ಬಿಜೆಪಿ, ಜೆಡಿಎಸ್ ಅಧಿಕಾರಕ್ಕಾಗಿ ಹುಟ್ಟಿದ ಪಕ್ಷಗಳು
ಕ.ಪ್ರ.ವಾರ್ತೆ , ಕೆ.ಆರ್. ನಗರ , ಆ. 19
ವಿಧಾನಸಭಾ ಚುನಾವಣೆಗೂ ಮುಂಚೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಅಧಿಕಾರಕ್ಕಾಗಿ ಒಳ ಒಪ್ಪಂದ ಏರ್ಪಟ್ಟಿತು. ಆದರೆ ಮತದಾರರು ಅವರಿಗೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್‌ಗೆ ಬಹುಮತ ನೀಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಬಯಲು ರಂಗಮಂದಿರದಲ್ಲಿ ಸೋಮವಾರ ಮಂಡ್ಯ ಲೋಕಸಭಾ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜನತೆಗೆ ರಾಜಕೀಯ ಸ್ವಾತಂತ್ರ್ಯ ದೊರೆತರೆ ಸಾಲದು. ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಬಂದಾಗ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಆ ಕೆಲಸವನ್ನು ದಶಕಗಳಿಂದ ಕಾಂಗ್ರೆಸ್ ಪಕ್ಷ ಮಾಡಿಕೊಂಡು ಬರುತ್ತಿದ್ದು, ಅಭಿವೃದ್ಧಿಗಾಗಿ ಪಕ್ಷದ ಅಭ್ಯರ್ಥಿ ರಮ್ಯಾ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಉಪ ಚುನಾವಣೆಯಿಂದ ಸರ್ಕಾರ ಬದಲಾಗುವುದಿಲ್ಲ. ಆದರೆ ಚುನಾವಣೆ ಘೋಷಣೆಯಾಗಿರುವುದರಿಂದ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಅಧಿಕಾರಕ್ಕಾಗಿ ಹುಟ್ಟಿಕೊಂಡ ಪಕ್ಷವಲ್ಲ. 128 ವರ್ಷಗಳ ಇತಿಹಾಸ ಹೊಂದಿರುವ ಪಕ್ಷ, ಸಮಾಜದ ಬದಲಾವಣೆಗೆ, ಬಡವರ ಏಳಿಗೆಗೆ ದುಡಿಯುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದ ವ್ಯಾಮೋಹದಿಂದ ಹುಟ್ಟಿರುವ ಪಕ್ಷಗಳು ಎಂದು ಅವರು ಲೇವಡಿ ಮಾಡಿದರು.
ಎಚ್‌ಡಿಕೆ ವಿರುದ್ಧ ಕಿಡಿ: ಜನ ಮತ ನೀಡುವುದು ಅವಧಿ ಪೂರ್ಣ ಜನ ಪ್ರತಿನಿಧಿಯಾಗಿರಲಿ ಎಂದು. ಆದರೆ ಇದನ್ನು ಅರಿಯದ ಎಚ್.ಡಿ. ಕುಮಾರಸ್ವಾಮಿ, ಎನ್.ಚೆಲುವರಾಯಸ್ವಾಮಿ ಅಧಿಕಾರ ದಾಹದಿಂದ ರಾಜಿನಾಮೆ ನೀಡಿದರು ಎಂದು ಟೀಕಿಸಿದರಲ್ಲದೆ, ಬಡವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರವಿದ್ದಾಗ ಜನ ಸೇವೆ ಮಾಡಲಿಲ್ಲ ಎಂದರು.
ದೇಶಕ್ಕೆ, ರಾಜ್ಯಕ್ಕೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಜನರ ನೆನಪಿನಲ್ಲಿ ಉಳಿಯುವ ಯಾವ ಕೆಲಸ ಮಾಡಿದ್ದಾರೆ. ಸದಾ ಮಣ್ಣಿನ ಮಕ್ಕಳು, ಬಡವರ ಪರ ದುಡಿಯುವವರು ಎಂದು ಹೇಳಿಕೊಂಡು ಮತ ಪಡೆದು ಜನರಿಗೆ ದ್ರೋಹ ಮಾಡುವ ಕೆಲಸ ಮಾಡುವವರನ್ನು ಮನೆಗೆ ಕಳುಹಿಸುವ ಕೆಲಸ ಮತದಾರರಿಂದ ಆಗಬೇಕು ಎಂದು ಹೇಳಿದರು.
ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಪಕ್ಷ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಸಚಿವ ವಿ. ಶ್ರೀನಿವಾಸಪ್ರಸಾದ್, ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಅಭ್ಯರ್ಥಿ ರಮ್ಯಾ ಮಾತನಾಡಿದರು. ಸಚಿವ ಎಚ್.ಎಸ್. ಮಹದೇವಪ್ರಸಾದ್, ಸಂಸದ ವಿಶ್ವನಾಥ್, ಶಾಸಕ ಬೈರತಿ ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

