ಮೈಸೂರು

ಕೈ ಜನವಿರೋಧಿ ನೀತಿ ಖಂಡಿಸಿ ಹೋರಾಟ

Published On :

ಮೈಸೂರು: ಕೇಂದ್ರ ಹಾಗೂ ಕಾಂಗ್ರೆಸ್ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ತಮ್ಮ ಪಕ್ಷ ಹೋರಾಟ ನಡೆಸಲಿದೆ. ಈ ಸಂಬಂಧ ಜ.8 ರಂದು ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಹಣದುಬ್ಬರ, ರುಪಾಯಿ ಅಪಮೌಲ್ಯದ ಹೊಡೆತ ತಾಳಲಾರದೆ ಜನಸಾಮಾನ್ಯರ ಮೇಲೆ ಬರೆ ಎಳೆಯುವಂತಹ ನಿರ್ಧಾರ ತೆಗೆದುಕೊಳ್ಳುತ್ತಿದೆ. ಕಳೆದ ಒಂದು ತಿಂಗಳಲ್ಲಿ ಗ್ರಾಹಕ ಬಳಕೆಯ ಎಲ್‌ಪಿಜಿ ದರವನ್ನು ಮೂರು ಬಾರಿ ಹೆಚ್ಚಿಸಿದೆ. ಇದರಿಂದ ಪ್ರತಿ ಸಿಲಿಂಡರ್ ಬೆಲೆ 220 ಹೆಚ್ಚಳವಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೂ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಇಂಧನ ಇಲಾಖೆಯನ್ನು ಸರಿಯಾಗಿ ನಿರ್ವಹಿಸದ ಕಾರಣ ಇಂತ ಕೆಟ್ಟ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ಪಾದನೆ ಕಡಿತವೇ ಕಾರಣ: ಡಿ.14 ರಂದು ರಾಜ್ಯ ಸರ್ಕಾರ ವಿದ್ಯುತ್ ಪ್ರತಿ ಯೂನಿಟ್‌ಗೆ 66 ಪೈಸೆ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದೆ. ನಗರ ಮಟ್ಟದಲ್ಲಿ ಲೋಡ್ ಶೆಡ್ಡಿಂಗ್ ನಿಯಂತ್ರಣದಲ್ಲಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಅನಿಯಮಿತವಾಗಿ ಕಡಿತಗೊಳಿಸಲಾಗುತ್ತಿದೆ. ಶಾಖೋತ್ಪನ್ನ ಸ್ಥಾವರಗಳು ನಿರೀಕ್ಷೆಗಿಂತ ಹೆಚ್ಚು ವಿದ್ಯುತ್ ಉತ್ಪಾದಿಸದಿರುವುದು ಇದಕ್ಕೆ ಮುಖ್ಯ ಕಾರಣ. ಇಷ್ಟು ದಿನ ಇಂಧನ ಖಾತೆ ನೋಡಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸರಿಯಾಗಿ ನಿರ್ವಹಣೆ ಮಾಡಿಲ್ಲ. ಈಗ ಬಂದಿರುವ ಹೊಸ ಸಚಿವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ. ತಪ್ಪಿದ್ದಲ್ಲಿ ಕತ್ತಲೆ ದಿನಗಳು ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಸಿದ್ದುಗೆ ಅಧಿಕಾರದಾಸೆ: ತಮ್ಮ ಸಚಿವ ಸಂಪುಟದಲ್ಲಿ ಕಳಂಕಿತರಿಗೆ ಅವಕಾಶವಿಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರದ ಆಸೆಯಿಂದ ತಾತ್ವಿಕ ವಿಚಾರಗಳನ್ನು ಬದಿಗೊತ್ತಿ ಇಬ್ಬರು ಕಳಂಕಿತರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಂತೋಷ್ ಲಾಡ್ ವಿಚಾರದಲ್ಲಿ ಸ್ವಯಂ ಪ್ರೇರಿತ ಎಂಬ ಪದ ಬಳಸುತ್ತಾರೆ.
ರಾಜ್ಯದ ಚುಕ್ಕಾಣಿ ಹಿಡಿದಿರುವ ಇವರು ರಾಹುಲ್‌ಗಾಂಧಿ ಮಾತಿಗೆ ಮಣೆ ಹಾಕಿ ತಮ್ಮ ತಾತ್ವಿಕ ವಿಚಾರಗಳನ್ನು ನಿರ್ಲಕ್ಷಿಸಿದ್ದಾರೆ. ರಾಹುಲ್‌ಗಾಂಧಿ ಕೂಡ ಭ್ರಷ್ಟಾಚಾರ ವಿಚಾರದಲ್ಲಿ ಚಕಾರವೆತ್ತದೆ ಬೆಂಬಲ ನೀಡುತ್ತಿರುವುದು ಎಷ್ಟು ಸರಿ ಎಂದ ಅವರು, ಜನಲೋಕಪಾಲ ವಿಚಾರದಲ್ಲಿ ತೋರಿದ ಗಂಭೀರತೆಯನ್ನು ಇಲ್ಲಿಯೂ ತೋರಬೇಕು ಎಂದರು.
ಮಾಜಿ ಸಚಿವ ಎಸ್.ಎ. ರಾಮದಾಸ್, ಶಾಸಕರಾದ ಸಿ.ಎಚ್. ವಿಜಯಶಂಕರ್, ಸಿದ್ದರಾಜು, ಬಿಜೆಪಿ ನಗರಾಧ್ಯಕ್ಷ ಇ.ಮಾರುತಿರಾವ್ ಪವಾರ್, ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್‌ಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.