ಮೈಸೂರು

25ರಂದು ಕೆ.ಆರ್.ನಗರದಲ್ಲಿ ಕೃಷಿ ಉತ್ಸವ

Published On :

ಕ.ಪ್ರ.ವಾರ್ತೆ   ಕೆ.ಆರ್. ನಗರ   ಫೆ.20
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾ. ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ, ಸರ್ಕಾರಿ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಫೆ. 25ರಂದು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಉತ್ಸವ-2014 ಏರ್ಪಡಿಸಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಎಂ. ರಮೇಶ್ ಹೇಳಿದರು.
ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಉತ್ಸವ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಈಗಾಗಲೇ ಸಮಿತಿ ರಚಿಸಲಾಗಿದ್ದು, ಪೂರ್ವಭಾವಿ ಸಭೆಗಳನ್ನು ನಡೆಸಿ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಉತ್ಸವದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ 25 ಸಾವಿರ ಮಂದಿ ಭಾಗವಹಿಸಲಿದ್ದು, ರೈತರಿಗೆ ಅತ್ಯಾಧುನಿಕ ಕೃಷಿ ತಂತ್ರಜ್ಞಾನಗಳ ಸಮಗ್ರ ಪರಿಚಯ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ, ಕೃಷಿ ಉಪಕರಣಗಳು, ಸಸಿ, ಬೀಜ, ಗೊಬ್ಬರ, ಸಸ್ಯ ಸಂರಕ್ಷಣಾ ಸಾಮಾಗ್ರಿಗಳು ಮತ್ತು ನಿತ್ಯೋಪಯೋಗ ವಸ್ತುಗಳ ಮಾರಾಟ ಮಳಿಗೆಗಳು ಸೇರಿದಂತೆ ಇತರ ರೈತ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜತೆಗೆ ಸುಧಾರಿತ ಕೃಷಿ ಪದ್ದತಿ, ಲಾಭದಾಯಕ ಹೈನುಗಾರಿಕೆ, ಸಾವಯವ ಕೃಷಿಗೆ ಸಂಬಂಧಿಸಿದ ವಿಚಾರ ಸಂಕಿರಣ, ಸಮೃದ್ದ ಜಾನಪದ ಸಂಸ್ಕೃತಿಯ ಮೇಲೆ ಬೆಳಕು ಚೆಲ್ಲುವ ಪ್ರದರ್ಶನ, ಸ್ಪರ್ಧೆ, ಪ್ರಾತ್ಯಕ್ಷಿಕೆ, ಮಹಿಳಾ ಸಬಲೀಕರಣಗಳ ಮಾಹಿತಿ ಕಾರ್ಯಾಗಾರ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮಳಿಗೆಗಳು ಹಾಗೂ ಜನಮನ ರಂಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು.
ಈ ವಿನೂತನ ಕಾರ್ಯಕ್ರಮಕ್ಕೆ ತಾಲೂಕಿನ ಸಾರ್ವಜನಿಕರು ಆರ್ಥಿಕ ಸಹಕಾರ ಮತ್ತು ಸೂಕ್ತ ಸಲಹೆ ನೀಡಬೇಕೆಂದು ಮನವಿ ಮಾಡಿದ ಅವರು, ಯಶಸ್ವಿಗೆ ಮತ್ತು ಸಂಭ್ರಮಕ್ಕೆ ಎಲ್ಲರೂ ಪಾಲುದಾರರಾಗಬೇಕು ಎಂದು ಕೋರಿದರು. ಸಮಿತಿ ಪದಾಧಿಕಾರಿಗಳಾದ ವೆಂಕಟರಮಣೇಗೌಡ, ಸಿದ್ದೇಗೌಡ, ಪ್ರಭಾಕರಜೈನ್, ತೋಟಪ್ಪನಾಯಕ, ಎಚ್.ಪಿ. ಪ್ರಶಾಂತ್, ಪೂರ್ಣಿಮಾಬಾಬು, ಯೋಜನಾಧಿಕಾರಿ ಬಿ. ಅಶೋಕ್, ಪ್ರಚಾರ ಸಮಿತಿ ಅಧ್ಯಕ್ಷ ಕುಪ್ಪೆ ಮಹದೇವಸ್ವಾಮಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.