ಮೈಸೂರು

ಡೆಂಘೀ ಕುರಿತ ಜಾಗೃತಿಗೆ ಹಲವು ಕ್ರಮ

Published On :

ಕ.ಪ್ರ.ವಾರ್ತೆ   ಮೈಸೂರು   ಮೇ 27
ನಗರದಲ್ಲಿ ಖಾಸಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಮೂಲಕ ಮನೆ ಮನೆ ಜಾಗೃತಿ, ಕರಪತ್ರ ಹಂಚುವಿಕೆ, ಆಟೋದಲ್ಲಿ ಪ್ರಚಾರ ಮಾಡುವ ಮೂಲಕ ಡೆಂಘೀ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ.
ನಗರಪಾಲಿಕೆ ಕಚೇರಿಯಲ್ಲಿ ಸೋಮವಾರ ಶಾಸಕ ಎಂ.ಕೆ. ಸೋಮಶೇಖರ್ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ನಗರದ ಅಶೋಕಪುರಂ, ಕ್ಯಾತಮಾರನಹಳ್ಳಿ, ಸುಣ್ಣದಕೇರಿ ಸೇರಿದಂತೆ ಹಲವು ಪ್ರದೇಶದಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದು, ಈ ಸಂಬಂಧ ತುರ್ತು ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸೋಮಶೇಖರ್ ಅಧಿಕಾರಿಗಳಿಗೆ ಎಚ್ಚರಿಸಿದರು.
ಮುಖ್ಯಮಂತ್ರಿಗಳ ಜಿಲ್ಲೆಯಲ್ಲಿ ಇಂತಹ ಪ್ರಕರಣ ಇರಬಾರದು. ಆದ್ದರಿಂದ ಕೂಡಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಶೇ.41 ರಷ್ಟು ಡೆಂಘೀ: ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಂ. ಮಾಲೇಗೌಡ, ಶಂಕಿತ ಡೆಂಘಿ ಜ್ವರದ ಪೈಕಿ ಶೇ. 41ರಷ್ಟು ಡೆಂಘೀ ಎಂಬುದು ದೃಢಪಟ್ಟಿದೆ. ಎಲ್ಲಾ ರೋಗಿಗಳ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಪುಣೆಗೆ ಕಳುಹಿಸಲಾಗುತ್ತಿದೆ ಎಂದರು.
ಅಲ್ಲದೆ ಪೌರ ಕಾರ್ಮಿಕರ ಸುಮಾರು 40 ಮಂದಿ ಮಕ್ಕಳಿಗೆ ಆರೋಗ್ಯ ಪರಿವೀಕ್ಷಣೆ ತರಬೇತಿ ನೀಡಲಾಗಿದೆ. ಅವರನ್ನು ಸಹ ಈ ಕೆಲಸಕ್ಕೆ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸೋಮಶೇಖರ್ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಬಳಸಿಕೊಂಡು ಜಾಗೃತಿ ಮೂಡಿಸುವ ಮತ್ತು ರೋಗ ನಿಯಂತ್ರಿಸುವ ಕೆಲಸ ಮಾಡಬೇಕು  ಎಂದರು.
ಪಾಲಿಕೆ ಸದಸ್ಯರಾದ ಸುನಿಲ್, ಸುನೀಲ್ ಕುಮಾರ್, ಆಯುಕ್ತ ಪಿ.ಜಿ. ರಮೇಶ್, ಆರೋಗ್ಯಾಧಿಕಾರಿ ಡಾ. ನಾಗರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.