ಮೈಸೂರು

ಸಾಂಕ್ರಾಮಿಕ ರೋಗ ತಡೆಗೆ ಕ್ರಮ: ಜಿಲ್ಲಾಧಿಕಾರಿ ಸಿ. ಶಿಖಾ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಮೇ 24
ತಾಲೂಕಿನ ಡಿ. ಸಾಲುಂಡಿಯಲ್ಲಿ ಡೆಂಘೀ ಜ್ವರ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಡೆಂಘೀ, ಚಿಕೂನ್ ಗುನ್ಯಾ, ಕಾಲರಾ, ಮಲೇರಿಯಾ ಮೊದಲಾದ ಸಾಂಕ್ರಾಮಿಕ ರೋಗ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿ. ಶಿಖಾ ಅವರು ಎಲ್ಲಾ ತಾಪಂ ಇಒ, ಗ್ರಾಪಂ ಪಿಡಿಒ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯ ಎಲ್ಲ ಗ್ರಾಮ ಮತ್ತು ಪಟ್ಟಣಗಳಲ್ಲಿ ನಿಂತಿರುವ ಕೊಳಚೆ ನೀರು ತೆಗೆಯುವ, ಡ್ರೈನ್ ಮೋರಿಗಳನ್ನು ಸ್ವಚ್ಛಗೊಳಿಸುವ, ಫಾಗಿಂಗ್ ಮಾಡುವ, ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಮತ್ತು ಶುದ್ಧ ಕುಡಿಯುವ ನೀರು ಒದಗಿಸುವ ಹಾಗೂ ಸದಾ ಮುಚ್ಚಿಡುವ, ಕಸದ ರಾಶಿಗಳನ್ನು ಊರಿಂದ ಹೊರಗೆ ಸಾಗಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ಒಂದು ವಾರದೊಳಗೆ ಕೈಗೊಳ್ಳಬೇಕು. ಅಲ್ಲದೆ, ಈ ಬಗ್ಗೆ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಗ್ರಾಮ ಆರೋಗ್ಯ ಮತ್ತು ಸುರಕ್ಷತೆ ಯೋಜನೆಯಡಿ ಲಭ್ಯವಿರುವ ಅನುದಾನದಲ್ಲಿ ಗರಿಷ್ಠ 10 ಸಾವಿರಗಳನ್ನು ಪ್ರತಿ ಗ್ರಾಮಕ್ಕೆ ಈ ಕಾರ್ಯಕ್ರಮಕ್ಕಾಗಿ ಉಪಯೋಗಿಸುವಂತೆ ಅವರು ತಿಳಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ತಂಡ ರಚಿಸಿ, ಡೆಂಘೀ ಜ್ವರ ಉಲ್ಬಣವಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಜೊತೆ ಜ್ವರ ಹರಡಿರುವ ಪ್ರದೇಶಗಳಿಗೆ ತೆರಳಿ ರೋಗಿಗಳಿಗೆ ತುರ್ತು ಚಿಕಿತ್ಸೆ ಕೈಗೊಳ್ಳಬೇಕು. ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು. ಭಿತ್ತಿಪತ್ರ ಮತ್ತು ಕರಪತ್ರ ಹಂಚುವ ಮೂಲಕ ಗ್ರಾಮಗಳಲ್ಲಿ ಅನೈರ್ಮಲ್ಯ ಇಲ್ಲದಂತೆ ನೋಡಿಕೊಳ್ಳುವಂತೆ ಅವರು ಸೂಚಿಸಿದ್ದಾರೆ. ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಗ್ರಾಪಂನ ಆದ್ಯ ಕರ್ತವ್ಯವಾಗಿದ್ದು, ವಸೂಲಿ ಮಾಡಿರುವ ನಿಧಿಯಿಂದ ಗ್ರಾಮ ಸ್ವಚ್ಛತಾ ಕಾರ್ಯಕ್ಕೆ ನಿಯಮಾನುಸಾರ ಹಣ ಉಪಯೋಗಿಸಬೇಕು. ವೈದ್ಯಾಧಿಕಾರಿಗಳು, ಗ್ರಾಪಂ ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿದ್ದು, ತುರ್ತು ಆರೋಗ್ಯ ಸೇವೆ ದೊರೆಯುವಂತೆ ನೋಡಿಕೊಳ್ಳಬೇಕು. ಕರ್ತವ್ಯ ನಿರ್ಲಕ್ಷಿಸುವ ಅಧಿಕಾರಿಗಳ, ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.