ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುದಾನ ನೀಡಲಿ: ಸಂಸದ ವಿಶ್ವನಾಥ್
ಕ.ಪ್ರ.ವಾರ್ತೆ ಮೈಸೂರು ಅ. 11
ರಾಜ್ಯದಲ್ಲಿ ದಶಕಗಳಿಂದ ಬಾಕಿ ಉಳಿದಿರುವ ರೇಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರವು ತಮ್ಮ ಪಾಲಿನ ಅನುದಾನ ಹಾಗೂ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಸಂಸದ ಎಚ್. ವಿಶ್ವನಾಥ್ ಆಗ್ರಹಿಸಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ದಶಕಗಳಿಂದ ಬಾಕಿ ಉಳಿದಿರುವ ರೇಲ್ವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಿದೆ. ಇದಕ್ಕೆ ರಾಜ್ಯ ಸರ್ಕಾರವು ಪಾಲು ನೀಡಬೇಕಿದೆ. ಬಾಕಿ ಯೋಜನೆಗಳನ್ನು ಪೂರ್ಣಗೊಳಿಸಿದರೆ ರಾಜ್ಯದ ಅಭಿವೃದ್ಧಿಗೆ ಪೂರಕ ಆಗಲಿದೆ ಎಂದು ಹೇಳಿದರು.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದೇನೆ. ರೇಲ್ವೆ ಯೋಜನೆ ಪೂರ್ಣಗೊಳಿಸಲು ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಸಿದ್ದರಾಮಯ್ಯ ಅವರು ಕೇಂದ್ರದ ಯೋಜನೆಗಳಾದ ನರ್ಮ್, ಉದ್ಯೋಗ ಖಾತ್ರಿ, ಸೋಲಾರ್ ಮೊದಲಾದವುಗಳನ್ನು ಚುರುಕುಗೊಳಿಸಬೇಕು. ದಸರೆ ಆದ ಮೇಲೆ ಈ ಬಗ್ಗೆ ಪರಿಣಿತರನ್ನು ಕರೆದು ಚರ್ಚಿಸಬೇಕು. ಈ ಮೂಲಕ ಮೈಸೂರು ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಕೋರಿದರು.
ಬಿಜೆಪಿ ಸರ್ಕಾರ ಹಳಿ ತಪ್ಪಿತ್ತು...: ರಾಜ್ಯದಲ್ಲಿ 5 ವರ್ಷ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಹಳಿ ತಪ್ಪಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸರ್ಕಾರವನ್ನು ಹಳಿಗೆ ತಂದಿದ್ದಾರೆ. ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್ ಕಾಲದಲ್ಲಿ ಏನಾಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ.
ಹೀಗಾಗಿ ಬಿಜೆಪಿಯವರು ಟೀಕೆ ಮಾಡುವುದರ ಬದಲು ಸಲಹೆ ನೀಡಿದರೇ ಸರ್ಕಾರಕ್ಕೆ ನಡೆಸಲು ಅನುಕೂಲ ಆಗುತ್ತದೆ ಎಂದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೆ ಬಿಜೆಪಿಗೆ ಹೋಗಿ ಅವಮಾನ ಅನುಭವಿಸುವುದು ಬೇಡ, ಈ ಬಗ್ಗೆ ಯೋಚಿಸಬೇಕು ಎಂದು ಸಲಹೆ ನೀಡಿದರು. ಕಳೆದ 5 ವರ್ಷಗಳಿಂದ ರಾಜ್ಯದಲ್ಲಿ ನೈತಿಕತೆ ಇರರಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನೈತಿಕತೆಗೆ ಟಿಂಕರಿಂಗ್ ಮಾಡಿದ್ದೇವೆ. ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರುವ ವಾರ್ತಾ ಸಚಿವ ಸಂತೋಷ್ ಲಾಡ್ ಅವರ ವಿಚಾರದಲ್ಲಿ ಎಲ್ಲವು ಕಾನೂನು ಪ್ರಕಾರ ಆಗಲಿ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
ದಾಸೇಗೌಡ, ಬಸವೇಗೌಡ, ವೆಂಕಟೇಶ್, ರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

