ಕಲೆ, ಸಂಸ್ಕೃತಿ ಬೆಳವಣಿಗೆಗೆ ಅಗತ್ಯ ನೆರವು: ಸಿಎಂ
ಕ.ಪ್ರ.ವಾರ್ತೆ ಮೈಸೂರು ಅ.5
ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಸರಾ ಸಾಂಸ್ಕೃತಿಕ ಉಪಸಮಿತಿ ಸಂಯುಕ್ತಾಶ್ರಯದಲ್ಲಿ ಅರಮನೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿದ್ವಾನ್ ಡಾ.ವಿ.ಎಸ್. ಸಂಪತ್ಕುಮಾರಾಚಾರ್ಯ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಈ ಹಿಂದಿನ ಸರ್ಕಾರಗಳು ಕಲೆ ಹಾಗೂ ಸಂಸ್ಕೃತಿಗೆ ಎಲ್ಲಾ ರೀತಿಯ ನೆರವು ನೀಡುತ್ತಾ ಬಂದಿವೆ. ಅಂತೆಯೇ ನಮ್ಮ ಸರ್ಕಾರವು ಸಹ ಆ ಪರಂಪರೆಯನ್ನು ಮುಂದುವರಿಸಲಿದೆ. 2013- 14ನೇ ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 263 ಕೋಟಿ ವೆಚ್ಚ ಮಾಡಲಿದ್ದೇವೆ ಎಂದು ತಿಳಿಸಿದರು.
ದಸರಾ ಮಹೋತ್ಸವ ಕೇವಲ ಮೈಸೂರಿಗೆ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ಇದು ಜಗದ್ವಿಖ್ಯಾತವಾಗಬೇಕು ಎಂಬ ದೃಷ್ಟಿಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ಸಲುವಾಗಿ ಹಾಗೂ ದೇಶ ವಿದೇಶಗಳ ಜನರನ್ನು ಆಕರ್ಷಿಸುವ ಸಲುವಾಗಿ ವ್ಯಾಪಕ ಪ್ರಚಾರ ಮಾಡಲಾಗಿದೆ ಎಂದರು.
ಜನರ ದಸರಾ ಆಗಬೇಕು: ರಾಜಮಹಾರಾಜರ ಕಾಲದಿಂದ ನಡೆದು ಬಂದಿರುವ ದಸರಾ ಉತ್ಸವವು ಪ್ರಜಾ ಸರ್ಕಾರ ಬಂದ ಮೇಲೂ ಮುಂದುವರೆದಿದೆ. ಇದು ಜನರ ದಸರಾ ಆಗಬೇಕು. ನಿಜವಾದ ನಾಡಹಬ್ಬ ಆಗಬೇಕು ಎಂಬುದು ಸರ್ಕಾರ ಆಶಯ. ಜನರು ಸಹಕರಿಸಿ ಉತ್ಸವವನ್ನು ಆನಂದಿಸಬೇಕು ಎಂದು ತಿಳಿಸಿದರು.
ಸಂಗೀತ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ಡಾ.ವಿ.ಎಸ್. ಸಂಪತ್ಕುಕುಮಾರಾಚಾರ್ಯ ಅವರ ಸೇವೆ ಸ್ಮರಿಸಿ ರಾಜ್ಯ ವಿದ್ವಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇಂತಹ ಸಂಗೀತ ಮೇರು ಪರ್ವತವನ್ನು ಸನ್ಮಾನಿಸಿದ್ದು ಹೆಮ್ಮೆಯ ಸಂಗತಿ ಎಂದರು.
ಹಿರಿಯ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ ಅವರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿದ್ವಾನ್ ಡಾ.ವಿ.ಎಸ್. ಸಂಪತ್ಕುಮಾರಾಚಾರ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ ಪ್ರಸಾದ್, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಮೇಯರ್ ಎನ್.ಎಂ. ರಾಜೇಶ್ವರಿ ಹಾಗೂ ಇಂಡಿಯನ್ ಎಕ್ಸ್ಪ್ರೆಸ್ ಸಂಪಾದಕ ಶೇಖರ್ಗುಪ್ತ ಅವರು ಮುಖ್ಯ ಅತಿಥಿಯಾಗಿದ್ದರು.
ಕೃಷ್ಣರಾಜ ಶಾಸಕ ಎಂ.ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ. ಝಳಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಕೆ.ಆರ್. ರಾಮಕೃಷ್ಣ, ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ, ಜಿಲ್ಲಾಧಿಕಾರಿ ಸಿ. ಶಿಖಾ ಇದ್ದರು.
ಉಪಸಮಿತಿ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಾಳಪ್ಪ ಚಾಲನೆ
ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಆಯೋಜಿಸಿರುವ 9 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಿರಿಯ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ ಅವರು ಉದ್ಘಾಟಿಸಿ ಮಾತನಾಡಿ, ಇಂದು ಸಾಂಸ್ಕೃತಿಕ ಪರಂಪರೆ ಕ್ಷೀಣಿಸುತ್ತಿದ್ದು, ತಂತ್ರಜ್ಞಾನದ ಭರಾಟೆಯಲ್ಲಿ ಭಾವನೆಗಳಿಗೆ ಕೊರತೆ ಉಂಟಾಗಿದೆ ಎಂದರು. ಕರ್ನಾಟಕ ಸಾಂಸ್ಕೃತಿಕ ರಂಗದ ಆ ಎಲ್ಲಾ ಬೇಡಗಳನ್ನು ತೆಗೆದು ಹಾಕಬೇಕಿದೆ. ಸುದೈವದಿಂದ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗೈದು ಬಹಳಷ್ಟು ಪ್ರತಿಭಾವಂತರು ನಮ್ಮ ಮಧ್ಯೆದಲ್ಲಿದ್ದಾರೆ. ಇಂಥವರು ಭಾಗವಹಿಸುವುದರಿಂದ ಆ ಕ್ಷೇತ್ರಗಳಲ್ಲಿ ಹೊಸ ಆಯಾಮ ಬರಲು ಸಾಧ್ಯ ಎಂದು ಆಶಿಸಿದರು. ಏಣಗಿ ಬಾಳಪ್ಪ ಅವರ ಭಾಷಣವನ್ನು ಪ್ರಾಚ್ಯವಸ್ತು ಹಾಗೂ ಪರಂಪರೆ ಇಲಾಖೆ ಆಯುಕ್ತ ಡಾ.ಸಿ.ಜಿ. ಬೆಟ್ಸೂರ್ಮಠ್ ವಾಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

