ಮೈಸೂರು

ಗೂಡ್ಸ್ ಆಟೋ ಡಿಕ್ಕಿ; ಪಾದಚಾರಿ ಸಾವು

Published On :

ಮೈಸೂರು: ಗೂಡ್ಸ್ ಆಟೋ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜ ಜೋಡಿ ರಸ್ತೆ ಶಾಂತಲಾ ಚಿತ್ರಮಂದಿರ ಜಂಕ್ಷನ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಕೆ.ಆರ್. ಮೊಹಲ್ಲಾ ಸುಣ್ಣದಕೇರಿ ನಿವಾಸಿ ಸಿದ್ದಯ್ಯ ಎಂಬವರ ಪುತ್ರ ಭೈರ(45) ಮೃತಪಟ್ಟವರು. ಇವರು ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದು, ಶಾಂತಲಾ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ ರಾಮಸ್ವಾಮಿ ವೃತ್ತ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ಆಟೋ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್. ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಎನ್.ಸಿ. ನಾಗೇಗೌಡ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಸಾಗಣೆ; 21 ಕ್ವಿಂಟಾಲ್ ಅಕ್ಕಿ ವಶ
ಮೈಸೂರು:
ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅನ್ನಭಾಗ್ಯ ಯೋಜನೆಯ 21 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಮೇಟಗಳ್ಳಿ ಠಾಣೆ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಶನಿವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ. ಹೊರ ವರ್ತುಲ ರಸ್ತೆಯಲ್ಲಿರುವ ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್ ಬಳಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಪೊಲೀಸರು ಮತ್ತು ಆಹಾರ ಇಲಾಖೆಯವರು ದಾಳಿ ನಡೆಸಿದ್ದಾರೆ. ಚಾಲಕ ಪರಾರಿಯಾಗಿದ್ದು, ಗೂಡ್ಸ್ ವಾಹನ ಹಾಗೂ 42 ಚೀಲಗಳಲ್ಲಿದ್ದ 21 ಕ್ವಿಂಟಾಲ್ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಹಾರ ಇಲಾಖೆ ಇನ್ಸ್‌ಪೆಕ್ಟರ್ ಸಿ. ರಾಮು ನೀಡಿರುವ ದೂರಿನ್ವಯ ಮೇಟಗಳ್ಳಿ ಠಾಣೆ ಇನ್ಸ್‌ಪೆಕ್ಟರ್ ವಿವೇಕಾನಂದ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಥುರಾನಗರದಲ್ಲಿ ಸರ ಅಪಹರಣ
ಮೈಸೂರು:
ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿಕೊಂಡು ಹೋಗಿರುವ ಘಟನೆ ಮಥುರಾನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಹೆಬ್ಬಾಳು ಸೂರ್ಯಬೇಕರಿ ಬಳಿಯ ನಿವಾಸಿ ಮಂಗಳಮ್ಮ(40) ಸರ ಕಳೆದುಕೊಂಡವರು. ಇವರು ಪತಿಯೊಂದಿಗೆ ಮೇಟಗಳ್ಳಿಗೆ ಹೋಗಿ ವಾಪಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿಕೊಂಡು ಹೋಗಿದ್ದಾರೆ. ಈ ಸಂಬಂಧ ಮೇಟಗಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬೊಲೆರೋ ವಾಹನ ಪಲ್ಟಿ; ಇಬ್ಬರಿಗೆ ಗಾಯ
ಮೈಸೂರು:
ಬೊಲೆರೋ ವಾಹನ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಂಜನಗೂಡು ರಸ್ತೆ ಉಂಡುಬತ್ತಿಕೆರೆ ಏರಿ ಮೇಲೆ ಶನಿವಾರ ಬೆಳಗ್ಗೆ ನಡೆದಿದೆ. ಮೈಸೂರಿನ ವಿನುತ್ ಮತ್ತು ಕಾರ್ತಿಕ್ ಗಾಯಗೊಂಡವರು. ಇವರು ನಂಜನಗೂಡಿನಿಂದ ವಾಪಸ್ ಮೈಸೂರಿಗೆ ಬರುತ್ತಿದ್ದಾಗ ಚಾಲಕ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲೆ ವಾಹನ ಪಲ್ಟಿಯಾಗಿದೆ. ಈ ಸಂಬಂಧ ಮೈಸೂರು ದಕ್ಷಿಣ ಠಾಣೆ ಎಸ್‌ಐ ಜಗದೀಶ್ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಯುವಕ ಅನುಮಾನಸ್ಪದ ಸಾವು
ಮೈಸೂರು:
ಯುವಕನೊಬ್ಬ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹೂಟಗಳ್ಳಿ ಕೈಗಾರಿಕಾ ಪ್ರದೇಶದ ರಾಣೆ ಮದ್ರಾಸ್ ಫ್ಯಾಕ್ಟರಿ ಬಳಿ ನಡೆದಿದೆ. ಹೆಬ್ಬಾಳು ಸಂಕ್ರಾಂತಿ ವೃತ್ತ ಬಳಿಯ ನಿವಾಸಿ ಚಂದನ್(26) ಮೃತಪಟ್ಟವರು. ಶುಕ್ರವಾರ ಬೆಳಗಿನ ಜಾವ ರಾಣೆ ಮದ್ರಾಸ್ ಫ್ಯಾಕ್ಟರಿ ಬಳಿ ರಕ್ತಸಿಕ್ತವಾಗಿ ಬಿದ್ದಿದ್ದ ಚಂದನ್‌ನನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ಗಂಟೆಗಳ ಬಳಿಕ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಅಥವಾ ಕುಡಿದ ಅಮಲಿನಲ್ಲಿ ಬಿದ್ದು ಗಾಯಗೊಂಡು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಎಸ್‌ಐ ಕುಮಾರ್ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇಂದು ಸಭೆ
ಮೈಸೂರು:
ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅ.20ರ ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗಳಲ್ಲಿ ಅಹವಾಲುಗಳನ್ನು ನೀಡಬಹುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.