ಮೈಸೂರು

ಲೋಪ ಎಸಗಿದ್ರೆ ಸೂಕ್ತ ಕ್ರಮ

Published On :

ಕ.ಪ್ರ. ವಾರ್ತೆ ಕೆ.ಆರ್. ನಗರ ಜೂ.11
ತಾಲೂಕು ಮಟ್ಟದ ಅಧಿಕಾರಿಗಳು ನಿಗದಿತ ಸಮಯದಲ್ಲಿ ಗ್ರಾಮಾಂತರ ಪ್ರದೇಶದ ಸರ್ಕಾರಿ ಕಚೇರಿಗಳಿಗೆ ಮತ್ತು ಶಾಲೆಗಳಿಗೆ ಭೇಟಿ ನೀಡಿದರೆ ಸವಲತ್ತುಗಳು ಸಮರ್ಪಕವಾಗಿ ತಲುಪಲು ಸಾಧ್ಯವಾಗುತ್ತದೆ. ಆದರೆ ಈ ಕೆಲಸ ಮಾಡದೆ ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಪಂ ಸಿಇಒ ಪಿ.ಎ. ಗೋಪಾಲ್ ಎಚ್ಚರಿಸಿದರು.
ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕು ಮತ್ತು ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಅಶಿಸ್ತು ತೋರುವ ಸಿಬ್ಬಂದಿ ವರ್ತನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದರು. ತಾಲೂಕಿನ ಕಗ್ಗೆರೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದಾಗ, ಅಲ್ಲಿನ ಶಿಕ್ಷಕರು ಶಾಲೆ ಆರಂಭವಾದ ನಂತರ ಶಾಲಾ ಪ್ರಾರಂಭೋತ್ಸವ ಮಾಡದೆ, ಸ್ವಚ್ಛತೆಯನ್ನು ಕಾಪಾಡುವ ಕೆಲಸಕ್ಕೂ ಆದ್ಯತೆ ನೀಡಿಲ್ಲ. ಜತೆಗೆ ಇತರ ಲೋಪಗಳು ಕಂಡುಬಂದಿದ್ದು, ಶಾಲೆಯ ಎಲ್ಲ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸುವುದಾಗಿ ತಿಳಿಸಿದರು.
ಅಮಾನತಿಗೆ ಕ್ರಮ: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿದ ವೇಳೆ ಕಚೇರಿಯ ಗುಮಾಸ್ತ ನಾಗೇಶ್ ಎಂಬಾತ ಹಾಜರಿ ಪುಸ್ತಕಕ್ಕೆ ಸಹಿ ಹಾಕಿ ಬೇರೆಡೆಗೆ ತೆರಳಿದ್ದ. ಈ ಬಗ್ಗೆ ವಿಚಾರಿಸಿದಾಗ ಸಮವಸ್ತ್ರ ವಿತರಿಸಲು ಹೋಗಿದ್ದಾನೆ ಎಂಬ ಸಬೂಬನ್ನು ಕಚೇರಿಯವರು ಹೇಳಿದರು. ನಂತರ ಬಿಆರ್‌ಸಿ ಕೇಂದ್ರಕ್ಕೆ ಹೋದಾಗ ಆತ ಅಲ್ಲಿಯೂ ಇರಲಿಲ್ಲ. ಆದ್ದರಿಂದ ಈತನನ್ನು ಸೇವೆಯಿಂದ ಅಮಾನತುಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದವರು ಮಾಹಿತಿ ನೀಡಿದರು.
ತಾಲೂಕಿನ ರೈತರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ಯಾವುದೇ ತೊಂದರೆಯಾಗದಂತೆ ಬಿತ್ತನೆ ಬತ್ತ, ರಸಗೊಬ್ಬರ ಸೇರಿದಂತೆ ಇತರ ಸವಲತ್ತುಗಳನ್ನು ನಿಗದಿತ ಅವಧಿಯಲ್ಲಿ ತಲುಪಿಸಿ ಎಂದು ಕೃಷಿ ನಿರ್ದೇಶಕ ಚಂದ್ರಶೇಖರ್ ಅವರಿಗೆ ತಾಕೀತು ಮಾಡಿದರು. ಕೆ.ಆರ್. ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ರೈತರಿಗೆ ಸವಲತ್ತು ನೀಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸರಬರಾಜಿಗೆ ವಿದ್ಯುತ್ ಸಮಸ್ಯೆ ಇರುವುದನ್ನು ನಿವಾರಿಸಲು ಜಿಲ್ಲೆಯಲ್ಲಿ 35 ಗ್ರಾಮಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಿ ಕೊಳವೆ ಬಾವಿಗಳಿಂದ ನೀರೆತ್ತುವ ಯೋಜನೆ ಹಮ್ಮಿಕೊಂಡಿದ್ದು, ಪ್ರತಿ ತಾಲೂಕಿಗೆ 7 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಈಗಾಗಲೇ ಕಾರ್ಯ ಯೋಜನೆ ರೂಪಿಸಿದ್ದು, ಪ್ರತಿ ಕೊಳವೆ ಬಾವಿಗೆ ನಾಲ್ಕು ಲಕ್ಷ ವೆಚ್ಚವಾಗುತ್ತದೆ ಎಂದು ಹೇಳಿದರು. ತಾಪಂ ಕಾರ್ಯಾಲಯ, ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಮತ್ತು ಕಗ್ಗೆರೆ ಗ್ರಾಪಂ ಸೇರಿದಂತೆ ಇತರೆ ಕಚೇರಿಗಳಿಗೆ ಸಿಇಒ ಭೇಟಿ ನೀಡಿ ಪರಿಶೀಲಿಸಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಸಿದ್ದಂಗಮೂರ್ತಿ, ಕೃಷಿ ಅಧಿಕಾರಿಗಳಾದ ವೆಂಕಟೇಶ್, ಗಣೇಶ್, ಪ್ರವೀಣ್, ತಾಪಂ ಸಿಬ್ಬಂದಿ ಕರೀಗೌಡ, ಸಿದ್ದೇಗೌಡ, ದಲಿತ ಮುಖಂಡ ಹನಸೋಗೆ ನಾಗರಾಜು, ಜೆಡಿಎಸ್ ಮುಖಂಡರಾದ ಜಗದೀಶ್, ಗಣೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.