ಅಕ್ರಮ ಮದ್ಯ ತಡೆಗೆ ಸಹಕರಿಸಿ
ನಂಜನಗೂಡು: ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟ ಹೆಚ್ಚಾಗಿದ್ದು, ಇವುಗಳನ್ನು ತಡೆಯಲು ಸಹಕರಿಸುವಂತೆ ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ.ಕೆ. ರಾಮಚಂದ್ರರಾವ್ ಸಾರ್ವಜನಿಕರಲ್ಲಿ ಕೋರಿದರು.
ಪಟ್ಟಣದ ಪೊಲೀಸ್ ಭವನದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಪೊಲೀಸ್ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಸಾರ್ವಜನಿಕರು ಪಟ್ಟಣದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಂಚಾರ ಪೊಲೀಸ್ ಠಾಣೆಯನ್ನು ಶೀಘ್ರವಾಗಿ ಆರಂಭಿಸುವಂತೆ ಹಾಗೂ ನಂಜನಗೂಡು ಪಟ್ಟಣ ಠಾಣೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಸಿಬ್ಬಂದಿ ಹೆಚ್ಚಿಸುವಂತೆ ಕೋರಿದರು. ಅಲ್ಲದೆ ಪಟ್ಟಣದಲ್ಲಿ ಬಡ್ಡಿ ವ್ಯವಹಾರ ಕೂಡಾ ಹೆಚ್ಚುತ್ತಿದ್ದು, ಅತ್ಯಧಿಕ ಬಡ್ಡಿಯನ್ನು ಸಾರ್ವಜನಿಕರಿಂದ ಕೆಲವರು ವಸೂಲು ಮಾಡುತ್ತಿರುವುದಾಗಿಯು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.
ಸಾರ್ವಜನಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟದ ಬಗ್ಗೆ ಕೂಡಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದಲ್ಲಿ ಸಂಚಾರ ಪೊಲೀಸ್ ಠಾಣೆ ತೆರೆಯಲು ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅತೀ ಶೀಘ್ರದಲ್ಲಿ ಸಂಚಾರ ಪೊಲೀಸ್ ಠಾಣೆ ತೆರೆದು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವುದಾಗಿ ಸಾರ್ವಜನಿಕರಿಗೆ ಮನವರಿಕೆ ಮಾಡಿದರು. ಅಕ್ರಮ ಮದ್ಯ ಮಾರಾಟ, ಅತ್ಯಧಿಕ ಬಡ್ಡಿ ವ್ಯವಹಾರದ ಕುರಿತು ನಿರ್ದಿಷ್ಟ ದೂರುಗಳಿದ್ದಲ್ಲಿ ಸಾರ್ವಜನಿಕರು ನೀಡುವಂತೆ ಹಾಗೂ ಅವರ ಹೆಸರನ್ನು ಗೌಪ್ಯವಾಗಿಟ್ಟು, ಕಾನೂನು ಪ್ರಕಾರ ಕ್ರಮ ಜರುಗಿಸಲು ಪೊಲೀಸರಿಗೆ ಸಹಕಾರಿಯಾಗುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.
ಎಸ್ಪಿ ಅಭಿನವ್ ಖರೆ ಮಾತನಾಡಿ, ಪಟ್ಟಣದಲ್ಲಿ ಸುಗಮ ಸಂಚಾರಕ್ಕಾಗಿ, ಅಪಘಾತಗಳನ್ನು ಮತ್ತು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಮುಖ್ಯ ಜಂಕ್ಷನ್, ವೃತ್ತಗಳಲ್ಲಿ ಸಿಸಿ ಟಿ.ವಿ ಅಳವಡಿಸಲು ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಿದ್ದು, ಮಂಜೂರಾತಿ ನಿರೀಕ್ಷೆಯಲ್ಲಿರುವುದಾಗಿ ಸಾರ್ವಜನಿಕರಿಗೆ ಮನವರಿಕೆ ಮಾಡಿದರು. ಅಕ್ರಮ ಮದ್ಯ ಮಾರಾಟ, ಜೂಜಾಟ ಹತ್ತಿಕ್ಕುವಂತೆ ಅಧಿಕಾರಿಗಳಿಗೆ ಸೂಕ್ತ ಆದೇಶ ಈಗಾಗಲೇ ನೀಡಿರುವುದಾಗಿ, ನಿಖರವಾದ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ನಿರ್ಭಯವಾಗಿ ನನಗೆ ಅಥವಾ ನಂಜನಗೂಡು ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಡಾ.ಪಿ. ರಾಜ, ಮಾಹಿತಿ ನೀಡುವಂತೆ ಕೋರಿದರು.
ಸಭೆಯಲ್ಲಿ ನಂಜನಗೂಡು ಉಪ ವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕ ಡಾ.ಪಿ. ರಾಜ, ಸರ್ಕಲ್ ಇನ್ಸ್ಪೆಕ್ಟರ್ ರಘು, ಎಸ್ಐ ಹಾಗೂ ಹಿರಿಯ ಅಧಿಕಾರಿಗಳು ಇದ್ದರು. ಸಭೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

