ಮೈಸೂರು

ಕಾಂಗ್ರೆಸ್ ಸರ್ಕಾರದಿಂದ ಸಾಮಾಜಿಕ ನ್ಯಾಯ

Published On :

ಟಿ. ನರಸೀಪುರ: ಸಚಿವ ಸಂಪುಟದಲ್ಲಿ ಮೂವರು ಮುಸ್ಲಿಮರಿಗೆ, ನಾಲ್ವರು ಪರಿಶಿಷ್ಟರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನವನ್ನು ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಾಮಾಜಿಕ ನ್ಯಾಯವನ್ನು ನೀಡಲಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ಹೇಳಿದರು.
ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ, ಗರ್ಗೇಶ್ವರಿ ಗ್ರಾಮದಲ್ಲಿ ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆಯ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರು ಸೇರಿದಂತೆ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮೇಲ್ನೋಟಕ್ಕಷ್ಟೆ ಮಮ್ತಾಜ್ ಆಲಿಖಾನ್ ಅವರಿಗೆ ಸಚಿವ ಸ್ಥಾನವನ್ನು ನೀಡಲಾಗಿತ್ತು. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಆದ್ಯತೆಯನ್ನು ನೀಡಿರಲಿಲ್ಲ. ವರುಣ ಕ್ಷೇತ್ರದ ಜನತೆ ಸಿಎಂ ಕ್ಷೇತ್ರದವರು ಎಂಬುದನ್ನು ರಾಜ್ಯದೆಲ್ಲೇಡೆ ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಅಭಿವೃದ್ಧಿಗೆ ಮಿತಿಯಿಲ್ಲದಷ್ಟು ಅನುದಾನ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಮುಖಂಡ ರಾಕೇಶ್ ದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರ ಗರ್ಗೇಶ್ವರಿ ಗ್ರಾಮದಲ್ಲಿ ಒಳಚರಂಡಿ ನಿರ್ಮಾಣ ಯೋಜನೆಗೆ 99 ಲಕ್ಷ ರು. ಮಂಜೂರು ಮಾಡಿದೆ. ವರುಣ ವಿಧಾನಸಭಾ ಕ್ಷೇತ್ರದ ಸಮಸ್ತ ಜನತೆ 30 ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದರಿಂದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ದುಡಿಯುತ್ತಿದ್ದಾರೆ. ಸಿದ್ದರಾಮಯ್ಯ ಅವರ ಬತ್ತಳಿಕೆಯಲ್ಲಿರುವ ಅನೇಕ ವಿನೂತನ ಅಭಿವೃದ್ಧಿ ಕಾರ್ಯಕ್ರಮಗಳು ಫೆ.14ರ ಮುಂಗಡ ಪತ್ರದಲ್ಲಿ ಪ್ರಕಟವಾಗಲಿವೆ ಎಂದು ಮುನ್ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ, ಗರ್ಗೇಶ್ವರಿ ಕ್ಷೇತ್ರದ ಜಿಪಂ ಸದಸ್ಯ ಕೆ. ಮಹದೇವ, ತಾಪಂ ಅಧ್ಯಕ್ಷ ಚಿದರವಳ್ಳಿ ನಟರಾಜು, ಮಾಜಿ ಅಧ್ಯಕ್ಷೆ ನಸ್ರೀನ್‌ಆರೂಹಿ, ಮುಖಂಡ ಕೆ.ಸಿ. ಬಲರಾಂ, ರತ್ನಮ್ಮಗೋಪಾಲರಾಜು, ಕೆ. ಮುದ್ದೇಗೌಡ, ಬುಲೆಟ್ ಮಹದೇವ, ಅರುಣ್‌ಕುಮಾರ್, ಎಸ್. ರಮೇಶ್ ಚಾವ್ಲಾ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.