ಮೈಸೂರಿನಲ್ಲಿ ಸರಣಿ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಜೂ. 17
ರೋಗಿಯೊಬ್ಬರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಹಾಗೂ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಕೆ.ಆರ್. ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಸೋಮವಾರ ಪ್ರತಿಭಟಿಸಿದರು.
ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯದ ಅಧಿಸೂಚನೆಯಂತೆ ವೈದ್ಯೋಪಚಾರ ಸಿಬ್ಬಂದಿಯ ಮೇಲಿನ ಹಿಂಸಾಚಾರವನ್ನು ಮತ್ತು ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದನ್ನು ನಿಷೇಧಿಸಿ ಕಳೆದ 2009 ರಲ್ಲೆ ಆದೇಶಿಸಲಾಗಿದೆ. ಆದರೆ ಇದುವರೆಗೂ ಜಾರಿಗೆ ಬಂದಿಲ್ಲ ಎಂದು ಆರೋಪಿಸಿದರು.
ರಾಜ್ಯ, ಕೇಂದ್ರ ಅಥವಾ ಸ್ಥಳೀಯ ಸಂಸ್ಥೆಯ ನಿಯಂತ್ರಣದಲ್ಲಿರುವ ವೈದ್ಯೋಪಚಾರ ಒದಗಿಸುವ ಸಂಸ್ಥೆಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿನ ಸಿಬ್ಬಂದಿ ಹಿಂಸಿಸುವುದು ಅಥವಾ ಸಂಸ್ಥೆಗೆ ಹಾನಿಯುಂಟು ಮಾಡಬಾರದು ಎಂದು ಸರ್ಕಾರ ಆದೇಶಿಸಿದ್ದರೂ ಇದುವರೆಗೂ ತಮಗೆ ಯಾವುದೇ ರೀತಿಯ ರಕ್ಷಣೆ ಇಲ್ಲದಂತಾಗಿದೆ. ಆದ್ದರಿಂದ ಕೂಡಲೇ ತಮಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ನಮ್ಮ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಿಲ್ಲ. ಆದರೂ ನಮ್ಮ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಈ ಬಗ್ಗೆ ಕೂಡಲೇ ಸಂಬಂಧಿಸಿದವರು ಕ್ರಮ ಕೈಗೊಂಡು ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.
ದಸಂಸ ಕಾರ್ಯಕರ್ತರು
ಗ್ರಾಮೀಣ ಭಾಗದ ಮುಗ್ಧ ಜನರು ಹಾಗೂ ನಗರದ ನಿರುದ್ಯೋಗಿ ವಿದ್ಯಾವಂತರನ್ನು ದುರುಪಯೋಗ ಪಡಿಸಿಕೊಂಡು ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ಗ್ರೀನ್ ಬಡ್ಸ್ ಸಂಸ್ಥೆಯವರು ಲಕ್ಷಾಂತರ ರುಪಾಯಿ ಸಂಗ್ರಹಿಸುತ್ತಿದ್ದಾರೆ. ಇಂತಹ ಅಕ್ರಮ ಸಂಸ್ಥೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು. ಜಿಲ್ಲಾಡಳಿತಕ್ಕೆ ಈ ಬಗ್ಗೆ ವಿಷಯ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಪದೇ ಪದೇ ಇಂತಹ ಘಟನೆ ಮರುಕಳಿಸುತ್ತಿದೆ. ಕಾನೂನು ಬಾಹಿರವಾಗಿ ಹಣ ಸಂಗ್ರಹಿಸುತ್ತಿರುವ ಗ್ರೀನ್ ಬಡ್ಸ್ ನೈಸರ್ಗಿಕ ಸಂಸ್ಥೆಯನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ನಗರ ಖಜಾಂಚಿ ಕೃಷ್ಣ ಅಶೋಕಪುರಂ, ನಗರ ಸಂಘಟನಾ ಸಂಚಾಲಕ ಗಂಗಾಧರ್ ಹೈವೇ, ನಗರ ಸಂಚಾಲಕ ರಾಮಚಂದ್ರ ಇದ್ದರು.
ಆಲನಹಳ್ಳಿ ನಿವಾಸಿಗಳು
ನಗರದ ಹೊರ ವಲಯದ ಆಲನಹಳ್ಳಿ ಗ್ರಾಪಂನ ಸಾರ್ವಜನಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟಿಸಿದರು. ಗ್ರಾಪಂಗೆ ಕಾಯಂ ಪಿಡಿಒ ನೇಮಿಸಬೇಕು, ಗ್ರಾಮದ ಸರ್ವೆ ನಂ.41ರ ಸರ್ಕಾರಿ ಜಮೀನನ್ನು ಗ್ರಾಪಂ ಅಧಿಕಾರಿಗಳು ಖಾತೆ ಮಾಡಿರುವುದನ್ನು ರದ್ದುಪಡಿಸಬೇಕು. ಅಕ್ರಮ ಕಂದಾಯ ಜಮೀನುಗಳ ಖಾತೆ ಮಾಡಿಕೊಟ್ಟ ಕಾರ್ಯದರ್ಶಿಯನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಆಲನಹಳ್ಳಿ ಗ್ರಾಪಂಗೆ ಸೇರಿದ ನಾಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದೆ. 6 ತಿಂಗಳ ಹಿಂದೆ ತೆಗೆದ ಬೋರ್ವೆಲ್ಗೆ ಇನ್ನೂ ಮೋಟರ್ ಅಳವಡಿಸಿಲ್ಲ. ಗ್ರಾಮ ನೈರ್ಮಲ್ಯದ ಬಗ್ಗೆ ಗ್ರಾಪಂ ಅಧ್ಯಕ್ಷರು ಮತ್ತು ಅಧಿಕಾರಿಗಳು ಗಮನ ನೀಡುತ್ತಿಲ್ಲ. ಗ್ರಾಪಂ ವ್ಯಾಪ್ತಿಯ ಯಾವ ಗ್ರಾಮಕ್ಕೂ ಬೀದಿ ದೀಪ ಅಳವಡಿಸಿಲ್ಲ ಎಂದು ದೂರಿದರು. ನಾಡನಹಳ್ಳಿಯ ಶಾಲಾ ಮಕ್ಕಳಿಗೆ ಕುಡಿಯುವ ನೀರು ಪೂರೈಸಬೇಕು ಎಂದು ಒತ್ತಾಯಿಸಿದರು.
ಸ್ವಸಹಾಯ ಸಂಘ
ಕೇಂದ್ರ ಸರ್ಕಾರದ ನರ್ಮ್ ಯೋಜನೆಯಡಿ ನಿರ್ಮಿಸಿರುವ ಮನೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶ್ರೀ ಶಾಲಿನಿ ಸಾಕ್ಷರತಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಪ್ರತಿಭಟಿಸಿದರು. ನಗರದ ಹೊರವಲಯದಲ್ಲಿನ ಹಂಚ್ಯಾ ಸಾತಗಳ್ಳಿ ಬಳಿ ನರ್ಮ್ ಯೋಜನೆಯ ನಗರ ಪಾಲಿಕೆಯು ಸಾಕಷ್ಟು ಮನೆಗಳನ್ನು ನಿರ್ಮಿಸಿದೆ. ಆದರೆ ಹೀಗೆ ನಿರ್ಮಾಣಗೊಂಡ ಮನೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ ಎಂದು ಆರೋಪಿಸಿದರು. ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಸಾಕಷ್ಟು ಸೌಲಭ್ಯಗಳಿಂದ ಈ ಮನೆಗಳು ವಂಚಿತವಾಗಿವೆ. ಆದ್ದರಿಂದ ಕೂಡಲೇ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನ ನೀಡುವಂತೆ ಆಗ್ರಹಿಸಿದರು. ಸಂಘದ ಅಧ್ಯಕ್ಷೆ ಎಸ್. ಜ್ಯೋತಿ ಸೇರಿದಂತೆ ಹಲವರಿದ್ದರು.
ಬಿಜೆಪಿ, ಸಿಪಿಎಂ ಕಾರ್ಯಕರ್ತರಿಂದಲೂ ಧರಣಿ
ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಸೋಮವಾರ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟಿಸಿದರು.
ಬಿಜೆಪಿ ಕಾರ್ಯಕರ್ತರು ನಗರದ ಗಾಂಧಿಚೌಕದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದು ಮತ್ತು ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೆ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದೆ. ಇದರಿಂದಾಗಿ ಶ್ರೀ ಸಾಮಾನ್ಯರಿಗೆ ತೊಂದರೆಯಾಗಲಿದೆ. ಆದ್ದರಿಂದ ಬಸ್ ದರ ಏರಿಕೆ ಮಾಡಿರುವುದನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಅಲ್ಲದೆ ಕೇಂದ್ರ ಸರ್ಕಾರವು ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಕ್ರಮ ಸರಿಯಲ್ಲ. ಯುಪಿಎ ಸರ್ಕಾರ ತನ್ನ ಎರಡೂ ಅವಧಿಯಿಂದಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುವ ಮೂಲಕ ಬಡವರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸುತ್ತಿದೆ ಎಂದು ಟೀಕಿಸಿದರು.
ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಪಾಲಿಕೆ ಸದಸ್ಯ ಮ.ವಿ. ರಾಮಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಡಾ.ಶಿವರಾಮ್, ಮುಖಂಡರಾದ ಹೇಮಂತ್ಕುಮಾರ್, ಯಶಸ್ವಿನಿ ಸೋಮಶೇಖರ್, ಸು.ಮುರುಳಿ, ಜಗದೀಶ್, ಸತೀಶ್, ಜೋಗಿ ಮಂಜು ಇದ್ದರು. ನಗರದ ಕೆ.ಆರ್. ವೃತ್ತದಲ್ಲಿ ಸೋಮವಾರ ಸಿಪಿಎಂ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಲೆ ಏರಿಕೆ ಮಾಡುವಲ್ಲಿ ದಾಖಲೆ ನಿರ್ಮಿಸಿ. ಇದರಿಂದಾಗಿ ಜನ ಸಾಮಾನ್ಯರಿಗೆ ಜೀವನ ನಿರ್ವಹಿಸುವುದು ಕಷ್ಟವಾಗಿದೆ. ಈ ಮಧ್ಯೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

