ಮೈಸೂರು

ನಾಲ್ವಡಿ ಕೃಷ್ಣರಾಜರ 130ನೇ ಜಯಂತಿ

Published On :

ಕ.ಪ್ರ.ವಾರ್ತೆ ಮೈಸೂರು ಜೂ.4
ಜಿಲ್ಲಾಡಳಿತ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಯದುವಂಶದ ಪ್ರಖ್ಯಾತ ಅರಸರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 130ನೇ ಜಯಂತಿಯನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರ ಮೆರವಣಿಗೆಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ಮೆರವಣಿಗೆಯು ಕೆ.ಆರ್. ವೃತ್ತ, ಡಿ.ದೇವರಾಜು ಅರಸು ರಸ್ತೆ ಮೂಲಕ ಮಹಾರಾಜ ಕಾಲೇಜು ಶತಮಾನೋತ್ಸವ ಭವನಕ್ಕೆ ಆಗಮಿಸಿತು.
ಮೆರವಣಿಗೆಯುದ್ದುದ್ದಕ್ಕೂ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ನಂದಿಧ್ವಜ, ಜಾನಪದ ಕಲಾತಂಡಗಳು, ಪೂಜಾ ಕುಣಿತ, ಕಂಸಾಳೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆ ರಂಗು ತಂದು ದಸರಾವನ್ನು ಮತ್ತೆ ನೆನಪಿಸಿದವು.
ಇದೇ ವೇಳೆ ಮೇಯರ್ ಎನ್.ಎಂ.ರಾಜೇಶ್ವರಿ, ಉಪಮೇಯರ್ ವಿ.ಶೈಲೇಂದ್ರ, ಶಾಸಕರಾದ ಎಂ.ಕೆ. ಸೋಮಶೇಖರ್, ವಾಸು, ಪ್ರಭಾರ ಜಿಲ್ಲಾಧಿಕಾರಿ ಎಸ್.ಪಾಲಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಉಪವಿಭಾಗಾಧಿಕಾರಿ ಬಸವರಾಜು, ಪಾಲಿಕೆ ಆಯುಕ್ತ ಪಿ.ಜಿ. ರಮೇಶ್, ತಹಸೀಲ್ದಾರ್ ನವೀನ್ ಜೋಸೆಫ್, ಮಾಜಿ ಮೇಯರ್ ಟಿ.ಬಿ. ಚಿಕ್ಕಣ್ಣ, ಪುಷ್ಪಲತಾ ಹಾಗೂ ಪಾಲಿಕೆ ಸದಸ್ಯರು ಪಾಲ್ಗೊಂಡಿದ್ದರು.
ಅರಸು ಮಂಡಳಿಯಿಂದ ಆಚರಣೆ: ತ್ಯಾಗರಾಜ ರಸ್ತೆಯಲ್ಲಿರುವ ಅರಸು ಮಂಡಳಿ ಕಚೇರಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರ ಮೆರವಣಿಗೆ ಶಾಸಕ ಎಂ.ಕೆ.ಸೋಮಶೇಖರ್ ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ಮೆರವಣಿಗೆಯು ಚಾಮರಾಜ ಜೋಡಿ ರಸ್ತೆ, ಸಯ್ಯಾಜಿರಾವ್ ರಸ್ತೆ, ಕೆ.ಆರ್. ವೃತ್ತ, ಡಿ. ದೇವರಾಜ ಅರಸು ರಸ್ತೆ, ಸರ್ವಪಲ್ಲಿ ರಾಧಾಕೃಷ್ಣನ್ ರಸ್ತೆ ಮುಖೇನ ಮಹಾರಾಜ ಕಾಲೇಜು ಶತಮಾನೋತ್ಸವ ಭವನಕ್ಕೆ ತೆರಳಿತು.  
ಮೆರವಣಿಗೆಯುದ್ದಕ್ಕೂ ನಗಾರಿ, ಸೋಮನ ಕುಣಿತ, ಬ್ಯಾಂಡ್‌ಸೆಟ್ ಕಲಾವಿದರ ತಂಡ ಭಾಗವಹಿಸಿದ್ದವು. ಪಾಲಿಕೆ ಸದಸ್ಯರಾದ ಬಿ.ವಿ.ಮಂಜುನಾಥ್, ಸುನಿಲ್, ಅರಸು ಮಂಡಳಿ ಅಧ್ಯಕ್ಷ ಎನ್.ಎಸ್. ದಾಸರಾಜೇ ಅರಸ್ ಸೇರಿದಂತೆ ಅನೇಕ ಮಂದಿ ಗಣ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.