ತಾಂತ್ರಿಕ, ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿ
ಮೈಸೂರು: ಈಗಿನ ಬದಲಾದ ಕಾಲಘಟ್ಟದಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಸಲಹೆ ನೀಡಿದರು.
ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಬುಧವಾರ ನಡೆದ ಶಾರದಾ ವಿಲಾಸ ಶಿಕ್ಷಣ ಕಾಲೇಜು ಮತ್ತು ಬಾಲಿಕಾ ಪ್ರೌಢಶಾಲೆಯ ಸುವರ್ಣ ಸಂಭ್ರಮ ಹಾಗೂ ಇ- ಆಡಳಿತವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಂತ್ರಿಕ ಶಿಕ್ಷಣಕ್ಕೆ ಮಹತ್ವ ಹೆಚ್ಚುತ್ತಿದೆ. ಹೀಗಾಗಿ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಜೊತೆಗೆ ವೃತ್ತಿಪರ ಶಿಕ್ಷಣಕ್ಕೂ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ನೈಪಣ್ಯ ತರಬೇತಿ ನೀಡುವ ಯೋಜನೆ ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಹಿಂದೆ ಆರ್ಥಿಕವಾಗಿ ಸದೃಢವಾಗಿದ್ದರೂ ಶಿಕ್ಷಣದತ್ತ ಹೆಚ್ಚಿನ ಒಲವು ತೋರುತ್ತಿರಲಿಲ್ಲ. ಆದರೆ, 21ನೇ ಶತಮಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಕೇಂದ್ರ ಸರ್ಕಾರವು ಗುಣಮಟ್ಟ ಹಾಗೂ ಕಡ್ಡಾಯ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಿದ್ದು, ಇದನ್ನು ಬಳಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕು ಎಂದರು.
ಪ್ರಸ್ತುತ ವಿಶ್ವ ಎಂಬುದು ಸಣ್ಣ ಹಳ್ಳಿಯಾಗಿ ಮಾರ್ಪಟ್ಟಿದೆ. ವಿದ್ಯಾರ್ಥಿಗಳು ವಿಶ್ವದೊಂದಿಗೆ ಸ್ಪರ್ಧೆ ಮಾಡಬೇಕಾದರೆ ಗುಣಮಟ್ಟದ ಶಿಕ್ಷಣ ಪಡೆಯುವುದು ಅನಿವಾರ್ಯ. ನಮ್ಮಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕಡಿಮೆ ಇದೆ. ರಾಜ್ಯದಲ್ಲಿ 18ರಿಂದ 25 ವಯಸ್ಸಿನವರು 70 ಲಕ್ಷ ಜನರಿದ್ದಾರೆ. ಆದರೆ, ಇವರಲ್ಲಿ 17 ಲಕ್ಷ ಮಂದಿ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಉನ್ನತ ಶಿಕ್ಷಣ ಪಡೆಯುತ್ತಿರುವವರ ಸರಾಸರಿ 2020ರ ವೇಳೆಗೆ ಶೇ.30 ಆಗಬೇಕು. ಹೀಗಾಗಿ ಹೆಚ್ಚಿನ ಯುವಕರು ಉನ್ನತ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು ಎಂದು ಅವರು ಕರೆ ನೀಡಿದರು. ರಾಜ್ಯದ ಅನುದಾನಿತ ಸಂಸ್ಥೆಗಳಿಗೆ ಸರ್ಕಾರವು ವಾರ್ಷಿಕ 900 ಕೋಟಿ ನೀಡುತ್ತಿದೆ. ನಿರೀಕ್ಷಿತ ಸಂಪನ್ಮೂಲ ಕ್ರೋಡೀಕರಣ ಆಗದಿದ್ದರೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅನುದಾನ ಕೋರಿ ಬಹುತೇಕ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯ ಹೊಂದಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನುದಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯದ ಕೊರತೆ ಇದೆ. ಇದನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಇದೇ ವೇಳೆ ಶಾರದಾ ವಿಲಾಸ ಸ್ನಾತಕೋತ್ತರ ಪದವಿ ಸಂಕೀರ್ಣದ ಶಿಲಾನ್ಯಾಸವನ್ನು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ನೆರವೇರಿಸಿದರು. ಸುವರ್ಣ ಸ್ಮೃತಿ ಸಂಪುಟವನ್ನು ಶಾಸಕ ವಾಸು ಬಿಡುಗಡೆಗೊಳಿಸಿದರು.
ಶಾಸಕ ಎಂ.ಕೆ.ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ನಂದಕುಮಾರ್, ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಸ್. ಪಾರ್ಥಸಾರಥಿ, ಕಾರ್ಯದರ್ಶಿ ಎಸ್. ರವಿಶಂಕರ್ ಇದ್ದರು.
ಸಿಇಟಿ ಅಕ್ರಮ; ಎಷ್ಟೇ ಪ್ರಭಾವಿಯಾದರೂ ಕ್ರಮ
ಮೈಸೂರು: ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆ ಅಕ್ರಮದಲ್ಲಿ ಎಷ್ಟೇ ದೊಡ್ಡವರು, ಸಣ್ಣವರು ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ದೇಶಪಾಂಡೆ ಹೇಳಿದರು. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, 2013-14 ಸಾಲಿನ ಸಿಇಟಿ ಸಮಸ್ಯೆ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಈ ವಿಚಾರವಾಗಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರು, ತಹಸೀಲ್ದಾರರು ಮತ್ತು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ ಎಂದರು. ಅಕ್ರಮ ತನಿಖೆಗಾಗಿ ಸಮಿತಿ ರಚಿಸಿ, ಪಾರದರ್ಶಕ ತನಿಖೆ ನಡೆಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು. ಸಿಇಟಿ ಪರಿಶೀಲನೆ ಗೊಂದಲ ಸಂಬಂಧ 122 ವಿದ್ಯಾರ್ಥಿಗಳನ್ನು ಪರಿಶೀಲಿಸಲಾಗಿದ್ದು, 70 ವಿದ್ಯಾರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

