ಸವಲತ್ತು ಉಳ್ಳವರ ಪಾಲಾದರೆ ಕ್ರಮ
ಕ.ಪ್ರ.ವಾರ್ತೆ ಕೆ.ಆರ್. ನಗರ ಜೂ. 13
ಸರ್ಕಾರದ ಸವಲತ್ತುಗಳು ಉಳ್ಳವರ ಪಾಲಾಗುತ್ತಿದ್ದು, ಒಂದೇ ಕುಟುಂಬದ ಹಲವರು ಅನುಕೂಲ ಪಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮುಂದೆ ಈ ರೀತಿ ಅಕ್ರಮ ಕಂಡುಬಂದರೆ ಸಂಬಂಧಿತ ಇಲಾಖೆಯ ಮುಖ್ಯಸ್ಥರನ್ನೆ ಹೊಣೆಗಾರರನ್ನಾಗಿ ಮಾಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಾ.ರಾ. ಮಹೇಶ್ ಎಚ್ಚರಿಕೆ ನೀಡಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಉತ್ಪನ್ನ ಮಾರುಕಟ್ಟೆಗೆ ನಿವೇಶನಕ್ಕಾಗಿ 70 ಮಂದಿ ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದು, 70 ಮಂದಿ ಸದಸ್ಯರಿದ್ದರು. ಅಗತ್ಯ ಇರುವಷ್ಟು ಅರ್ಜಿಗಳು ಬಂದಿಲ್ಲ. ಕೂಡಲೇ ಈ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಅಗತ್ಯ ಪ್ರಚಾರ ಮಾಡಿ ಹೊಸಾದಾಗಿ ಅರ್ಜಿ ಆಹ್ವಾನಿಸಿ ಅನುಕೂಲ ಕಲ್ಪಿಸುವುದರ ಜತೆಗೆ, ಸಾಲಬಾಧೆಯಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ, ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸುವುದನ್ನು ಕಾಯದೆ, ಪರಿಹಾರ ಧನ ವಿತರಿಸಿ ಎಂದು ಸೂಚಿಸಿದರು.
ಕೃಷಿ ಅಧಿಕಾರಿಗಳಿಗೆ ಎಚ್ಚರಿಕೆ: ಕಳೆದ ಸಾಲಿನಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಬಾರದ ಕಾರಣ ತಾಲೂಕಿನಲ್ಲಿ 11 ಕೋಟಿಗೂ ಅಧಿಕ ಬೆಳೆ ನಷ್ಟ ಸಂಭವಿಸಿದೆ. ಈ ಬಾರಿ ಮಳೆ ಬೀಳುವ ಪ್ರಮಾಣ ಮತ್ತು ಬಿತ್ತಬೇಕಾದ ಬಿತ್ತನೆ ಬೀಜಗಳ ಬಗ್ಗೆ ಕೃಷಿ ಇಲಾಖೆಯವರು ಸಕಾಲಕ್ಕೆ ರೈತರಿಗೆ ಮಾಹಿತಿ ನೀಡುವುದರ ಜತೆಗೆ, ಸಕಾಲದಲ್ಲಿ ರಸಗೊಬ್ಬರ ತಲುಪುವಂತೆ ಮಾಡಬೇಕು. ಯಾವುದೇ ಕಾರಣಕ್ಕೂ ಕಾಳ ಸಂತೆಯಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಅಕ್ರಮ ಕಂಡುಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.
ತಾಲೂಕಿನ ಕೊಡಿಯಾಲ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಗೆ ಸಂಬಂಧಿಸಿದಂತೆ ಸವರ್ಣಿಯರು ಮತ್ತು ದಲಿತರ ನಡುವೆ ಘರ್ಷಣೆಯಾಗಿ ಎರಡು ದಿನ ಕಳೆದಿದ್ದರೂ ಯಾವುದೆ ಕ್ರಮ ತೆಗೆದುಕೊಂಡಿಲ್ಲ ಎಂದು ಸಿಡಿಪಿಒ ಮತ್ತು ಸಮಾಜ ಕಲ್ಯಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ನಿಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿ, ಇಲ್ಲದಿದ್ದರೆ ತೊಂದರೆಗೆ ಸಿಲುಕುತ್ತೀರಿ ಎಂದು ಹರಿಹಾಯ್ದರು.
ಭೂಸೇನಾ ನಿಗಮ ಮತ್ತು ನಿರ್ಮಿತಿ ಕೇಂದ್ರದವರು ನಿರ್ವಹಿಸುವ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದಿಲ್ಲ ಎಂದ ಶಾಸಕರು, ಸರ್ಕಾರದ ಸ್ವಾಮ್ಯದಲ್ಲಿರುವುದರಿಂದ ಏನು ಮಾಡಲು ಸಾಧ್ಯವಾಗುತ್ತಿಲ್ಲ. ಯಾವುದೇ ಇಲಾಖೆಯ ಕಾಮಗಾರಿಗಳಾದರೂ ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಂಡು ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಹೇಳಿದರು.
ಪ್ರೋತ್ಸಾಹಧನ ನೀಡಿ: ಸಮಾಜಕಲ್ಯಾಣ ಇಲಾಖೆಯಲ್ಲಿ ಅಂತರ್ಜಾತಿ ವಿವಾಹ ಆದವರಿಗೆ ನೀಡುವ ಪ್ರೋತ್ಸಾಹ ಧನವನ್ನು ಗ್ರಾಮ ಸಭೆಗಳಲ್ಲಿ ಜನಪ್ರತಿನಿಧಿಗಳ ಮೂಲಕ ನೀಡಿದರೆ ಇತರರಿಗೆ ಪ್ರೇರಣೆಯಾಗಲಿದೆ. ಜತೆಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಇದೆ ಮಾದರಿಯಲ್ಲಿ ನೀಡಬೇಕು. ಆಗ ಜನರಿಗೆ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ತಿಳಿವಳಿಕೆ ಮತ್ತು ಅರಿವು ಮೂಡುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ತಾಪಂ ಅಧ್ಯಕ್ಷೆ ಕವಿತಾ ರವಿ, ಉಪಾಧ್ಯಕ್ಷೆ ಶಕುಂತಲಾ ರಮೇಶ್, ಜಿಪಂ ಸದಸ್ಯರಾದ ಸುಮಿತ್ರಾ ಗೋವಿಂದರಾಜು, ಪುಷ್ಪಲತಾ ರಮೇಶ್, ಕಲ್ಪನಾ ಧನಂಜಯ, ರಾಜಯ್ಯ, ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾದಿಕ್ಖಾನ್, ಮಾಜಿ ಅಧ್ಯಕ್ಷ ನಾಗಣ್ಣ, ಮಾಜಿ ಉಪಾಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ರವಿ, ಪುರಸಭಾ ಸದಸ್ಯರಾದ ಉಮೇಶ್, ಶಿವಕುಮಾರ್, ಕೆ.ಎಲ್. ಜಗದೀಶ್, ತಹಸೀಲ್ದಾರ್ ಬಿ.ಎನ್. ವೀಣಾ, ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ. ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

