ಮೈಸೂರು

ನಗರಕ್ಕೆ 3 ಹೊಸ ಸಂಚಾರಿ ಠಾಣೆ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಜು. 30
ನಗರಕ್ಕೆ ಹೊಸದಾಗಿ ಮೂರು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಮೇಲ್ಮನೆಯಲ್ಲಿ ಜೆಡಿಎಸ್ ಸದಸ್ಯ ಸಂದೇಶ್ ನಾಗರಾಜ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ನಗರದ ಸಂಚಾರ ನಿಯಂತ್ರಣದ ದೃಷ್ಟಿಯಿಂದ 36 ರಸ್ತೆಗಳನ್ನು ಏಕಮುಖ ಸಂಚಾರ ರಸ್ತೆಗಳನ್ನಾಗಿ ಮಾಡಲಾಗಿದೆ. ಹೊರರಾಜ್ಯದ ಪ್ರವಾಸಿ ವಾಹನಗಳು ಆಕಸ್ಮಿಕವಾಗಿ ಏಕಮುಖ ರಸ್ತೆಯಲ್ಲಿ ಚಲಿಸಿದರೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಕಳುಹಿಸಿಕೊಡಲಾಗುವುದು. ಅಗತ್ಯವಿರುವ ಕಡೆ ಮತ್ತು ಪ್ರವಾಸಿ ತಾಣಗಳಲ್ಲಿ ರಸ್ತೆಗಳ ಮಾರ್ಗಸೂಚಿ ಫಲಕ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ನಗರದ ಸಂಚಾರ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಪ್ರವಾಸೋದ್ಯಮ, ನಗರಪಾಲಿಕೆ ಹಾಗೂ ಸಂಚಾರ ತಜ್ಞರ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಶೀಘ್ರ ಪೂರ್ಣ: ಮೈಸೂರಿನ ಹೊರವರ್ತುಲ ರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಕಾಮಗಾರಿ ಪೂರ್ಣಗೊಂಡಿರುವ ಪ್ಯಾಕೇಜ್ 4ರ ಭಾಗದ ರಸ್ತೆಯಲ್ಲಿ ಬೀದಿ ದೀಪ ಅಳವಡಿಸಲಾಗಿದೆ. ಇನ್ನುಳಿದ 3 ಪ್ಯಾಕೇಜ್‌ಗಳ ಕಾಮಗಾರಿ ಪೂರ್ಣಗೊಂಡ ನಂತರ ತಕ್ಷಣ ಬೀದಿ ದೀಪ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಸಂದೇಶ್ ನಾಗರಾಜ್ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸೊರಕೆ, ವರ್ತುಲ ರಸ್ತೆಯನ್ನು 4 ಪಥದಿಂದ ಆರು ಪಥಕ್ಕೆ ಪರಿವರ್ತಿಸಲು ಪ್ಯಾಕೇಜ್ 1, 2 ಮತ್ತು 3ರ ಕಾಮಗಾರಿಗಳು ವಿಳಂಬವಾದ ಕಾರಣ ಟೆಂಡರ್ ರದ್ದುಪಡಿಸಲಾಗಿದೆ. ಈಗಾಗಲೇ ಹೊಸದಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ಯಾಕೇಜ್ 1 ರಲ್ಲಿ ಶೇ.75, 2ರಲ್ಲಿ ಶೇ. 90, 3ರಲ್ಲಿ ಶೇ. 50 ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು. ಹೊರ ವರ್ತುಲ ರಸ್ತೆ ಟೆಂಡರ್ ಮೊತ್ತ 210.84 ಕೋಟಿ ಆಗಿದೆ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.