'ವಿವಿ ವ್ಯಾಪ್ತಿ ಕಾಲೇಜಿನಲ್ಲಿ ಭೂಗೋಳಶಾಸ್ತ್ರ ಪಿಜಿ ವಿಭಾಗ'
ಕ.ಪ್ರ.ವಾರ್ತೆ ಮೈಸೂರು ಸೆ. 26
ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಕಾಲೇಜಿನಲ್ಲೂ ಭೂಗೋಳಶಾಸ್ತ್ರದ ಸ್ನಾತಕೋತ್ತರ ವಿಭಾಗ ತೆರೆಯುವ ಉದ್ದೇಶ ಇದೆ ಎಂದು ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಹೇಳಿದರು.
ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಭೂಗೋಳಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗ ಏರ್ಪಡಿಸಿದ್ದ ಐದನೆ ವರ್ಷದ ಶೈಕ್ಷಣಿಕ ಅವಧಿ ಪೂರೈಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜಿನಲ್ಲೂ ಭೂಗೋಳಶಾಸ್ತ್ರ ಅಧ್ಯಯನ ವಿಭಾಗ ತೆರೆಯುವ ಉದ್ದೇಶ ಇದೆ. ಆದರೆ ಸರ್ಕಾರದ ಅನುದಾನ ಕೊರತೆಯೂ ಇದೆ. ಎಲ್ಲಾ ವಿಭಾಗಗಳೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಕುಲಸಚಿವ ಪ್ರೊ. ಸಿ. ಬಸವರಾಜು ಮಾತನಾಡಿ, ಮುಂದಿನ ಜನಾಂಗವು ಪರಿಜ್ಞಾನದ ಮೂಲಕ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ನೈಸರ್ಗಿಕ ಸಂಪನ್ಮೂಲವನ್ನು ಮಿತವಾಗಿ ಬಳಸಿ ರಕ್ಷಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಪ್ರಾಂಶುಪಾಲೆ ಪ್ರೊ. ಸ.ನ. ಗಾಯತ್ರಿ, ಆಡಳಿತಾಧಿಕಾರಿ ಪ್ರೊ. ನಾಗರಾಜಮೂರ್ತಿ ಇದ್ದರು.
ಆರೋಗ್ಯ ಸುಧಾರಣೆ ಯೋಜನೆಗೆ ಜಿಲ್ಲೆ ಆಯ್ಕೆ
ಕ.ಪ್ರ.ವಾರ್ತೆ ಮೈಸೂರು ಸೆ. 26
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆ ಸಾರ್ವತ್ರಿಕ ಆರೋಗ್ಯ ಸುಧಾರಣಾ ಯೋಜನೆಯ ಮಾದರಿ ಅನುಷ್ಠಾನಕ್ಕೆ ಮೈಸೂರು ಜಿಲ್ಲೆ ಆಯ್ಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ. ಮದನಗೋಪಾಲ್ ಹೇಳಿದರು. ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆರೋಗ್ಯ ಸೇವೆಯಲ್ಲಿ ವಿಭಿನ್ನ ಸ್ಥಾನದಲ್ಲಿರುವ ರಾಯಚೂರು ಜಿಲ್ಲೆ ಹಾಗೂ ಮೈಸೂರು ಜಿಲ್ಲೆಗಳನ್ನು ಈ ಪೈಲಟ್ ಯೋಜನೆಗೆ ಆಯ್ಕೆ ಮಾಡಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ಯೋಜನೆಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನಾ ಆಯೋಗ ಕೂಡ ಯೋಜನೆಗೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.
ಆರೋಗ್ಯ ಮತ್ತು ಶಿಕ್ಷಣದಂತಹ ಕ್ಷೇತ್ರದಲ್ಲಿ ತೊಡಗಿಸುವ ಬಂಡವಾಳ ರಾಷ್ಟ್ರಮಟ್ಟದ ನೂತನ ಸಂಪನ್ಮೂಲದ ಅಭಿವೃದ್ಧಿಗೆ ನೆರವಾಗುತ್ತದೆ. ಸಮಾಜದ ತಳ ಹಂತದಲ್ಲಿರುವ ವ್ಯಕ್ತಿ ಕೂಡ ಅತ್ಯುತ್ತಮ ಆರೋಗ್ಯ ಸೌಲಭ್ಯ ಪಡೆಯುವಂತಾಗಬೇಕು ಎಂಬ ಆಶಯದಿಂದ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ಡಾ. ಸುರೇಶ್, ಕೆ. ಮೆಹಮದ್, ಡಾ. ಸಾಧನಾ, ಜಿಲ್ಲಾಧಿಕಾರಿ ಸಿ. ಶಿಖಾ, ಡಾ.ಎಸ್.ಎಂ. ಮಾಲೇಗೌಡ, ಎಸ್ವಿವೈಎಂನ ಡಾ. ಬಾಲಸುಬ್ರಹ್ಮಣ್ಯಂ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

