ಐಚನಹಳ್ಳಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ
ಕ.ಪ್ರ.ವಾರ್ತೆ , ಕೆ.ಆರ್. ನಗರ , ಆ. 21
ಜನಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ಅಸಡ್ಡೆಯಿಂದ ಗ್ರಾಮದಲ್ಲಿ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಇದನ್ನು ಪರಿಹರಿಸದಿದ್ದಕ್ಕೆ ಗ್ರಾಮಸ್ಥರು ಮತದಾನವನ್ನೆ ಬಹಿಷ್ಕರಿಸಿದ ಘಟನೆ ನಡೆದಿದೆ.
ತಾಲೂಕಿನ ಐಚನಹಳ್ಳಿ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿ ಶಾಸಕ ಸಾ.ರಾ. ಮಹೇಶ್ ಮತ್ತು ಅಧಿಕಾರಿಗಳ ಮನವೊಲಿಕೆಗೂ ಜಗ್ಗದೆ ಮತ ಕೇಂದ್ರದಿಂದ ದೂರ ಉಳಿದರು. ಇವರ ಆಕ್ರೋಶ ಎಷ್ಟಿತ್ತೆಂದರೆ ಚುನಾವಣೆ ಸಿಬ್ಬಂದಿಗೆ ಕುಡಿಯಲು ನೀರನ್ನು ಕೊಡಬಾರದು ಎಂದು ನಿರ್ಣಯಿಸಿ ಮತಗಟ್ಟೆಯತ್ತ ಯಾರು ತಿರುಗಿ ನೋಡಲಿಲ್ಲ.
ಗ್ರಾಮಸ್ಥರು ಮತದಾನ ಬಹಿಷ್ಕರಿಸಿರುವ ವಿಷಯ ತಿಳಿದ ಎಸ್ಪಿ ಅಭಿನವ್ ಖರೆ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಮನವೊಲಿಸಲು ಮುಂದಾದಾಗ, ಗ್ರಾಮಸ್ಥರು ಅವರನ್ನೆ ತರಾಟೆಗೆ ತೆಗೆದುಕೊಂಡರಲ್ಲದೆ, ನಮ್ಮ ಸಮಸ್ಯೆ ಬಗೆಹರಿಯುವವರೆಗೂ ಮತದಾನ ಮಾಡುವ ಪ್ರಶ್ನೆಯೆ ಇಲ್ಲ ಎಂದು ಹೇಳಿದರು. ನಂತರ ಕೆಲವರು ಶಾಸಕರೆ ಗ್ರಾಮಕ್ಕೆ ಬರಲಿ ಎಂದು ಪಟ್ಟು ಹಿಡಿದರು.
ವಿಷಯ ತಿಳಿದು ಮಧ್ಯಾಹ್ನ ಗ್ರಾಮಕ್ಕೆ ಆಗಮಿಸಿದ ಶಾಸಕ ಸಾ.ರಾ. ಮಹೇಶ್, ಜಿಪಂ ಸದಸ್ಯ ಸಿ.ಜೆ. ದ್ವಾರಕೀಶ್ ಶೀಘ್ರದಲ್ಲಿಯೇ ಕುಡಿಯುನ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದಾಗ ಕೆಲ ಸಮಯ ಅವರೊಂದಿಗೂ ವಾಗ್ವಾದ ನಡೆಸಿದ ಗ್ರಾಮಸ್ಥರು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವವರೆಗೂ ಮತದಾನದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆ. 28ರ ನಂತರ ಅಧಿಕಾರಿಗಳನ್ನು ಕರೆತಂದು ಕಾರ್ಯಯೋಜನೆ ಹಮ್ಮಿಕೊಂಡು, ನೀರು ಸರಬರಾಜು ಮಾಡಲಾಗುತ್ತದೆ. ಆದ್ದರಿಂದ ಮತದಾನ ಮಾಡಿ ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕರು ಮತ್ತು ಅಧಿಕಾರಿಗಳ ಮನವಿ ಭರವಸೆಗೆ ಜಗ್ಗದ ಗ್ರಾಮಸ್ಥರು, ಕಡೆಗೂ ಮತ ಕೇಂದ್ರದತ್ತ ಸುಳಿಯಲಿಲ್ಲ. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯವರು ಬಂದ ದಾರಿಗೆ ಸುಂಕವಿಲ್ಲದಂತೆ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

