ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಸಾಧ್ಯವಿಲ್ಲ
ಕ.ಪ್ರ.ವಾರ್ತೆ ನಂಜನಗೂಡು ಜೂ.7
ಇನ್ನು ನಾಲ್ಕು ವರ್ಷಗಳ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವನ್ನು ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಂದಾಯ ವಿ.ಶ್ರೀನಿವಾಸಪ್ರಸಾದ್ ಹೇಳಿದ್ದಾರೆ.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ನಂಜನಗೂಡು ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಕಾರದಲ್ಲಿ ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಆರ್.ಧ್ರುವನಾರಾಯಣ್ ತಮ್ಮ ಗೆಲವಿಗಾಗಿ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತಂದಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿಸಿದ್ದಷ್ಟು ಸ್ಥಾನ ಲಭಿಸಲಿಲ್ಲ ಎಂದ ಅವರು, ಜನರ ಆದೇಶಕ್ಕೆ ತಲೆ ಬಾಗಲೇಬೇಕು, ದೇಶದಲ್ಲಿ ಯುಪಿಎಗೆ ಹಿನ್ನಡೆಯಾಗಿದೆ. ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬೇಕಾಗಿಲ್ಲ, ಮತ್ತೆ ನಮ್ಮ ಪಕ್ಷ ಸಂಘಟಿಸುತ್ತೇವೆ ಎಂಬ ವಿಶ್ವಾಸ ಕಾರ್ಯಕರ್ತರಲ್ಲಿ ಬರಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಗೌರವ ಉಳಿಸಿಕೊಳ್ಳುವ ರೀತಿಯಲ್ಲಿ ನಡೆದುಕೊಳ್ಳದೇ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿಗೆ ಬೆಂಬಲ ನೀಡಿದ್ದು, ನಾಚಿಗೆಗೇಡಿನ ಸಂಗತಿ ಎಂದು ಪ್ರಸಾದ್ ವ್ಯಂಗವಾಡಿದರು.
ಸನ್ಮಾನ ಸ್ವೀಕರಿಸಿದ ಸಂಸದ ಆರ್.ಧ್ರುವನಾರಾಯಣ್ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಲು ರಾಜ್ಯ ಸರ್ಕಾರ ಹಾಕಿಕೊಟ್ಟ ಕಾರ್ಯಕ್ರಮಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರಾದ ವಿ.ಶ್ರೀನಿವಾಸಪ್ರಸಾದ್ ಹಾಗೂ ಈ ಭಾಗದ ಜನಪ್ರತಿನಿಧಿಗಳು ಹಾಗೂ ಮತದಾರರೇ ಕಾರಣ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ನನ್ನನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡಿ ಚುನಾವಣೆಯಲ್ಲಿ ಗೆದ್ದು ಸಂಸದರಾಗಬೇಕಾದರೆ ವಿ. ಶ್ರೀನಿವಾಸಪ್ರಸಾದ್ ಅವರೇ ಕಾರಣ ಎಂದು ಸ್ಮರಿಸಿದರು.
ರಾಜ್ಯದಲ್ಲಿ ಏನೇ ಅಲೆಯಿದ್ದರೂ ಮತದಾರರು ಎಲ್ಲ ಅಲೆಗಳನ್ನೂ ಮೆಟ್ಟಿ ನನ್ನನ್ನು ಗೆಲ್ಲಿಸಿದ ಕಾರ್ಯಕರ್ತರು ಹಾಗೂ ಮತದಾರರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ, ಮಾಜಿ ಸದಸ್ಯ ಪ್ರೊ.ಮಲ್ಲಿಕಾರ್ಜುನಪ್ಪ, ಜಿಪಂ ಸದಸ್ಯ ಕೆ. ಮಾರುತಿ, ಬ್ಲಾಕ್ ಅಧ್ಯಕ್ಷರಾದ ಕೆ.ಎಸ್.ಸುಬ್ಬಣ್ಣ, ಬಿ.ಎಸ್. ಮಹದೇವಪ್ಪ, ಕಾಂಗ್ರೆಸ್ ಮುಖಂಡರಾದ ಯು.ಎನ್. ಪದ್ಮನಾಭರಾವ್, ಬಿ.ಹರ್ಷವರ್ಧನ, ಈಡಿಗ ಸಮಾಜದ ಮುಖಂಡ ಎನ್.ವಿ ತಿಮ್ಮೇಗೌಡ, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿ, ಉಪಾಧ್ಯಕ್ಷ ದೊರೆಸ್ವಾಮಿ, ಮಾಜಿ ಅಧ್ಯಕ್ಷರಾದ ಸಿ.ಎಂ. ಶಂಕರ್, ಎನ್. ಶ್ರೀಧರ್, ಪಿ. ಶ್ರೀನಿವಾಸ್, ಎನ್.ಆರ್. ದೊರೆಸ್ವಾಮಿ, ಪುರಸಭಾ ಸದಸ್ಯರಾದ ಅನುಸೂಯ, ಸುಂದರರಾಜ್, ಚಂದ್ರಶೇಖರ್, ನಿಂಗಪ್ಪ, ತಾಪಂ ಸದಸ್ಯರಾದ ಲಕ್ಷ್ಮೀ ನಾಗರಾಜು, ಪುಟ್ಟಸ್ವಾಮಿ, ಪುಷ್ಪಾ ನಾಗೇಶ್ರಾಜು, ಪಟೇಲ್ ರಾಜಶೇಖರ್ಮೂರ್ತಿ, ಶಿವರಾಜಪ್ಪ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

