ಮೈಸೂರು

ಸೀಟ್‌ಬೆಲ್ಟ್ ಧರಿಸದಿದ್ದರೆ ದಂಡ ವಸೂಲಿ

Published On :

ಮೈಸೂರು: ಸೀಟ್‌ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡುವವರ ವಿರುದ್ಧ ಜೂ.16 ರಿಂದ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಹೇಳಿದರು.
ನಗರ ಸಂಚಾರ ಪೊಲೀಸ್ ಹಾಗೂ ಸೇಫ್‌ವ್ಹೀಲ್ಸ್ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಶನಿವಾರ ಆಯೋಜಿಸಿದ್ದ ಸೀಟ್‌ಬೆಲ್ಟ್ ಜಾಗೃತಿ ಅಭಿಯಾನಕ್ಕೆ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಚಾಲನೆ ನೀಡಿ ಮಾತನಾಡಿದರು. ಸೀಟ್‌ಬೆಲ್ಟ್ ಧರಿಸುವ ಸಂಬಂಧ ಒಂದು ತಿಂಗಳಿಂದ ಜಾಗೃತಿ ಮೂಡಿಸಲಾಗಿದೆ. ಜೂ.16 ರಿಂದ ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಸೀಟ್‌ಬೆಲ್ಟ್ ಧರಿಸಿದ ಚಾಲಕರು ಸಂಚಾರ ನಿಯಮ ಪಾಲಿಸಬೇಕು ಎಂದು ತಿಳಿಸಿದರು. ವಾಹನ ಚಾಲನೆ ಮಾಡುವಾಗ ಮೊಬೈಲ್‌ನಲ್ಲಿ ಮಾತನಾಡುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜುಲೈನಲ್ಲಿ ಜಾಗೃತಿ ಮೂಡಿಸಲಾಗುವುದು. ಆಗಸ್ಟ್‌ನಲ್ಲಿ ದಂಡ ವಿಧಿಸಲಾಗುವುದು ಎಂದರು. ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಶಾಲಾ ವಾಹನಗಳಿಗೆ ಮಾರ್ಗಸೂಚಿ ನೀಡಲಾಗಿದ್ದು, ಅನುಷ್ಠಾನಕ್ಕೆ ಶಾಲೆಗಳು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಅಭಿಯಾನ ಮುಂದೂಡಲಾಗಿದೆ. ಮಕ್ಕಳ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಗೂಡ್ಸ್ ಆಟೋಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಆಟೋಗಳು ನಗರ ಪ್ರವೇಶಿಸದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಅವರು ತಿಳಿಸಿದರು. ಅರಮನೆಯ ಉತ್ತರ ದ್ವಾರದಿಂದ ಹೊರಟ ಸೀಟ್‌ಬೆಲ್ಟ್ ಜಾಗೃತಿ ಜಾಥಾವು ಹಾರ್ಡಿಂಜ್ ವೃತ್ತ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ಜೆಎಲ್‌ಬಿ ರಸ್ತೆ ಮೂಲಕ ಮೆಟ್ರೋಪೊಲ್ ವೃತ್ತದ ಬಳಿ ಅಂತ್ಯಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.