ಕೇಂದ್ರ ವೈಫಲ್ಯ ಮುಂದಿಟ್ಟು ಹೋರಾಟ ನಡೆಸಿ
ಕ.ಪ್ರ.ವಾರ್ತೆ ಮೈಸೂರು ಆ. 27
ನಾವು ಮಾಡಿದ ತಪ್ಪಿಗೆ ಜನತೆ ಶಿಕ್ಷೆ ನೀಡಿದ್ದಾರೆ. ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ರುಪಾಯಿ ಅಪಮೌಲ್ಯ ಮುಂದಿಟ್ಟುಕೊಂಡು ಹೋರಾಟ ನಡೆಸಬೇಕು ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಹೇಳಿದರು.
ನಗರದಲ್ಲಿ ಮಂಗಳವಾರ ನಡೆದ ಬಿಜೆಪಿ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿ, ನಾವು ಮಾಡಿದ ತಪ್ಪಿಗೆ ಈಗ ಜನ ಶಿಕ್ಷೆ ನೀಡಿದ್ದಾರೆ. ಹೀಗಾಗಿ ಜನರ ಸಮಸ್ಯೆ ಕೈಗೆತ್ತಿಕೊಂಡು ಹೋರಾಟ ನಡೆಸುವ ಮೂಲಕ ಅವರ ವಿಶ್ವಾಸಗಳಿಸಬೇಕು ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಲು ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ರುಪಾಯಿ ಅಪಮೌಲ್ಯದ ವಿಷಯ ಮುಂದಿಟ್ಟುಕೊಂಡು ಹೋರಾಟ ನಡೆಸಬೇಕು ಎಂದು ಹೇಳಿದರು.
ಮೈಸೂರು ಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಪ್ರಬಲ ಸಚಿವರಿದ್ದಾರೆ. ಆದ್ದರಿಂದ ಸುಲಭವಾಗಿ ಲೋಕಸಭೆ ಚುನಾವಣೆ ಎದುರಿಸುವುದು ಕಷ್ಟ. ಆದ್ದರಿಂದ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಆದ್ಯತೆ ನೀಡಿ, ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಗೆಲವು ಸಾಧಿಸುವ ಮೂಲಕ ನರೇಂದ್ರ ಮೋದಿ ಅವರು ಪ್ರಧಾನಿ ಆಗುವ ಹಾದಿಯನ್ನು ಸುಗಮಗೊಳಿಸಬೇಕು ಎಂದು ಮನವಿ ಮಾಡಿದರು.
ರುಪಾಯಿ ಅಪಮೌಲ್ಯದ ಪರಿಣಾಮದ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ತುರ್ತಾಗಿ ನಡೆಯಬೇಕಿದೆ. ಎನ್ಡಿಎ ಸರ್ಕಾರದ ಅವಧಿಯಲ್ಲಿ ಈರುಳ್ಳಿ ಬೆಲೆ ಏರಿಕೆಯಾದ್ದರಿಂದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಆದರೆ, ಈಗ ಈರುಳ್ಳಿ ಮಾತ್ರವಲ್ಲ, ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ವಿಚಾರ ಮುಂದಿಟ್ಟುಕೊಂಡು ಯುಪಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಮಾತನಾಡಿ, ಚುನಾವಣೆಗಳಲ್ಲಿ ಬಿಜೆಪಿ ಸೋಲಲು ಪಕ್ಷದಲ್ಲಿನ ಒಗ್ಗಟ್ಟಿನ ಕೊರತೆ ಪ್ರಮುಖ ಕಾರಣ. ನಮ್ಮ ಸೋಲಿಗೆ ಕಾಂಗ್ರೆಸ್ ಅಥವಾ ಜೆಡಿಎಸ್ ಕಾರಣವಲ್ಲ. ನಮ್ಮ ತಪ್ಪಿನಿಂದ ಸೋಲಾಗಿದೆ. ಇನ್ನು ಮುಂದಾದರೂ ತಪ್ಪು ತಿದ್ದಿಕೊಂಡು ಪಕ್ಷ ಸಂಘಟಿಸಬೇಕು. ಜನತೆ ಅವಕಾಶವಾದಿ ರಾಜಕೀಯ ಒಪ್ಪುವುದಿಲ್ಲ. ಆದ್ದರಿಂದ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುವ ಮೂಲಕ ಜನರ ವಿಶ್ವಾಸ ಗಳಿಸಬೇಕು. ಆದ್ದರಿಂದ ಜಿಲ್ಲಾಧ್ಯಕ್ಷರು ತಿಂಗಳಿಗೊಂದು ಪತ್ರಿಕಾಗೋಷ್ಠಿ, ಮೂರು ತಿಂಗಳಿಗೊಂದು ಮಹತ್ವದ ಹೋರಾಟ ನಡೆಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾನ, ಕಾರ್ಯದರ್ಶಿ ಮೈ.ವಿ. ರವಿಶಂಕರ್, ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್ ಗೌಡ, ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಮಾಜಿ ಸದಸ್ಯರಾದ ಎಸ್.ಜಿ. ಮೇದಪ್ಪ, ಸಿ. ರಮೇಶ್, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಡಿ. ಮಹೇಂದ್ರ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

