ಮೈಸೂರು

ಜನರ ಬಳಿಗೇ ಆಡಳಿತ ಒಯ್ಯಿರಿ

Published On :

ಕ.ಪ್ರ.ವಾರ್ತೆ ಟಿ. ನರಸೀಪುರ ಜೂ. 26
ಪಿಂಚಣಿ ಅದಾಲತ್ ಕಾರ್ಯಕ್ರಮದ ಮೂಲಕ ಜನರ ಬಳಿಗೆ ಆಡಳಿತ ಕೊಂಡೊಯ್ಯಬೇಕು ಎಂಬುದು ಕಾಂಗ್ರೆಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ತಾಲೂಕಿನ ಮೂಗೂರು ಗ್ರಾಮದಲ್ಲಿ ಬುಧವಾರ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಮಾಸಾಶನ ಮಂಜೂರಾತಿ ಆದೇಶ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ವೃದ್ಧರು, ವಿಧವೆಯರು ಹಾಗೂ ಅಂಗವಿಕಲರು ಮಾಸಾಶನಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಪಿಂಚಣಿ ಅದಾಲತ್ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಪಿಂಚಣಿ ಹಣ ಬರುತ್ತಿಲ್ಲ ಎಂದು ತಾವು ಹೋದಲೆಲ್ಲ ದೂರುಗಳು ಕೇಳಿ ಬರುತ್ತಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಸೇರಿದಂತೆ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರು ಬಡಜನರ ಪರ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದ್ದೇವೆ. ಅದಾಲತ್ ಎಂದರೆ ಪಿಂಚಣಿ ನಿರ್ವಹಣೆ ಬಗ್ಗೆ ಅಧಿಕಾರಿಗಳು ವಿವರಣೆ ನೀಡುವರು. ಅರ್ಜಿ ಸಲ್ಲಿಸಿದ ಹದಿನೈದು ದಿನದೊಳಗೆ ಮಂಜೂರಾತಿ ಆದೇಶ ಪತ್ರ ನೀಡಲಾಗುತ್ತದೆ. ನಂತರ ಉಪ ಖಜಾನಾಧಿಕಾರಿಗಳ ಮೂಲಕ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿರುವ ಫಲಾನುಭವಿಯ ಖಾತೆಗೆ ಹಣ ಜಮಾ ಆಗಲಿದೆ ಎಂದು ತಿಳಿಸಿದರು.
ಮೂಗೂರು ಗ್ರಾಮದಲ್ಲಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗುತ್ತಿದೆ. ನಂತರ ತಾಲೂಕಿನ ಒಟ್ಟು ಮೂವತ್ತಾರು ಪಂಚಾಯತಿಗಳಲ್ಲೂ ಪಿಂಚಣಿ ಅದಾಲತ್ ನಡೆಯಲಿದೆ ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ಬಸವರಾಜು ಮಾತನಾಡಿದರು. ತಾಪಂ ಅಧ್ಯಕ್ಷ ತುಂಬಲ ಅಂದಾನಿ, ಉಪಾಧ್ಯಕ್ಷೆ ಸುಜಾತ ವೆಂಕಟೇಶ್, ಯುವ ಮುಖಂಡ ಸುನಿಲ್ ಬೋಸ್, ಮಾಜಿ ಶಾಸಕರಾದ ಡಾ.ಎನ್.ಎಲ್. ಭಾರತೀಶಂಕರ್, ಎಸ್.ಕೃಷ್ಣಪ್ಪ, ಎಪಿಎಂಸಿ ಅಧ್ಯಕ್ಷ ಎಂ.ರಾಜು, ಜಿಪಂ ಮಾಜಿ ಸದಸ್ಯ ಎಂ.ಆರ್. ಸೋಮಣ್ಣ, ಮಾಜಿ ಪ್ರಧಾನ ಎಂ.ಡಿ. ಬಸವರಾಜು, ಜಿಲ್ಲಾ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಹೊನ್ನನಾಯ್ಕ, ತಾಪಂ ಸದಸ್ಯರಾದ ಪುಟ್ಟಮಾದಮ್ಮ, ಸಿ.ವೆಂಕಟೇಶ್, ಮಲ್ಲಾಜಮ್ಮ, ನಟರಾಜು, ಗುರುಮೂರ್ತಿ, ಗ್ರಾ.ಪಂ ಅಧ್ಯಕ್ಷೆ ಪುಷ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.