ಈ ಬಾರಿ ಸ್ವಾತಂತ್ರ್ಯೋತ್ಸವಕ್ಕೆ ಮೆರುಗು: ಡಿಸಿ ಶಿಖಾ ಮನವಿ
ಕ.ಪ್ರ.ವಾರ್ತೆ , ಮೈಸೂರು , ಜು. 30
ನಗರದಲ್ಲಿ ಆ.15 ರಂದು 67ನೇ ಸ್ವಾತಂತ್ರ್ಯ ದಿನಾಚರಣೆಗೆ ಹೆಚ್ಚಿನ ಮೆರುಗು ನೀಡಲು ಜಿಲ್ಲಾಧಿಕಾರಿ ಸಿ. ಶಿಖಾ ಮನವಿ ಮಾಡಿದ್ದಾರೆ.
ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆ.14 ಮತ್ತು 15 ರಂದು ಮೈಸೂರು ಅಂಗಡಿ, ಉದ್ದಿಮೆಗಳಿಗೆ, ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರವನ್ನು ಸ್ವಯಂಸ್ಫೂರ್ತಿಯಿಂದ ಮಾಡಬೇಕು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಂಚುವಂತೆ ಅವರು ಕೋರಿದ್ದಾರೆ.
ಪ್ಲಾಸ್ಟಿಕ್ ಮತ್ತು ಕಾಗದದ ರಾಷ್ಟ್ರಧ್ವಜವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬಳಸುತ್ತಿದ್ದು, ಇದು ರಾಷ್ಟ್ರಧ್ವಜಕ್ಕೆ ಅಗೌರವ, ಅವಮಾನ ಆಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಎಲ್ಲರೂ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜ ಬಳಸದೆ ಬಟ್ಟೆಯ ರಾಷ್ಟ್ರಧ್ವಜ ಬಳಸುವಂತೆ ಸೂಚಿಸಿದ್ದಾರೆ.
ನಗರದ ವ್ಯಾಪಾರಸ್ಥರೂ ಬಟ್ಟೆಯ ರಾಷ್ಟ್ರಧ್ವಜವನ್ನು ಮಾತ್ರ ಮಾರಾಟ ಮಾಡಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಹಾಜರಾತಿ ಕಡ್ಡಾಯ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಎಲ್ಲ ಇಲಾಖೆಗಳ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಆ. 15ರ ಬೆಳಗ್ಗೆ 8ಕ್ಕೆ ತಮ್ಮ ತಮ್ಮ ಕಚೇರಿ, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಓವಲ್ ಕ್ರೀಡಾಂಗಣದಲ್ಲಿ ನಡೆಯುವ ಮುಖ್ಯ ಸಮಾರಂಭದಲ್ಲಿ ತಮ್ಮ ಸಿಬ್ಬಂದಿಯೊಂದಿಗೆ ತಪ್ಪದೇ ಭಾಗವಹಿಸಬೇಕು. ಈ ಸಮಾರಂಭಕ್ಕೆ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇರಿಸಲಾಗುವ ಹಾಜರಾತಿ ವಹಿಯಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು. ಆ ದಿನ ಯಾವುದೇ ಸಿಬ್ಬಂದಿಗೆ ರಜೆ ಅಥವಾ ಅನುಮತಿ ನೀಡಬಾರದು. ನಗರದ ಓವಲ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಗರದ ನಾಗರಿಕರು ಸ್ವಯಂಸ್ಫೂರ್ತಿಯಿಂದ ಭಾಗವಹಿಸಿ ಯಶಸ್ವಿಗೊಳಿಸುವಂತೆ ಶಿಖಾ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

