ಪರಿಶಿಷ್ಟ ಜಾತಿಗೆ ಸೌಲಭ್ಯ ತಲುಪಿಸಿ: ಶಿವಣ್ಣ
ಕ.ಪ್ರ.ವಾರ್ತೆ ಚಾ.ನಗರ ಜೂ.21
ಪರಿಶಿಷ್ಟ ಜಾತಿ ಜನಾಂಗಕ್ಕೆ ಸರ್ಕಾರದಿಂದ ಮಂಜೂರಾದ ಸೌಲಭ್ಯಗಳನ್ನು ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತಲುಪಿಸಲು ಕ್ರಮ ವಹಿಸಬೇಕು ಎಂದು ಪರಿಶಿಷ್ಟ ಜಾತಿಯ ರಾಷ್ಟ್ರೀಯ ಆಯೋಗದ ಸದಸ್ಯ ಕಾಗಲವಾಡಿ ಎಂ. ಶಿವಣ್ಣ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಜನರಿಗೆ ನೀಡುವ ಸೌಲಭ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಪಂಗಳಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿರುವ ಶೇ.22.75 ಅನುದಾನದ ಬಗ್ಗೆ ಅರಿವಿನ ಕೊರತೆಯಿದೆ. ಹೀಗಾಗಿ ಉದ್ದೇಶಿತ ಅನುದಾನ ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಆಧಿಕಾರಿಗಳು ವಿಶೇಷ ಅನುದಾನದ ಕುರಿತು ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಜನರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಈ ವರ್ಗದವರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನ ಸದ್ಬಳಕೆಯಾಗಬೇಕು. ಈ ಕುರಿತು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಆಯೋಗವು ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲು ಹಿಂಜರಿಯುವುದಿಲ್ಲ ಎಂದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಒದಗಿಸಲು ವಿಳಂಬವಾಗುತ್ತಿರುವ ಬಗ್ಗೆ ಹೆಚ್ಚು ದೂರುಗಳು ಕೇಳಿ ಬರುತ್ತಿದೆ. ಕೊಳವೆ ಬಾವಿ ಸೌಲಭ್ಯದಿಂದ ಪರಿಸ್ಥಿತಿ ಸುಧಾರಿಸಿಕೊಳ್ಳುವ ಅವಕಾಶಕ್ಕೂ ಕಾರ್ಯಪ್ರವೃತ್ತರಾಗದಿದ್ದರೆ ಜನರು ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದರು.
ವಿದ್ಯುತ್ ಸಾಮಗ್ರಿಗಳ ಕೊರತೆಯಿಂದಾಗಿ ಕೊಳವೆ ಬಾವಿಗಳಿಗೆ ವಿದ್ಯುದೀಕರಣಕ್ಕೆ ವಿಳಂಬವಾಗುತ್ತಿದೆ ಎಂದು ಚೆಸ್ಕಾಂ ಅಧಿಕಾರಿಗಳು ಉತ್ತರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ ಈ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗುವುದಾಗಿ ತಿಳಿಸಿದರು.
ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ವಸತಿ ಶಾಲೆಗೆ ತಾವು ಇತ್ತೀಚೆಗೆ ಭೇಟಿ ನೀಡಿದ್ದ ವೇಳೆ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸದೆ ಇರುವುದು ಕಂಡುಬಂದಿದೆ. ಶಾಲೆ ಆರಂಭವಾಗಿ 20 ದಿನಗಳಾದರೂ ಪಠ್ಯ ಪುಸ್ತಕ ವಿತರಿಸಿಲ್ಲ. ವಸತಿ ಶಾಲೆ ಹೊರವಲಯದಲ್ಲಿದ್ದೂ ತುರ್ತಾಗಿ ಕಾಂಪೌಂಡ್ ನಿರ್ಮಿಸಬೇಕಿದೆ. ಶೀಘ್ರವೇ ಕಾಂಪೌಂಡ್ ಕಾಮಗಾರಿಗೆ ಅಂದಾಜು ಪಟ್ಟಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಸೂಚಿಸಿದರು. ಒಟ್ಟಾರೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಕರ್ಯ ಒದಗಿಸಬೇಕೆಂದು ಜಿಲ್ಲಾಧಿಕಾರಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಎಂ.ವಿ.ಸಾವಿತ್ರಿ, ಅಯೋಗದ ಉಪ ನಿರ್ದೇಶಕಿ ಶೀಲಾ ನಾರಾಯಣಸ್ವಾಮಿ, ಎಸ್ಪಿ ಪಿ.ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ, ಜಿಪಂ ಉಪ ಕಾರ್ಯದರ್ಶಿ ಎ.ಪಿ.ಶಂಕರರಾಜು, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಪ್ರತಿಭಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

