ಸಾಲ ವಸೂಲಿ ತಡೆಗೆ ಶಾಂತಕುಮಾರ್ ಆಗ್ರಹ
ಕ.ಪ್ರ.ವಾರ್ತೆ ಟಿ.ನರಸೀಪುರ ಜೂ. 22
ಬರಗಾಲದ ಹಿನ್ನೆಲೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ರೈತರ ಸಾಲ ವಸೂಲಾತಿಗೆ ಮುಂದಾಗಿರುವ ರಾಷ್ಟ್ರೀಕೃತ ಬ್ಯಾಂಕ್ಗಳ ಕ್ರಮವನ್ನು ರಾಜ್ಯ ಸರ್ಕಾರ ತಡೆ ಹಿಡಿಯಬೇಕು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಇಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಶನಿವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿ, ರಾಜ್ಯದೆಲ್ಲೆಡೆ ಮಳೆಯ ಪ್ರಮಾಣ ಕಡಿಮೆಯಾಗಿದೆ.
ವಿದ್ಯುತ್ ಅಭಾವ ತಲೆದೋರಿರುವುದರಿಂದ ಕಬ್ಬು ಬೆಳೆ ಸೇರಿದಂತೆ ಇನ್ನಿತರೆ ಬೆಳೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗದೆ ಶೇ. 50ರಷ್ಟು ಇಳುವರಿ ಕಡಿಮೆಯಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ಗಳು ರೈತರ ಸಾಲ ವಸೂಲಾತಿಗೆ ಮುಂದಾಗಿವೆ. ಇದನ್ನು ರಾಜ್ಯ ಸರ್ಕಾರ ತಡೆಹಿಡಿಯಬೇಕು ಎಂದು ಹೇಳಿದರು.
ಸ್ಥಳೀಯ ಸಹಕಾರ ಸಂಘಗಳಲ್ಲಿ ರೈತರಿಗೆ ಸಕಾಲಕ್ಕೆ ಸಾಲ ಸೌಲಭ್ಯ ನೀಡುತ್ತಿಲ್ಲ. ಸಾಲ ಮನ್ನಾ ಬಾಬ್ತು ಹಣ ಕಡಿತ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಬಣ್ಣಾರಿ ಕಾರ್ಖಾನೆಯಿಂದ ಕಬ್ಬಿನ ಬಾಕಿ ಹಣವನ್ನು ಕೂಡಲೆ ರೈತರಿಗೆ ಪಾವತಿಸಬೇಕು. ಕಾರ್ಖಾನೆ ಆರಂಭಕ್ಕೂ ಮುನ್ನ ಕಬ್ಬಿನ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಸುವ ಟ್ರಾನ್ಸ್ಫಾರ್ಮರ್ಗಳು ಕೆಟ್ಟು ಹೋದಾಗ ವಿಳಂಬ ಧೋರಣೆ ಪ್ರದರ್ಶಿಸುವ ಅಧಿಕಾರಿಗಳ ವರ್ತನೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂಗಾರು ಹಂಗಾಮು ಕೃಷಿ ಚಟುವಟಿಕೆಗಳು ಆರಂಭವಾಗುವ ಮೊದಲು ಅಗತ್ಯವಿರುವ ಉತ್ತಮ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಕಾಲಕ್ಕೆ ವಿತರಣೆಯಾಗಬೇಕು. ಕಬಿನಿ ಜಲಾಶಯ ಭರ್ತಿಯಾದ ಕೂಡಲೆ ಅಚ್ಚುಕಟ್ಟು ಪ್ರದೇಶಗಳಲ್ಲಿರುವ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ದೇವರಾಜು, ಮುಖಂಡರಾದ ಜವರಯ್ಯ, ಸಿದ್ದೇಶ್, ಗೋಪಾಲಕೃಷ್ಣ, ಮಹೇಶ್, ಜಯಸ್ವಾಮಿ, ಬಸವಣ್ಣ, ನಾರಾಯಣ, ರಾಮಪ್ರಸಾದ್, ರಾಮಣ್ಣ, ರಾಜಣ್ಣ, ನಾಗೇಶ್, ಪ್ರಕಾಶ್, ಡಿ. ರಾಜೇಂದ್ರ, ಎಂ. ಕಿಟ್ಟು, ಕೃಷ್ಣಪ್ಪ, ಪ್ರಸಾದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

