ಮೈಸೂರು

ಸಮಾಜದ ಸ್ವಾಸ್ಥ್ಯಕ್ಕೆ ಸ್ತ್ರೀ ಸಬಲೀಕರಣ ಅವಶ್ಯ

Published On :

ಕ.ಪ್ರ.ವಾರ್ತೆ  ಮೈಸೂರು  ಸೆ. 17
ಸ್ತ್ರೀಯರ ಸಬಲೀಕರಣದಿಂದ ಸಮಾಜದ ಸ್ವಾಸ್ಥ್ಯ ಸಾಧ್ಯ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
ವಿಜಯನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡಾ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಸಮಾಜದಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಶಕ್ತರಾಗುತ್ತಿರುವುದು ಸಂತಸದ ಸಂಗತಿ. ಆದರೆ ಅದು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗಿಲ್ಲ. ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದರೂ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಮುಂದಾಗಿಲ್ಲ. ಆದ್ದರಿಂದ ಸರ್ಕಾರದ ಸವಲತ್ತು ಪಡೆದುಕೊಂಡು ಮುಂದೆ ಬರಬೇಕು ಎಂದರು.
ಒಂದು ಹೆಣ್ಣು ಕಲಿತರೆ ಇಡೀ ಕುಟುಂಬ ಕಲಿತಂತೆ. ಇದರಿಂದ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಜೀವನದಲ್ಲಿ ನಿಶ್ಚಿತ ಗುರಿಯನ್ನು ಇರಿಸಿಕೊಂಡು ಸಾಧನೆಯ ಹಾದಿಯತ್ತ ಸಾಗಬೇಕು. ಇದಕ್ಕಾಗಿ ಶ್ರದ್ದೆ ಹಾಗೂ ಶ್ರಮ ವಹಿಸಿ ಶಿಕ್ಷಣ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿರುವ ಈ ಕಾಲೇಜಿನಲ್ಲಿ ಕಟ್ಟಡ ಸೇರಿದಂತೆ ಅನೇಕ ಮೂಲ ಸೌಕರ್ಯಗಳ ಕೊರತೆ ಇರುವುದನ್ನು ಮನಗಂಡಿದ್ದೇನೆ. ನನ್ನ ಅವಧಿಯಲ್ಲಿ ಇದರ ಅಭಿವೃದ್ಧಿಗೆ ಬೇಕಾದ ನೆರವನ್ನು ನೀಡಿ ಸಹಕರಿಸುವುದಾಗಿ ಅವರು ಭರವಸೆ ನೀಡಿದರು.
ಮುಖ್ಯ ಭಾಷಣ ಮಾಡಿದ ಮಹಾರಾಣಿ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಎಚ್.ಬಿ. ಮಲ್ಲಿಕಾರ್ಜುನಸ್ವಾಮಿ, ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ಮಹತ್ವವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶವಿದೆ. ಪುರುಷರು ಮತ್ತು ಮಹಿಳೆಯರ ಸಂಖ್ಯೆಯಲ್ಲಿ ವ್ಯತ್ಯಾಸವಾಗುತ್ತಿರುವುದು ಆತಂಕದ ಸಂಗತಿ. ಮಹಿಳೆಯರು ಸ್ವಾವಲಂಬಿಗಳಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ಮೇಯರ್ ಎನ್.ಎಂ. ರಾಜೇಶ್ವರಿ ಅವರು ಕಾಲೇಜಿನ ವಾರ್ಷಿಕ ಸಂಚಿಕೆ ಸೃಷ್ಟಿ ಬಿಡುಗಡೆಗೊಳಿಸಿ ವಿದ್ಯಾರ್ಥಿನಿಯರಿಗೆ ಶುಭಕೋರಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಪಿ. ರಘೋತ್ತಮ್ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿ ಪ್ರೊ. ಸತೀಶ್ಬಾಬು, ಕ್ರೀಡಾ ಕಾರ್ಯದರ್ಶಿ ಪ್ರೊ. ಮಾದೇಗೌಡ ಹಾಗೂ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ರಾಣಿ ಇದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸುಮ ಸ್ವಾಗತಿಸಿದರು. ಉಪಾಧ್ಯಕ್ಷೆ ಸಹನಾ ನಿರೂಪಿಸಿದರು. ಕಾರ್ಯದರ್ಶಿ ಶಿಲ್ಪಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.