ಮೈಸೂರು

ಚಿಕಿತ್ಸೆ ನಿರಾಕರಿಸಿದರೆ ಆಸ್ಪತ್ರೆ ವಿರುದ್ಧ ಕ್ರಮ: ಖಾದರ್

Published On :

ಕ.ಪ್ರ.ವಾರ್ತೆ  ,   ಮೈಸೂರು  ,   ಮೇ 24
ಡೆಂಘೀ ಜ್ವರದಿಂದ ಬಳಲಿ ರೋಗಿಗಳು ಆಸ್ಪತ್ರೆಗೆ ಬಂದಾಗ ಹಣಕಾಸಿನ ವಿಚಾರದಲ್ಲಿ ಹಿಂದೆ ಮುಂದೆ ನೋಡದೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಸಂಜೆ ಡಿ. ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿ, ಡೆಂಘೀಗೆ ತುತ್ತಾದವರಲ್ಲಿ ಹೆಚ್ಚಿನವರು ಬಡವರೇ ಆಗಿದ್ದಾರೆ. ಆದ್ದರಿಂದ ಆಸ್ಪತ್ರೆಗಳು ಗುಣಮಟ್ಟದ ಚಿಕಿತ್ಸೆ ನೀಡಬೇಕು.
ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜತೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ. ಬೇಸಿಗೆ ಸಂದರ್ಭದಲ್ಲಿ ನಮ್ಮ ಇಲಾಖೆ ಆದಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಈ ಘಟನೆ ಸಂಭವಿಸಿರುವುದು ದುರದೃಷ್ಟಕರ ಎಂದರು.
ಡೆಂಘೀ ರೋಗವಲ್ಲದೇ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ರೋಗವನ್ನು ಹತೋಟಿಗೆ ತರುವ ಕೆಲಸ ಆಗಬೇಕು. ನಮ್ಮ ಇಲಾಖೆ ಇದಕ್ಕೆ ಬದ್ಧವಾಗಿದೆ. ಇನ್ನು ಮುಂದೆ ಈ ರೀತಿಯ ಘಟನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಈ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಡಿ. ಸಾಲುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಹಾಗೆ ವೈದ್ಯರು, ಶುಶ್ರೂಷಕಿಯರ ನಿಯೋಜನೆ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ. ಮಾಲೇಗೌಡರೊಂದಿಗೆ ಮಾತನಾಡಿ, ಕೆಲವು ವಿಚಾರಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು.
ಚೆಲುವಾಂಬ ಆಸ್ಪತ್ರೆಯ ಡಾ. ನಾಗರಾಜ್, ತಾಪಂ ಇಒ ಡಾ.ಎಸ್. ಪ್ರೇಮ್‌ಕುಮಾರ್, ತಹಸೀಲ್ದಾರ್ ನವೀನ್ ಜೋಸೆಫ್, ಮಾಜಿ ಶಾಸಕ ಎಂ. ಸತ್ಯನಾರಾಯಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಧರ್ಮಸೇನ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.