ಮರಗಳ ಹನನ ನಿಲ್ಲಿಸಲು ಆಗ್ರಹ
ಮೈಸೂರು: ವಿದ್ಯುತ್ ಮಾರ್ಗಕ್ಕಾಗಿ ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಲಕ್ಷಾಂತರ ಮರಗಳ ಮಾರಣಹೋಮ ಮಾಡುತ್ತಿರುವುದನ್ನು ನಿಲ್ಲಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಶನಿವಾರ ಪ್ರತಿಭಟಿಸಿದರು.
ಮೈಸೂರು ತಾಲೂಕು ಇಲವಾಲದಲ್ಲಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಕಚೇರಿ ಎದುರು ಪ್ರತಿಭಟಿಸಿದ ರೈತರು, ಬದಲಿ ಮಾರ್ಗದಲ್ಲಿ ವಿದ್ಯುತ್ ಕೊಂಡೊಯ್ಯುವ ಮೂಲಕ ಮರಗಳ ಮಾರಣಹೋಮ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಕೈಗಾದಿಂದ ಮೈಸೂರು ಮತ್ತು ಕೊಡಗು ಜಿಲ್ಲೆಯ ಮುಖಾಂತರ ಕೇರಳದ ಕೊಜಿಕೋಡ್ಗೆ 400 ಕೆ.ವಿ. ವಿದ್ಯುತ್ ಮಾರ್ಗವನ್ನು ಅಳವಡಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಕೊಡಗಿನ ಎರಡು ಮೀಸಲು ಅರಣ್ಯಗಳಲ್ಲಿ 5 ಸಾವಿರಕ್ಕೂ ಹೆಚ್ಚಿನ ಮರಗಳನ್ನು ಕಡಿದು ನಾಶ ಮಾಡಲಾಗಿದೆ. ಇದರಿಂದಾಗಿ ಈ ಪ್ರದೇಶದಲ್ಲಿರುವ ಆನೆ, ಹುಲಿಗಳು ರೈತರ ಜಮೀನುಗಳತ್ತ ಲಗ್ಗೆ ಇಡುತ್ತಿವೆ ಎಂದು ಆರೋಪಿಸಿದರು.
ಇನ್ನೂ 50 ಕಿ.ಮೀ. ದೂರವರೆಗೆ ವಿದ್ಯುತ್ ಮಾರ್ಗ ನಿರ್ಮಿಸಲು ಲಕ್ಷಕ್ಕೂ ಹೆಚ್ಚಿನ ಮರಗಳನ್ನು ಕಡಿಯಬೇಕಾಗಿದೆ. ಇದರಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಈಗಾಗಲೇ ಕಾವೇರಿ ನದಿ ನೀರಿನ ಹರಿವು ಗಣನೀಯವಾಗಿ ಕುಸಿದಿದೆ. ಮುಂದಿನ ದಿನಗಳಲ್ಲಿ ಇದರಿಂದ ತೀವ್ರ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದರಿಂದ ಕಾವೇರಿ ನದಿ ನೀರನ್ನು ಅವಲಂಬಿಸಿರುವ 8 ಕೋಟಿ ಜನರು, ಅಸಂಖ್ಯಾತ ಜಾನುವಾರು ಮತ್ತು ಕೃಷಿ ಭೂಮಿಯ ಮೇಲೆ ತುಂಬಲಾರದ ನಷ್ಟ ಉಂಟಾಗುತ್ತದೆ. ಹೀಗಾಗಿ ಪ್ರಸ್ತುತ ಇರುವ 220 ಕೆ.ವಿ. ವಿದ್ಯುತ್ ಮಾರ್ಗವನ್ನು ಮೇಲ್ದರ್ಜೆಗೇರಿಸಬೇಕು. ಕೊಡಗು- ಮೈಸೂರು ಗಡಿಭಾಗದ ಡಿಲೈನ್ ಮುಖಾಂತರ ವಿದ್ಯುತ್ ಮಾರ್ಗ ತೆಗೆದುಕೊಂಡು ಹೋಗಬೇಕು. ಗುಜರಾತ್ ಮತ್ತು ನವಿ ಮುಂಬೈ ಮಾದರಿಯಲ್ಲಿ ಸುರಂಗ ಮಾರ್ಗದಲ್ಲಿ ವಿದ್ಯುತ್ ತೆಗೆದುಕೊಂಡು ಹೋಗಬೇಕು ಎಂದು ರೈತರು ಒತ್ತಾಯಿಸಿದರು.
ರೈತ ಸಂಘಧ ರಾಜ್ಯ ಕಾರ್ಯದರ್ಶಿ ಕೆ.ಎಸ್. ನಂಜುಂಡೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ವಿಭಾಗೀಯ ಕಾರ್ಯದರ್ಶಿ ರಾಮಕೃಷ್ಣಯ್ಯ, ಮಂಡ್ಯ ಜಿಲ್ಲಾಧ್ಯಕ್ಷ ಕೋಣಸಾಲೆ ನರಸರಾಜು, ಜಿಲ್ಲಾ ಕಾರ್ಯದರ್ಶಿ ಸುರೇಶ್, ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

