿಎನ್ಎನ್ ಆದರ್ಶ ವಿದ್ಯಾರ್ಥಿನಿಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎನ್. ಮಂಜುನಾಥ್ ಧ್ವಜಾರೋಹಣ ನೆರವೇರಿಸುವರು.
ನಗರ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ಕಚೇರಿಯಲ್ಲಿ ಬೆಳಗ್ಗೆ 9ಕ್ಕೆ ನಗರಾಧ್ಯಕ್ಷ ಸಿ. ದಾಸೇಗೌಡ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಲಿದ್ದು, ಸಚಿವರಾದ ವಿ. ಶ್ರೀನಿವಾಸಪ್ರಸಾದ್, ಡಾ.ಎಚ್.ಸಿ. ಮಹದೇವಪ್ಪ, ಸಂಸದ ಎಚ್. ವಿಶ್ವನಾಥ್ ಹಾಗೂ ಶಾಸಕರು ಭಾಗವಹಿಸುವರು. ಲಯನ್ಸ್ ಐಕಾನ್, ದೀಕ್ಷಿತ್ ಹೆಲ್ತ್ ಕ್ಲಿನಿಕ್ ಮತ್ತು ಸಂಶೋಧನಾಲಯದಲ್ಲಿ ಅಂದು ಬೆಳಗ್ಗೆ 9.30ಕ್ಕೆ ಸ್ವಾತಂತ್ರ್ಯ ಸಂಭ್ರಮ ಆಚರಿಸಲಿದ್ದು, ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ, ಸಿ.ಸಿ. ನರೇಶ್ಕುಮಾರ್ ಭಾಗವಹಿಸುವರು. ಮೈತ್ರಿ ಬುದ್ಧಿಮಾಂದ್ಯ ಮಕ್ಕಳಿಂದ ತಯಾರಿಸಿದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿದೆ. ತ್ಯಾಗರಾಜ ರಸ್ತೆಯಲ್ಲಿರುವ ಅರಸು ಮಂಡಳಿಯಲ್ಲಿ ಅಂದು ಬೆಳಗ್ಗೆ 10ಕ್ಕೆ ಕಸಾಪ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.