ಪಿರಿಯಾಪಟ್ಟಣ ಗ್ರಾಮೀಣ ದಸರಾಗೆ ಸಿದ್ಧತೆ
ಪಿರಿಯಾಪಟ್ಟಣ: ಪಿರಿಯಾಪಟ್ಟಣದಲ್ಲಿ ಸೆ.26 ರಂದು ಗ್ರಾಮೀಣ ದಸರಾ ಮಹೋತ್ಸವ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಗ್ರಾಮೀಣ ದಸರಾ ಆಚರಣೆ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ದಸರಾವನ್ನು ತಾಲೂಕಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು. ಆಚರಣೆಗೆ ಸಾರ್ವಜನಿಕರ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದರು.
ಗ್ರಾಮೀಣ ದಸರಾ ಅಂಗವಾಗಿ ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗ್ರಾಮೀಣ ದಸರಾ ಕ್ರೀಡಾಕೂಟವನ್ನು ಸೆ.18ರಂದು ಏರ್ಪಡಿಸಲಾಗಿದ್ದು, 40 ವರ್ಷಕ್ಕಿಂತ ಕೆಳಗಿನ ಹಾಗೂ 40 ವರ್ಷಕ್ಕಿಂತ ಮೇಲಿನ ಪುರುಷ ಹಾಗೂ ಮಹಿಳೆಯರ ಪ್ರತ್ಯೇಕ ವಿಭಾಗಗಳಲ್ಲಿ ಕೆಸರುಗದ್ದೆ ಓಟ, ಗುಂಡು ಎತ್ತುವ ಸ್ಪರ್ಧೆ, ಗೊಬ್ಬರದ ಮೂಟೆ ಹೊರುವ ಸ್ಪರ್ಧೆ, ನೀರಿನ ಬಿಂದಿಗೆ ಹೊತ್ತು ಓಡುವ ಸ್ಪರ್ಧೆ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸೆ.26ರಂದು ಗ್ರಾಮೀಣ ದಸರಾ ಮಹೋತ್ಸವ ಏರ್ಪಡಿಸಿದ್ದು, ಈ ಬಾರಿ ವಿಶೇಷವಾಗಿ ಟಿಬೆಟಿಯನ್ನರ ವಾದ್ಯ ವೃಂದದ ಮೆರವಣಿಗೆ ಹಾಗೂ ಟಿಬೆಟಿಯನ್ನರ ಸಾಂಪ್ರದಾಯಿಕ ನೃತ್ಯ ಏರ್ಪಡಿಸಲಾಗಿದೆ ಎಂದರು.
ಪಟ್ಟಣದ ಎಪಿಎಂಸಿ ಮಾರುಕಟ್ಟೆ ಮುಂಭಾಗದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಅದ್ಧೂರಿ ಮೆರವಣಿಗೆ ಏರ್ಪಡಿಸಲಾಗುವುದು. ಮೆರವಣಿಗೆಯಲ್ಲಿ ವಿಶೇಷವಾಗಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚು ಮಹತ್ವ ನೀಡಲಾಗುವುದು. ವಿವಿಧ ಇಲಾಖೆಗೆ ಸಂಬಂಧಿಸಿದ ಸ್ತಬ್ಧಚಿತ್ರಗಳ ಮೆರವಣಿಗೆ, ಪೊಲೀಸ್ ವಾದ್ಯಗೋಷ್ಠಿ ಏರ್ಪಡಿಸುವುದಾಗಿ ತಿಳಿಸಿದರು.
ಸ್ಥಳೀಯ ಕಾರ್ಯಕ್ರಮಕ್ಕೆ ಆದ್ಯತೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗ್ರಾಮೀಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸೆ.26ರಂದು ನಡೆಸಲಾಗುವುದು. ಸ್ಥಳೀಯ ಇತಿಹಾಸ ಸಾರುವ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಕಾರ್ಯಕ್ರಮಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು. ಗ್ರಾಮೀಣ ದಸರಾ ಕಾರ್ಯಕ್ರಮದಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಸ್ತುಪ್ರದರ್ಶನ ಹಾಗೂ ಸ್ಥಳೀಯ ಸ್ತ್ರೀ ಶಕ್ತಿ ಗುಂಪುಗಳ ಉತ್ಪನ್ನ ಹಾಗೂ ಆಹಾರ ಪದಾರ್ಥಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಳಿಗೆ ತೆರೆಯಲಾಗುವುದು ಎಂದು ತಿಳಿಸಿದರು. ತಾಪಂ ಪ್ರಭಾರ ಅಧ್ಯಕ್ಷ ಅತ್ತರ್ಮತಿನ್ ಮಾತನಾಡಿ, ನಮ್ಮ ಗ್ರಾಮೀಣ ಭಾಗಗಳಲ್ಲಿ ಅಂಗವಿಕಲರಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವೇದಿಕೆ ಕಲ್ಪಿಸಿಕೊಡುವಂತೆ ಸಲಹೆ ನೀಡಿದರು. ಸಭೆಯಲ್ಲಿ ತಾಪಂ ಸದಸ್ಯರಾದ ರಘುನಾಥ್, ಶೈಲಜಾ, ಪವಿತ್ರ, ಗೀತಾ, ಬಿ.ವಿ. ಅನಿತಾ, ಸರಸ್ವತಿ, ಶಂಕರೇಗೌಡ, ಜವರಪ್ಪ, ಪ್ರಕಾಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಪ್ರಕಾಶ್, ಪ್ರಭಾರ ಇಒ ಮನೋಹರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

