ಲಂಚ: ಪೇದೆಗೆ ಎರಡು ವರ್ಷ ಜೈಲು
ಕ.ಪ್ರ.ವಾರ್ತೆ ಮೈಸೂರು ಜೂ. 24
ಜಾಮೀನು ನೀಡುವ ಸಂಬಂಧ ಲಂಚ ಪಡೆದು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಪೇದೆಯೊಬ್ಬರಿಗೆ ನ್ಯಾಯಾಲಯವು 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.
ಅಶೋಕಪುರಂ ಠಾಣೆಯಲ್ಲಿ ಪೇದೆಯಾಗಿದ್ದ ಈಗ ಉದಯಗಿರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್. ನಾಗರಾಜು ಶಿಕ್ಷೆಗೆ ಗುರಿಯಾದವರು.
ಪ್ರಕರಣದ ವಿವರ: ಎನ್. ಬಸವಯ್ಯ ಅವರ ಕುಟುಂಬದ ವಿರುದ್ಧ ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಜಾಮೀನು ಪಡೆಯಲು ಬಸವಯ್ಯ ಹೋಗಿದ್ದ ವೇಳೆ ಪೇದೆ ಆರ್. ನಾಗರಾಜು 2,000 ಲಂಚ ನೀಡಬೇಕೆಂದು ಒತ್ತಾಯಿಸಿದ್ದರು. ಈ ಸಂಬಂಧ ಬಸವಯ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
2008ರ ನ.21 ರಂದು ಹಣ ಸ್ವೀಕರಿಸುವಾಗ ನಾಗರಾಜು ಅವರನ್ನು ಲೋಕಾಯುಕ್ತ ಇನ್ಸ್ಪೆಕ್ಟರ್ ಡಿ. ಜಯರಾಮ ಮತ್ತು ಸಿಬ್ಬಂದಿ ಬಂಧಿಸಿದ್ದರು. ಪ್ರಕರಣ ಮುಂದುವರಿದ ತನಿಖೆಯಲ್ಲಿ ಇನ್ಸ್ಪೆಕ್ಟರ್ ಜಿ. ಗೋಪಾಲಕೃಷ್ಣ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಜೇಂದ್ರ ಬಾದಾಮ್ಕರ್ ಅವರು ಪೇದೆ ನಾಗರಾಜು ದೋಷಿ ಎಂದು ತೀರ್ಮಾನಿಸಿ 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ, ಲೋಕಾಯುಕ್ತ ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದ್ದ 2,000 ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

