ಮೈಸೂರು

ಮೋದಿ ನೇತೃತ್ವದಲ್ಲಿಯೇ ಲೋಕ ಚುನಾವಣೆ

Published On :

ಕ.ಪ್ರ. ವಾರ್ತೆ   ಟಿ. ನರಸೀಪುರ   ಸೆ.6
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ಪ್ರಧಾನಿಯಾಗಲು ಸಮರ್ಥವಾದ ನಾಯಕರಾಗಿದ್ದು, ಅವರ ನೇತೃತ್ವದಲ್ಲಿಯೇ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಹಿಡಿಯುವುದು ಬಹುತೇಕ ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಹೇಳಿದರು.
ಪಟ್ಟಣದ ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಬಿಜೆಪಿ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ನರೇಂದ್ರ ಮೋದಿಯವರೆ ಮುಂದಿನ ಪ್ರಧಾನಿ ಎಂಬುದಾಗಿ ಸಮೀಕ್ಷೆಗಳು ಹೇಳುತ್ತಿರುವುದನ್ನು ದೇಶದ ಮಾಧ್ಯಮಗಳು ಬಿಂಬಿಸುತ್ತಿವೆ ಎಂದರು.
ರಾಜ್ಯ ಬಿಜೆಪಿಯಲ್ಲಿ ಗೊಂದಲ ತಲೆದೋರಿದ್ದರಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು. ಈ ಹಿಂದೆಯೂ ಕಾಂಗ್ರೆಸ್ ಆಡಳಿತಕ್ಕೆ ಬೇಸತ್ತಿದ್ದ ಜನತೆ ಅವರನ್ನು ಅಧಿಕಾರದಿಂದ ದೂರ ಇರಿಸಿದ್ದರು. ಆಗಿರುವ ತಪ್ಪು ಮರೆಯೋಣ, ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸೋಣ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅವರು ಕರೆ ನೀಡಿದರು.
ನೇಮಕಾತಿ ಪತ್ರ ವಿತರಣೆ: ನರಸೀಪುರ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್ ಗೌಡ ಮಾತನಾಡಿ, ಪಕ್ಷದ ಕಾರ್ಯಕಾರಿಣಿ ಸಮಿತಿಯಲ್ಲಿ ಸ್ಥಾನ ಸಿಗುವುದು ಮುಖ್ಯವಲ್ಲ. ಕಾರ್ಯಕರ್ತರಿಗೆ ಪಕ್ಷ ಸಂಘಟಿಸುವ ಕೆಲಸಕ್ಕೆ ಪ್ರಾಮುಖ್ಯತೆ ನೀಡಬೇಕು. ಜೆಡಿಎಸ್ ಜತೆಗಿನ 20 ತಿಂಗಳ ಆಡಳಿತ ಹಾಗೂ ಐದು ವರ್ಷಗಳ ಪೂರ್ಣ ಸರ್ಕಾರದ ಆಡಳಿತ ನೀಡಿದ್ದರೂ ಯಾವೊಂದು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಪೂರೈಸಲಾಗಲಿಲ್ಲ. ಆದ್ದರಿಂದ ಭಿನ್ನಾಭಿಪ್ರಾಯ ಬದಿಗೊತ್ತಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಭೆಯಲ್ಲಿ ಪಪಂ ಸದಸ್ಯೆ ರತ್ನಮ್ಮ, ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಸಿದ್ದರಾಜು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಆರ್. ಅರ್ಜುನ್, ಕ್ಷೇತ್ರಾಧ್ಯಕ್ಷ ಕೆ.ಎಸ್. ಬಸವರಾಜು, ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರ, ಯುವ ಮೋರ್ಚಾ ಅಧ್ಯಕ್ಷ ವಿಜಯ್ಕುಮಾರ್, ಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಲೋಕೇಶ್, ಮುಖಂಡರಾದ ಕಿಟ್ಟಿ, ಪ್ರಕಾಶ್, ಮಹದೇವಸ್ವಾಮಿ, ರಂಗರಾಜು, ಬಿ.ಪಿ. ಸಿದ್ದರಾಜು, ಮಹದೇವಸ್ವಾಮಿ, ಕುಮಾರ, ಮೀನಾ, ರೂಪಪ್ರಕಾಶ್, ಮಂಗಳ, ಮಾದಪ್ಪ, ಮಣಿಕಂಠ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.