ಲೋಕಸಭೆ ಚುನಾವಣೆಯಲ್ಲಿ ಕೈಗೆ ತಕ್ಕ ಪಾಠ
ಕ.ಪ್ರ.ವಾರ್ತೆ ಕೆ.ಆರ್. ನಗರ ಜೂ. 30
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಆಡಳಿತ ವೈಫಲ್ಯದಿಂದ ಜನಪ್ರಿಯತೆ ಕಳೆದುಕೊಂಡಿರುವುದರಿಂದ ಮುಂದಿನ ಚುನಾವಣೆಯಲ್ಲಿ ಮತದರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ನರೇಂದ್ರ ಮೋದಿ ಅವರು ಪಕ್ಷದ ಪ್ರಚಾರ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಪಕ್ಷಕ್ಕೆ ಬಲ ಬಂದಿದ್ದು, ಯುವಕರು ಬಿಜೆಪಿಯೆಡೆಗೆ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ಮತದಾರರು ಅವರ ನಾಯಕತ್ವ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ ಅವರು ದೇಶದ ಪ್ರಧಾನಿಯಾದರೆ ಅಭಿವೃದ್ಧಿ ಪರ್ವ ಆರಂಭವಾಗಲಿದ್ದು, ಗುಜರಾತ್ ಮಾದರಿಯಲ್ಲಿ ದೇಶ ವಿಶ್ವದಲ್ಲಿಯೇ ಹೆಸರು ಗಳಿಸಲಿದೆ. ಸಮೀಕ್ಷೆಗಳು ಮತ್ತು ಮೋದಿ ಅವರ ನಾಯಕತ್ವದಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂಬ ಮುನ್ಸೂಚನೆ ನೀಡಿದ್ದು, ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪಕ್ಷದ ಒಳಜಗಳ ಕಾರಣ. ಕಾರ್ಯಕರ್ತರು ಪ್ರಾಮಾಣಿಕರಾಗಿ ದುಡಿದರೂ ನಾಯಕರ ಕಚ್ಚಾಟ ಮತ್ತು ಆತುರದ ನಿರ್ಧಾರಗಳಿಂದ ನಾವು ಸೋಲನುಭವಿಸಬೇಕಾಯಿತು. ಕೆಲವರು ಪಕ್ಷಕ್ಕೆ ಬಂದು ಉಂಡು ಹೋಗಿ, ಕೊಂಡು ಹೋದರು ಎಂದು ಅವರು ಪರೋಕ್ಷವಾಗಿ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರನ್ನು ಟೀಕಿಸಿದರು.
ಮಾಜಿ ಶಾಸಕ ಎಸ್.ಜಿ. ಮೇದಪ್ಪ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಡಿ. ಮಹೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಲಾಲನಹಳ್ಳಿ ಮಹೇಶ್, ಪ್ರಭಾಕರ್ ಜೈನ್, ಸಂತೋಷ, ಮಲ್ಲಿಕಾರ್ಜುನಪ್ಪ, ರಂಗನಾಥರಾವ್, ಅನಿಲ್ ಇದ್ದರು.
ಕಾರ್ಯಕರ್ತರ ಒತ್ತಡಕ್ಕೆ ವರಿಷ್ಠರ ಮನ್ನಣೆ
ಕೆ.ಆರ್. ನಗರ: ಪಕ್ಷ ತೊರೆದು ಹೋಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದು, ಇದಕ್ಕೆ ನಾಯಕರು ಮನ್ನಣೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಮಾತುಕತೆ ನಡೆಯುತ್ತಿದ್ದು, ಅಂತಿಮವಾಗಿ ರಾಷ್ಟ್ರೀಯ ನಾಯಕರು ನಿರ್ಧಾರ ಕೈಗೊಳ್ಳುವರು ಎಂದರು.
ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು.
ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಬಿ.ಎಸ್. ಯಡಿಯೂರಪ್ಪ ಅವರಂತಹ ನಾಯಕರ ಅಗತ್ಯವಿದ್ದು, ವೈಯಕ್ತಿಕವಾಗಿ ನಾನು ಅವರ ಸೇರ್ಪಡೆಯನ್ನು ಸ್ವಾಗತಿಸುತ್ತೇನೆ. ಯಾರ್ಯಾರನ್ನೋ ಪಕ್ಷಕ್ಕೆ ಸೇರಿಸಿಕೊಂಡು ಅಧಿಕಾರ ನೀಡಿ ತಪ್ಪು ಮಾಡಿದ್ದೇವೆ. ಅಂತಹದರಲ್ಲಿ ದಶಕಗಳ ಕಾಲ ಪಕ್ಷ ಕಟ್ಟಿ ಅಧಿಕಾರಕ್ಕೆ ಬರಲು ಶ್ರಮಿಸಿದ ಬಿಎಸ್ವೈ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತಂದರೆ ತಪ್ಪೇನು ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

