ಮೈಸೂರು

ಕೈ- ಎಸ್‌ಡಿಪಿಐ ಘರ್ಷಣೆ

Published On :

ಕ.ಪ್ರ.ವಾರ್ತೆ ಮೈಸೂರು ಏ. 17
ಮತದಾರರನ್ನು ಮತಗಟ್ಟೆಗೆ ಕರೆತಂದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಗುರುವಾರ ನಡೆದಿದೆ.
ಈ ಘರ್ಷಣೆಯಲ್ಲಿ ಕಾಂಗ್ರೆಸ್ ಪಕ್ಷದ 5 ಮಂದಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮೊಹಮ್ಮದ್ ಫೈಜಲ್ ಎಂಬವರಿಗೆ ಸೇರಿದ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ಜಖಂಗೊಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಾದ ಅಕ್ರಂ, ಕಲೀಂ ಪಾಷ, ಮೊಹಮ್ಮದ್ ಕಲೀಂವುಲ್ಲಾ, ಇಮ್ರಾನ್ ಮತ್ತು ಶಾಹೀರ್ ಅಹಮ್ಮದ್ ಖಾನ್ ಎಂಬವರು ಘರ್ಷಣೆಯಲ್ಲಿ ಗಾಯಗೊಂಡಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ: ಅಜೀಜ್ ಸೇಠ್ ನಗರದ ಫರೂಕಿಯಾ ಉರ್ದು ಶಾಲೆಯಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ 167, 168 ಮತ್ತು 169 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಮತಗಟ್ಟೆ ವ್ಯಾಪ್ತಿಯ ಮತದಾರರ ಈ ಶಾಲೆಗೆ ಆಗಮಿಸಿ ಮತದಾನ ಮಾಡುತ್ತಿದ್ದರು. ಸೂಕ್ಷಾತೀ ಸೂಕ್ಷ್ಮವಾದ ಮತದಾನ ಕೇಂದ್ರವಾಗಿದ್ದರಿಂದ ಕೇಂದ್ರ ಅರೆಸೇನಾ ಪಡೆಯ ಸಿಬ್ಬಂದಿ, ಕೆಎಸ್‌ಆರ್‌ಪಿ ತುಕಡಿ, ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಈ ಮತಗಟ್ಟೆ ವ್ಯಾಪ್ತಿಯ ಮತದಾರರನ್ನು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ವಾಹನಗನ್ನು ಕರೆ ತರುತ್ತಿದ್ದರು. ಈ ವಿಚಾರವು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಘರ್ಷಣೆಗೆ ಕಾರಣವಾಗಿದೆ. ಮತದಾರರನ್ನು ಕರೆತರುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಾದ ಅಕ್ರಂ ಮತ್ತು ಕಲೀಂ ಪಾಷ ಎಂಬವರ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಗಾಯಗೊಂಡಿದ್ದ ಇಬ್ಬರೊಂದಿಗೆ ಉದಯಗಿರಿ ಠಾಣೆಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಠಾಣೆಯ ಬಳಿ ಕಾರಿನಲ್ಲಿ ಬಂದು ಎಸ್‌ಡಿಪಿಐನವರು ಮತ್ತೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು, ಈ ಘರ್ಷಣೆಯಲ್ಲಿ ಮೊಹಮ್ಮದ್ ಕಲೀಂವುಲ್ಲಾ, ಇಮ್ರಾನ್ ಮತ್ತು ಶಾಹೀರ್ ಅಹಮ್ಮದ್ ಖಾನ್ ಎಂಬವರು ಗಾಯಗೊಂಡಿದ್ದಾರೆ.
ಪೊಲೀಸರ ಲಾಠಿ ಪ್ರಹಾರ: ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿ, ಗಾಯಗೊಂಡವರನ್ನು ಠಾಣೆಯೊಳಗೆ ಕರೆದುಕೊಂಡು ಹೋದರು. ಚಿಕಿತ್ಸೆಗಾಗಿ ಗಾಯಾಳುಗಳನ್ನು ಕೆ.ಆರ್. ಆಸ್ಪತ್ರೆಗೆ ರವಾನಿಸಿದರು.
ಘರ್ಷಣೆ ವಿಚಾರ ತಿಳಿದು ಶಾಸಕ ತನ್ವೀರ್ ಸೇಠ್, ಮಾಜಿ ಮೇಯರ್ ಅಯೂಬ್ ಖಾನ್, ಪಾಲಿಕೆ ಸದಸ್ಯ ಶೌಕತ್ ಪಾಷ ಉದಯಗಿರಿ ಠಾಣೆಗೆ ಧಾವಿಸಿದರು. ಈ ಮುಖಂಡರನ್ನು ಹಿಂಬಾಲಿಸಿಕೊಂಡು ಬಂದ ಕಾಂಗ್ರೆಸ್ ಕಾರ್ಯಕರ್ತರು, ಠಾಣೆ ಬಳಿಯಿದ್ದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮೊಹಮ್ಮದ್ ಫೈಜಲ್ ಕಾರನ್ನು ಜಖಂಗೊಳಿಸಿದರು. ಈ ವೇಳೆ ಪೊಲೀಸರು ಮತ್ತೆ ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.
ಈ ವಿಚಾರ ತಿಳಿದು ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಸ್ಥಳಕ್ಕೆ ಧಾವಿಸಿದರು. ಠಾಣೆ ಎದುರು ಜಮಾಯಿಸಿದ್ದವರನ್ನು ಜನರನ್ನು ಪೊಲೀಸರು ಮತ್ತೆ ಲಾಠಿ ಬೀಸಿ ಚದುರಿಸಿದರು. ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮತ್ತು ಮುಖಂಡರು ಪೊಲೀಸರೊಂದಿಗೆ ಚರ್ಚಿಸಿ, ಪರಿಸ್ಥಿತಿ ತಿಳಿಗೊಳಿಸಿದರು.
ಉದಯಗಿರಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.