ಪಿಯು ಮಕ್ಕಳಿಗೂ ಬಿಸಿಯೂಟ
ಮೈಸೂರು: ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಿಸುವುದು ಅವಶ್ಯಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಹೇಳಿದರು. ಗ್ರಾಮೀಣ ಭಾಗದವರು ಹಾಗೂ ಇತರೆ ವಿದ್ಯಾರ್ಥಿಗಳು ಬೆಳಗ್ಗೆ ಬೇಗನೆ ತರಗತಿಗೆ ಬರುವುದರಿಂದ ಉಪಾಹಾರ ಮಾಡಲು ಸಾಧ್ಯವಾಗದಿರಬಹುದು. ದೂರದ ಊರುಗಳಿಗೆ ತೆರಳಬೇಕಾಗಿರುವುದರಿಂದ ಸರಿಯಾದ ಸಮಯಕ್ಕೆ ಊಟ ಮಾಡಲೂ ಆಗದಿರಬಹುದು. ಹೀಗಾಗಿ ಬಿಸಿಯೂಟ ಯೋಜನೆ ವಿಸ್ತರಿಸುವುದು ಅವಶ್ಯಕ. ಇದಕ್ಕೆ ಕೇಂದ್ರದಿಂದಲೂ ನೆರವು ಪಡೆಯಬಹುದು. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ತಿಳಿಸಿದರು.
ಧರ್ಮೇಶ್ ಬೆಂಗಳೂರಿಗೆ
ಮೈಸೂರು: ಜಿಂಕೆ ಬೇಟೆ ಆರೋಪ ಎದುರಿಸುತ್ತಿರುವ ಸಿಐಡಿ ಡಿವೈಎಸ್ಪಿ ಟಿ.ಕೆ. ಧರ್ಮೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಡೀಪುರ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಆರೋಪ ಎದುರಿಸುತ್ತಿರುವ ಧರ್ಮೇಶ್ ಇದುವರೆಗೂ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೃಷ್ಣಾ ತೀರ್ಪು: ಈ ವಾರ ಸರ್ಕಾರದ ನಿಲುವು
ಬಿಜಾಪುರ: ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.14 ಅಥವಾ 17ರಂದು ಸರ್ಕಾರದ ಸ್ಪಷ್ಟ ನಿಲುವು ಪ್ರಕಟಿಸಲಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತಿಳಿಸಿದರು. ಸೋಮವಾರ ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆ ನೀರಾವರಿ ಜಾಗೃತಿ ಮತ್ತು ಹೋರಾಟ ಸಮಿತಿ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು, ತಾಂತ್ರಿಕ ಪರಿಣತರ ತಂಡದ ಜತೆಗೆ ಚರ್ಚಿಸಿದ್ದಾರೆ. ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಾಧಕ ಬಾಧಕಗಳ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ತಾಂತ್ರಿಕ ಮತ್ತು ಕಾನೂನು ಪರಿಣತರ ತಂಡಕ್ಕೆ ಸೂಚಿಸಲಾಗಿದೆ. ಫೆ.11ರಂದು ಈ ತಂಡಗಳು ಸರ್ಕಾರಕ್ಕೆ ವರದಿ ಸಲ್ಲಿಸಲಿವೆ. ವರದಿ ಪರಿಶೀಲಿಸಿ ಫೆ.14 ಅಥವಾ 17ರಂದು ಈ ಕುರಿತು ಸಿಎಂ ಅವರು ಸ್ಪಷ್ಟ ನಿಲುವು ಪ್ರಕಟಿಸಲಿದ್ದಾರೆ ಎಂದರು. ಈ ಸಂಬಂಧ ಫೆ.14ರಂದು ಬಿಜಾಪುರ ಜಿಲ್ಲೆಯ ಶಾಸಕರ ಸಭೆಯನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಇದಲ್ಲದೆ ಸರ್ವ ಪಕ್ಷಗಳ ಸಭೆ ಕರೆಯುವ ಸಾಧ್ಯತೆ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ರಾಜ್ಯದ ಜನತೆಯಲ್ಲಿ ಯಾವುದೇ ಅನುಮಾನ, ಆತಂಕ ಬೇಡ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

