ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ಕ.ಪ್ರ.ವಾರ್ತೆ ನಂಜನಗೂಡು ಜೂ. 8
ಅಭಿವೃದ್ಧಿ ಕೆಲಸಗಳು ಭರದಿಂದ ಸಾಗಲು ಪಣ ತೊಟ್ಟು ಹಾಗೂ ಮಾದರಿ ಕ್ಷೇತ್ರವನ್ನಾಗಿ ಮಾಡಲು ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅಧಿಕಾರಿಗಳಿಗೆ ಆದೇಶಿಸಿದರು.
ಇಲ್ಲಿನ ದಾಸೋಹ ಭವನದಲ್ಲಿ ಶನಿವಾರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕೆಲಸಗಳು ಪೂರ್ಣಗೊಳ್ಳಬೇಕು, ಪಟ್ಟಣಕ್ಕೆ ಹೆಚ್ಚಿನ ಅನುದಾನ ತರಲು ಯೋಜನೆ ರೂಪಿಸಿದರೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳ ಮಾಹಿತಿಯನ್ನು ಮುಂದಿನ ಬಜೆಟ್ನಲ್ಲಿ ಸೇರಿಸಲು ಸಹಕಾರಿಯಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಸಿಮಂದಿರದ ಸುಂದರ ಪರಿಸರದಲ್ಲಿ ಬಟಾನಿಕಲ್ ಗಾರ್ಡನ್ ಮಾದರಿಯಲ್ಲಿ ಸಸ್ಯಕಾಶಿ ಮಾಡಲು ಉದ್ದೇಶಿಸಿದ್ದು, ಈಗಾಗಲೇ ರೂಪುರೇಷೆ ಸಿದ್ಧಪಡಿಸಿದೆ. ಅರಣ್ಯ ಇಲಾಖೆ ಕಾವೇರಿ ನೀರಾವರಿ, ಸಣ್ಣ ನೀರಾವರಿ, ಪುರಸಭೆಯವರು ಈ ಕಾಮಗಾರಿ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಆರ್ಟಿಇ ಕಾಯ್ದೆ ಪ್ರಕಾರ 331 ಮಕ್ಕಳಿಗೆ ಶಾಲೆಗೆ ಸೇರಿಸಿಕೊಳ್ಳಬೇಕಾಗಿದ್ದು, 31 ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಂಡಿಲ್ಲ ಎಂಬುದು ಗಮನಕ್ಕೆ ಬಂದಿದ್ದು, ಅಂತಹ ಶಾಲೆಗಳ ವಿರುದ್ಧ ನೋಟೀಸ್ ಜಾರಿ ಮಾಡಿ, ಕಠಿಣ ಕ್ರಮ ಕೈಗೊಳ್ಳುವಂತೆ ಡಿಡಿಪಿಐ ಬಸವರಾಜು ಅವರಿಗೆ ಸೂಚಿಸಿದರು.
ತಾಲೂಕಿನಲ್ಲಿ ಮದುವೆಯಾಗದೆ 40 ವರ್ಷ ಮೇಲ್ಪಟ್ಟ ಮಹಿಳೆಯರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅಂತಹವರಿಗೆ ಸರ್ಕಾರದಿಂದ ಒಂದು ಸಾವಿರ ಮಾಸಾಶನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತಾಲೂಕಿನಲ್ಲಿ 1,030 ಅರ್ಹ ಫಲಾನುಭವಿಗಳಿದ್ದಾರೆಂದು ಜಿಲ್ಲಾ ಶಿಶು ಮಕ್ಕಳ ಕಲ್ಯಾಣ ಅಧಿಕಾರಿ ಚಂದ್ರಪ್ಪ ತಿಳಿಸಿದರು.
ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸದಂತೆ ಅಧಿಕಾರಿಗಳು ಜಾಗೃತರಾಗಬೇಕು. ತಾಲೂಕಿನಾದ್ಯಂತ ಡೆಂಘೀ ಜ್ವರ ಹರಡದಂತೆ ಎಚ್ಚರ ವಹಿಸಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ರಾಮೇಗೌಡ, ಜಿಪಂ ಸಿಇಒ ಗೋಪಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗನಾಯ್ಕ, ಡಿಡಿಪಿಐ ಬಸವರಾಜು, ಉಪವಿಭಾಗಾಧಿಕಾರಿ ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

