ಮೈಸೂರು

ವಲಸೆಯಿಂದ ಬಾಲಕಾರ್ಮಿಕರು ಹೆಚ್ಚಳ

Published On :

ಕ.ಪ್ರ.ವಾರ್ತೆ    ಮೈಸೂರು    ಜೂ. 12
ವಿವಿಧ ಕಾರಣಗಳಿಗಾಗಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ವಲಸೆ ಬರುವವರು ಹೆಚ್ಚಾಗುತ್ತಿದ್ದಾರೆ. ಇದರಿಂದ ಬಾಲಕಾರ್ಮಿಕರು ಹೆಚ್ಚಾಗುವ ಆತಂಕ ಕಾಡುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮೋಹನ್ ಶ್ರೀಪಾದ್ ಸಂಕೊಳ್ಳಿ ಹೇಳಿದರು.
ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂಸೇವಾ ಸಂಸ್ಥೆಗಳು ಸಂಯುಕ್ತವಾಗಿ ಬುಧವಾರ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
1981 ರಲ್ಲಿ 6 ಲಕ್ಷ, 1991ರಲ್ಲಿ 4.97 ಲಕ್ಷ ಬಾಲಕಾರ್ಮಿಕರು ಇದ್ದರು. ಈ ಅಂಕಿ- ಅಂಶಗಳನ್ನು ಗಮನಿಸಿದರೆ ಬಾಲಕಾರ್ಮಿಕರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ, ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಬಾಲಕಾರ್ಮಿಕರು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಶಿಕ್ಷಣ ನೀಡಿ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಮಾತ್ರವಲ್ಲ, ಸಾರ್ವಜನಿಕರ ಪಾತ್ರವೂ ಮುಖ್ಯ. ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಹೀಗಾಗಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕು. ಸಂವಿಧಾನದ ಪ್ರಕಾರ ಎಲ್ಲರಿಗೂ ಗೌರವಯುತವಾಗಿ ಬದುಕುವ ಹಕ್ಕಿದೆ. ಪ್ರಾಣಿಗಳಂತೆ ಯಾರೂ ಬದುಕಬಾರದು ಎಂದರು.
ಇಚ್ಛಾಶಕ್ತಿ ಕೊರತೆ: ಗಣಿಗಾರಿಕೆ, ಅಪಾಯಕಾರಿ ಕೈಗಾರಿಕೆಗಳು ಸೇರಿದಂತೆ ವಿವಿಧೆಡೆ 14 ವರ್ಷಕ್ಕಿಂದ ಕಡಿಮೆ ಇರುವವರನ್ನು ದುಡಿಸಬಾರದು. ಇದು ಅಪರಾಧ ಕೂಡ. ಬಾಲಕಾರ್ಮಿಕ ಪದ್ಧತಿ ತಡೆಗೆ ಹಲವಾರು ಕಾನೂನು ಇದೆ.
ಇದನ್ನು ಸಮಪರ್ಕವಾಗಿ ಜಾರಿಗೊಳಿಸುವ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿಯೇ ಬಾಲಕಾರ್ಮಿಕರು, ಬಾಲ್ಯವಿವಾಹ, ವೇಶ್ಯಾವಾಟಿಕೆಯಂತಹ ಚಟುವಟಿಕೆ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.
ಬಾಲಕಾರ್ಮಿಕರ ಪುನಶ್ಚೇತನಕ್ಕಾಗಿ ಸರ್ಕಾರ ನೀಡುತ್ತಿರುವ ಅನುದಾನ ಸರಿಯಾಗಿ ಬಳಕೆ ಆಗುತ್ತಿಲ್ಲ. ಇದು ಕಾರ್ಮಿಕ ಇಲಾಖೆ ಮಾತ್ರವಲ್ಲ, ಎಲ್ಲ ಇಲಾಖೆಗಳಲ್ಲೂ ಇಂತಹ ಸಮಸ್ಯೆ ಇದೆ ಎಂದು ಹೇಳಿದರು.
ಮಕ್ಕಳು ದೇವರು... ಜಿಲ್ಲಾಧಿಕಾರಿ ಡಾ. ರಾಮೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ದೇವರು ಇದ್ದಂತೆ. ಅವರ ಕೈಯಲ್ಲಿ ದುಡಿಸಬೇಡಿ. ಮಕ್ಕಳು ಬಹುಬೇಗ ರೋಗಗಳಿಗೆ ತುತ್ತಾಗುತ್ತಾರೆ. ಬಾಲಕಾರ್ಮಿಕರ ಬಗ್ಗೆ ಜನರಿಗೆ ಅರಿವು ಇರಬೇಕು. ಇದೊಂದು ಸಾಮಾಜಿಕ ಪಿಡುಗು ಎಂದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನ ಮಂಡಳಿಯು 1986 ರಿಂದಲೇ ಅಸ್ತಿತ್ವದಲ್ಲಿದೆ. ರಾಷ್ಟ್ರೀಯ ಮತ್ತು ರಾಜ್ಯ ಬಾಲಕಾರ್ಮಿಕ ಯೋಜನೆಗಳಿಂದ ಸಾಕಷ್ಟು ಅನುದಾನ ಬರುತ್ತಿದೆ. ಜಿಲ್ಲೆಯಲ್ಲಿ 185 ಮಕ್ಕಳು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಸ್ವಯಂ ಸೇವಾ ಸಂಸ್ಥೆಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುತ್ತಿವೆ ಎಂದು ಹೇಳಿದರು.
ಇದೇ ವೇಳೆ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತರಾದ ಅರುಣ್, ಗುರುಕಿರಣ್ ತಮ್ಮ ಅಭಿಪ್ರಾಯ ಹಂಚಿಕೊಂಡರು. ನಂತರ ಬಾಲಕಾರ್ಮಿಕ ಕಾಯ್ದೆ ಹಾಗೂ ಬಾಲಕಾರ್ಮಿಕತೆಯ ನಿರ್ಮೂಲನೆಯಲ್ಲಿ ಸಾರ್ವಜನಿಕ ಪಾತ್ರ ಕುರಿತು ಕಾರ್ಯಾಗಾರ ನಡೆಯಿತು. ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್, ಎಸ್ಪಿ ಆರ್. ದಿಲೀಪ್, ಜಿಪಂ ಸಿಇಒ ಪಿ.ಎ. ಗೋಪಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್, ಉಪ ವಿಭಾಗಾಧಿಕಾರಿ ಬಸವರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎನ್.ಆರ್. ವಿಜಯ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜೇಶ್‌ಗೌಡ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗಸ್ವಾಮಿ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಡಿ.ಡಿ. ರವಿಕುಮಾರ್, ಮೈಸೂರು ತಹಸೀಲ್ದಾರ್ ನವೀನ್ ಜೋಸೆಫ್, ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ನಂದಕುಮಾರ್ ಇದ್ದರು.


ನಂಗೆ ಎಂಜಿನಿಯರ್ ಆಗೋ ಆಸೆ...
ನಾನು ಮೈಸೂರು ಬಸ್ ನಿಲ್ದಾಣ ಬಳಿ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದೆ. ಯಾರೋ ನನ್ನನ್ನು ಹಿಡಿದು ಶಾಲೆಗೆ ಕರೆದುಕೊಂಡು ಹೋದರು. ಎಸ್ಸೆಸ್ಸೆಲ್ಸಿಯಲ್ಲಿ ಶೇ. 80 ಅಂಕ ಪಡೆದು ಪಾಸ್ ಆಗಿದ್ದೆ. ಮುಂದೆ ಓದಲು ಹಣಕಾಸಿನ ತೊಂದರೆಯಾದಾಗ ಮಾಜಿ ಮೇಯರ್ ಎಚ್.ಎನ್. ಶ್ರೀಕಂಠಯ್ಯ ಅವರು ಸಹಾಯ ಮಾಡಿದರು. ಈಗ ದ್ವಿತೀಯ ಪಿಯುಸಿಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದು, ಮರು ಪರೀಕ್ಷೆ ಬರೆಯಬೇಕಿದೆ. ಎಂಜಿನಿಯರ್ ಆಗಬೇಕೆಂಬ ಆಸೆ ಇದೆ.
- ಅರುಣ್, ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತನಾದವನು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.