ಡೆಂಘೀ: ತುರ್ತು ಚಿಕಿತ್ಸಾ ಕ್ರಮದಿಂದ ಪರಿಸ್ಥಿತಿ ನಿಯಂತ್ರಣ
ಕ.ಪ್ರ.ವಾರ್ತೆ , ಮೈಸೂರು , ಮೇ 24
ಡಿ. ಸಾಲುಂಡಿಯಲ್ಲಿ ಕಾಣಿಸಿಕೊಂಡಿರುವ ಡೆಂಘೀ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ. ಮಾಲೇಗೌಡ ತಿಳಿಸಿದರು. ಶುಕ್ರವಾರ ಡಿ. ಸಾಲುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡೆಂಘೀ ಜ್ವರ ಪ್ರಕರಣ ಕುರಿತು ದೂರವಾಣಿ ಕರೆ ಬಂದ ಕೂಡಲೇ ವೈದ್ಯಾಧಿಕಾರಿಗಳೊಂದಿಗೆ ಗ್ರಾಮಕ್ಕೆ ತೆರಳಿ ಭೇಟಿ ನೀಡಿ ಸಮೀಕ್ಷೆ ನಡೆಸಲಾಯಿತು. ಗ್ರಾಮದ ಪ್ರತಿ ಮನೆಯಲ್ಲಿ ಡ್ರಮ್ಮುಗಳಲ್ಲಿ ಸಂಗ್ರಹಿಸಿಟ್ಟುಕೊಂಡ ನೀರೇ ಈ ಸಮಸ್ಯೆಗೆ ಮೂಲ ಕಾರಣವಾಗಿದೆ. ಇದಕ್ಕಾಗಿ ನೀರು ಸೋಸಿ ಕುಡಿಯುವಂತೆ ಗ್ರಾಮಸ್ಥರಿಗೆ ಮನವರಿಕೆ ಮಾಡಲಾಗಿದೆ. ಆರೋಗ್ಯ ಕಾರ್ಯಕರ್ತರಿಂದ ಜಾಗೃತಿ ಮೂಡಿಸಲಾಗಿದೆ. ಜಿಲ್ಲಾಡಳಿತ ಗ್ರಾಮಕ್ಕೆ ಹೆಚ್ಚುವರಿಯಾಗಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಿದೆ. ಮೃತಪಟ್ಟ ನಾಲ್ಕು ಮಕ್ಕಳಲ್ಲಿ ಯಶಸ್ವಿನಿ ಮತ್ತು ರವಿಚಂದ್ರ ಎಂಬ ಮಕ್ಕಳು ಮಾತ್ರ ಡೆಂಘೀ ಜ್ವರಕ್ಕೆ ತುತ್ತಾಗಿರುವುದು ದೃಢಪಟ್ಟಿದೆ. ಅಪೋಲೋ ಮತ್ತು ಜೆಎಸ್ಎಸ್ ಆಸ್ಪತ್ರೆಗಳಲ್ಲಿ ಇನ್ನೂ 14 ಮಕ್ಕಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಜಿಲ್ಲಾಧಿಕಾರಿ ಸಿ. ಶಿಖಾ ಮಾತನಾಡಿ, ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಮನವಿ ಮಾಡಲಾಗಿದೆ. ನೀರಿನ ಸಮಸ್ಯೆ ನೀಗಿಸಲು ಟ್ಯಾಂಕರ್ಗಳ ವ್ಯವಸ್ಥೆ ಮಾಡಲಾಗುವುದು. ಗ್ರಾಮದಲ್ಲಿ ಸಂಗ್ರಹಿಸಿರುವ ನೀರನ್ನು ಬದಲಾಯಿಸುವಂತೆ ಸೂಚಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಸದ್ಯಕ್ಕೆ ತಲೆದೋರಿರುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುತ್ತೇನೆ. ಡೆಂಘೀಗೆ ತುತ್ತಾಗಿ ಮೃತಪಟ್ಟವರಿಗೆ ಸರ್ಕಾರ 1 ಲಕ್ಷ ಪರಿಹಾರ ನೀಡಬೇಕು. ಹಾಗೆ ಕೆಆರ್ ಆಸ್ಪತ್ರೆಯಲ್ಲಿ ವಿಶೇಷ ಘಟಕ ತೆರೆಯಬೇಕು ಎಂದು ಅವರು ಆಗ್ರಹಿಸಿದರು. ಡಿ. ಸಾಲುಂಡಿ ಗ್ರಾಮಕ್ಕೆ ಜಿಪಂ ಪ್ರತಿಪಕ್ಷ ನಾಯಕ ಕೆ. ಮಾರುತಿ, ಜಿಪಂ ಸದಸ್ಯರಾದ ಸಿ. ಜವರಯ್ಯ, ಪಟೇಲ್ ಜವರೇಗೌಡ, ಬೀರಿಹುಂಡಿ ಬಸವಣ್ಣ, ತಾಪಂ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

