ವಿಪತ್ತು ಪರಿಹಾರ ಕೇಂದ್ರ ಸ್ಥಾಪನೆ ಬಗ್ಗೆ ಸುಳ್ಳು ಮಾಹಿತಿ
ಕ.ಪ್ರ. ವಾರ್ತೆ, ಮೈಸೂರು, ಜು.13
ರಾಜ್ಯದ ಆಯಾ ಜಿಲ್ಲೆಗಳಲ್ಲಿ ಉಂಟಾಗಬಹುದಾದ ಪ್ರಕೃತಿ ವಿಕೋಪಗಳು ಮತ್ತು ಅವುಗಳಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಜಿಲ್ಲಾ ವಿಪತ್ತು ಪರಿಹಾರ ಕೇಂದ್ರ ಸ್ಥಾಪಿಸಿರುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಸುಳ್ಳು ಮಾಹಿತಿ ನೀಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮೈಸೂರು ವೈದ್ಯಕೀಯ ಪರಿಹಾರ ಸಮಾಜವು ಮೂಲ ಸೌಕರ್ಯ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಮಾಡಿದೆ.
ಗುಜರಾತ್ನಲ್ಲಿ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಪಾಠ ಕಲಿತ ಕೇಂದ್ರ ಸರ್ಕಾರ ವಿಪತ್ತುಗಳ ಸಮಯದಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನೀತಿ ರೂಪಿಸಿ ಪ್ರತಿ ಜಿಲ್ಲೆಯಲ್ಲಿಯೂ ಈ ಕೇಂದ್ರ ಸ್ಥಾಪಿಸುವಂತೆ ಸೂಚಿಸಿತ್ತು. ಆ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಸವರಾಜು ಅವರು ಕಾರ್ಯರೂಪಕ್ಕೆ ತರುವ ಹೊತ್ತಿಗೆ ಅವರು ವರ್ಗವಾಗಿ ಹೋದರು. ನಂತರ ಕೇಂದ್ರ ಸ್ಥಾಪನೆ ನೆನೆಗುದಿಗೆ ಬಿದ್ದಿತು.
ವಾಸ್ತವ ಹೀಗಿರುವಾಗ ಜಿಲ್ಲಾಧಿಕಾರಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಮಾಹಿತಿ ಹಕ್ಕು ಆಯೋಗಕ್ಕೆ ಕೇಂದ್ರ ಸ್ಥಾಪನೆಯಾಗಿದೆ ಎಂದು ಹಾಗೂ ಸಹಾಯವಾಣಿ 1077 ಎಂದೂ ಮಾಹಿತಿ ನೀಡಿದ್ದಾರೆ. ಆದರೆ, 2011ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಹರ್ಷ ಗುಪ್ತ ಅವರು ಪ್ರತಿ ತಿಂಗಳ ಮೂರನೇ ಗುರುವಾರ ಫೋನ್ ಇನ್ ಕಾರ್ಯಕ್ರಮ ನಡೆಸುವಾಗ 1077 ಸಂಖ್ಯೆ ಬಳಸುತ್ತಿದ್ದರು ಎಂದಿದ್ದಾರೆ.
ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದಂತಹ ಪ್ರಮುಖ ಸಾರ್ವಜನಿಕ ಹಿತಾಸಕ್ತಿ ವಿಷಯದಲ್ಲಿ ಜಿಲ್ಲಾಡಳಿತ ಸುಳ್ಳು ಮಾಹಿತಿ ನೀಡಿರುವುದನ್ನು ತೀವ್ರವಾಗಿ ಪರಿಗಣಿಸಿ, ಸುಳ್ಳು ಮಾಹಿತಿ ನೀಡಿದ ಅಧಿಕಾರಿಯ ವಿರುದ್ಧ ಮಾಹಿತಿ ಹಕ್ಕು ಕಾಯಿದೆ ಕಲಂ 20ರಲ್ಲಿ ಸೂಚಿಸಿರುವಂತೆ ಜುಲ್ಮಾನೆ ವಿಧಿಸುವುದೇ ಅಲ್ಲದೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಡಾ.ಎಸ್.ಪಿ. ತಿರುಮಲರಾವ್ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

