ಮೈಸೂರು

ಅಧಿವೇಶನದ ನಂತರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Published On :

ಕ.ಪ್ರ.ವಾರ್ತೆ   ಟಿ.ನರಸೀಪುರ   ಜು. 20
ಲೋಕಸಭೆ ಉಪಚುನಾವಣೆ ಮತ್ತು ವಿಧಾನಸಭೆ ಅಧಿವೇಶನ ಮುಗಿದ ನಂತರ ನರಸೀಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ತಾಪಂ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿ ರಾಷ್ಟ್ರೀಯ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಚೆಕ್ಕನ್ನು ವಿತರಿಸಿ ಮಾತನಾಡಿದ ಅವರು, ವಿಧಾನಸಭೆ ಅಧಿವೇಶನಕ್ಕೆ ಬಿಡುವಿದ್ದ ಇಂದಿನ ಸಮಯವನ್ನು ತಾವು ಕ್ಷೇತ್ರದ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಬಳಸಿಕೊಳ್ಳುತ್ತಿದ್ದೇನೆ. ಆಗಸ್ಟ್ನಲ್ಲಿ ಪೂರ್ಣಗೊಳ್ಳುವ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ, ನೂತನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ಧಾರಿ 212ರ ಕಪಿಲಾ ನದಿಗೆ ನೂತನ ಸೇತುವೆ ನಿರ್ಮಾಣಗೊಂಡಿದೆ. ಪಕ್ಕದ ಕಾವೇರಿ ನದಿಗೂ ನೂತನ ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸಲಾಗುವುದು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲಾಗಿದೆ. ಪುರಸಭೆ ಆಡಳಿತವನ್ನು ಜಾರಿಗೆ ತರಬೇಕೆಂಬ ಚಿಂತನೆ ಇದೆ. ಹತ್ತಾರು ಅಭಿವೃದ್ಧಿ ಕಾಮಗಾರಿಗಳಿಗೆ ಅಧಿವೇಶನದ ಬಳಿಕ ಸಿಎಂ ಸಿದ್ದರಾಮಯ್ಯ ಅವರೆ ಆಗಮಿಸಿ ಶಂಕುಸ್ಥಾಪನೆ ನೆರವೇರಿಸುವರು ಎಂದರು.
ಸಚಿವರಿಗೆ ಸನ್ಮಾನ: ತಾಪಂ ಸಭಾಂಗಣಕ್ಕೆ ಆಗಮಿಸಿದ ಸಚಿವರನ್ನು ತಾಪಂ ಅಧ್ಯಕ್ಷ ತುಂಬಲ ಅಂದಾನಿ ಸನ್ಮಾನಿಸಿ, ಗೌರವಿಸಿದರು. ಸಾರ್ವಜನಿಕರ ಕುಂದು ಕೊರತೆ ಆಲಿಸಲು ಕುಳಿತ ಮಹದೇವಪ್ಪ ಅವರಿಗೆ ದೂರುಗಳ ಸುರಿಮಳೆ ಹರಿದು ಬಂದವು. ಪಡಿತರ ಚೀಟಿ ಸಮಸ್ಯೆ, ಜಮೀನು ವಿವಾದ, ಮೂಲ ಸೌಕರ್ಯಗಳ ಕೊರತೆ ಬಗೆಹರಿಸುವಂತೆ ಸಾರ್ವಜನಿಕರು ನೂರಾರು ಅರ್ಜಿ ಸಲ್ಲಿಸಿದರು. ಅರ್ಜಿ ಸ್ವೀಕರಿಸಿ ಸಚಿವರು ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿಯೇ ಸಮಸ್ಯೆ ಇತ್ಯರ್ಥಪಡಿಸುವಂತೆ ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯಿಂದ ರಾಷ್ಟ್ರೀಯ ಭದ್ರತಾ ಯೋಜನೆಯಡಿ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಸಹಾಯ ಧನ ಚೆಕ್ಕನ್ನು ವಿತರಿಸಿದರು.
ಕಾಂಗ್ರೆಸ್ ಯುವ ಮುಖಂಡ ಸುನಿಲ್ ಬೋಸ್, ಎಪಿಎಂಸಿ ಅಧ್ಯಕ್ಷ ಎಂ. ರಾಜು, ಜಿಪಂ ಸದಸ್ಯರಾದ ಕೆ. ಮಹದೇವ, ಎಂ. ಸುಧಾ ಮಹದೇವಯ್ಯ, ರೇಣುಕಾ ನಾಗರಾಜು, ತಾಪಂ ಅಧ್ಯಕ್ಷ ತುಂಬಲ ಅಂದಾನಿ, ಉಪಾಧ್ಯಕ್ಷೆ ಸುಜಾತ ವೆಂಕಟೇಶ್, ಸದಸ್ಯರಾದ ಸಿ.ವೆಂಕಟೇಶ್, ಮಲ್ಲಾಜಮ್ಮ, ನಟರಾಜು, ಶಿವಮ್ಮ ಮಹದೇವ, ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಸ್ವಾಮಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.