ಧರ್ಮಸ್ಥಳ ಧರ್ಮಾಧಿಕಾರಿ ಪರ ಜೈನ ಸಮಾಜ ಮೆರವಣಿಗೆ
ಮೈಸೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಧರ್ಮಸ್ಥಳ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ದೂಷಿಸುತ್ತಿರುವುದನ್ನು ಖಂಡಿಸಿ ದಿಗಂಬರ ಜೈನ ಸಮಾಜದವರು ಶನಿವಾರ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು.
ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನೂರಾರು ಮಂದಿ ಜಮಾಯಿಸಿ ಮೆರವಣಿಗೆ ಹೊರಟು ದೊಡ್ಡ ಗಡಿಯಾರ, ಗಾಂಧಿ ಚೌಕ, ಚಿಕ್ಕ ಗಡಿಯಾರ, ದೇವರಾಜ ಅರಸು ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ತಮ್ಮ ಮನವಿ ಸಲ್ಲಿಸಿದರು.
ಡಾ. ವೀರೇಂದ್ರ ಹೆಗ್ಗಡೆ ಅವರು ಧರ್ಮಕರ್ತರಾಗಿ ನಿಷ್ಠೆಯಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನರ ಹಿತಾಸಕ್ತಿಗಾಗಿ ಧಾರ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸುವುದರ ಜೊತೆಗೆ ಅಹಿಂಸಾ ತತ್ವ ಪ್ರಚಾರ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಯ ವಿರುದ್ಧ ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡುವ ಮೂಲಕ ಮಾನಹಾನಿಗೆ ಹೊರಟಿರುವುದು ಸರಿಯಲ್ಲ ಎಂದು ಖಂಡಿಸಿದರು.
ಇದರಿಂದ ಶ್ರೀಕ್ಷೇತ್ರದ ಭಕ್ತರ ಮನಸ್ಸಿಗೆ ನೋವಾಗಿದೆ. ಧರ್ಮಸ್ಥಳದ ಬಗ್ಗೆ ಭಕ್ತರಲ್ಲಿ ಇರುವ ಪವಿತ್ರ ಭಾವನೆಗೆ ಧಕ್ಕೆ ತರುವ ಹುನ್ನಾರ ನಡೆದಿದೆ. ಧರ್ಮಸ್ಥಳ ಮತ್ತು ಹೆಗ್ಗಡೆ ಅವರ ವಿರುದ್ಧ ಅಸಂಬದ್ಧ ಹೇಳಿಕೆ ನೀಡುತ್ತಿರುವ ವ್ಯಕ್ತಿ ಹಾಗೂ ಸಂಘಟನೆಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಎನ್. ಪ್ರಕಾಶ್ಬಾಬು, ಉಪಾಧ್ಯಕ್ಷರಾದ ಬಿ.ಎಸ್. ಸಂತೋಷ್ಕುಮಾರ್, ಎನ್. ಪ್ರಸನ್ನಕುಮಾರ್, ಕೋಶಾಧ್ಯಕ್ಷ ಎಂ.ಆರ್. ಸುನಿಲ್ಕುಮಾರ್ ಕಾರ್ಯದರ್ಶಿ ಎಂ.ಎ. ಕಾಳಪ್ಪ ಇಜಾರಿ, ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಸಿದ್ದರಾಜು, ಸಿ.ಎಚ್. ವಿಜಯಶಂಕರ್, ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ಮೇಯರ್ ಎನ್.ಎಂ. ರಾಜೇಶ್ವರಿ, ಉಪ ಮೇಯರ್ ವಿ. ಶೈಲೇಂದ್ರ, ಎಂಡಿಎ ಮಾಜಿ ಅಧ್ಯಕ್ಷ ಎಲ್. ನಾಗೇಂದ್ರ, ನಗರ ಪಾಲಿಕೆ ಸದಸ್ಯ ಆರ್. ಲಿಂಗಪ್ಪ, ಸಾಹಿತಿ ಡಾ. ಲತಾ ರಾಜಶೇಖರ್, ಚಂದ್ರಶೇಖರ್, ಸುಧಾಕರ ಶೆಟ್ಟಿ ಇದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅಪಪ್ರಚಾರ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದರೇ ಸತ್ಯಾಂಶ ಬೆಳಕಿಗೆ ಬರುತ್ತದೆ.
- ಸಿ.ಎಚ್. ವಿಜಯಶಂಕರ್, ವಿಧಾನ ಪರಿಷತ್ ಸದಸ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

