ಜಿಲ್ಲಾ ನೀರಾವರಿ ಯೋಜನೆಗಳ ವಿಳಂಬ
ಕ.ಪ್ರಭ ವಾರ್ತೆ, ಚಾ.ನಗರ. ಜೂ.18
ಬಿಜೆಪಿ ಸರ್ಕಾರ ಅಧಿಕಾರಗಳಿದ್ದಾರೆ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಕುಡಿಯುವ ನೀರಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.
ಆದರೆ ರಾಜ್ಯದಲ್ಲಿ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಅವುಗಳಿಗೆ ಜಾರಿಗೊಳಿಸದೇ ವಿಳಂಬ ನೀತಿ ಅನುಸರಿಸುತ್ತಿದ್ದು, ಇದನ್ನು ಖಂಡಿಸಿ ಜು.5ರಂದು ಬೃಹತ್ ಪ್ರತಿಭಟನೆ ಹಾಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ, ಮಾಜಿ ಶಾಸಕ ಅರಗ ಜ್ಞಾನೇಂದ್ರ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂತರ್ಜಲ ಹೆಚ್ಚಿಸಲು ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಶೇ.70ರಷ್ಟು ಕಾಮಗಾರಿಯು ನಡೆದಿತ್ತು.
ಕಾಂಗ್ರೆಸ್ ಸರ್ಕಾರ ಒಂದು ವರ್ಷದಿಂದ ಇದನ್ನು ನಿರ್ಲಕ್ಷ್ಯ ಮಾಡಿದೆ. ಇದಕ್ಕೆ ಮೂಲ ಕಾರಣ ಕರಿಕಲ್ಲು ಮಾಲೀಕರು ಮಾಡಿರುವ ಲಾಬಿ ಎಂದು ಈ ಭಾಗದ ರೈತರು ನಮಗೆ ದೂರಿದ್ದಾರೆ. ಈ ಭಾಗದಲ್ಲಿ ಮಳೆ ಇಲ್ಲದೆ ಅಂತರ್ಜಲ ಸಂಪೂರ್ಣವಾಗಿ ಕುಸಿದಿದೆ. ಸಾವಿರ ಅಡಿಗಳು ಕೊರೆದರೂ ನೀರು ಸಿಗುತ್ತಿಲ್ಲ.
ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಕೊಳ್ಳದೇ ಸನ್ಮಾನ ಸಮಾರಂಭಗಳನ್ನು ನಡೆಸಿಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ಈ ನಿರ್ಲಕ್ಷ್ಯವನ್ನು ಖಂಡಿಸಿ, ಜು.5ರಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಹಾಗೂ 52 ಗ್ರಾಮಗಳ ರೈತರನ್ನು ಸಂಘಟಿಸಿ ತಾಲೂಕಿನ ತಮ್ಮಡಹಳ್ಳಿ ಜಾಕ್ವೆಲ್ನಿಂದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ನಡೆಸಿ, ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ತಪ್ಪು ಪ್ರಸ್ತಾಪ: ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಯನ್ನು ಒಂದೆ ಸೂರಿನಡಿಯಲ್ಲಿ ತರುವ ಪ್ರಸ್ತಾಪ ಮಾಡಿದ್ದಾರೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾಕೂಲವೇ ಹೆಚ್ಚು.
ಕೃಷ್ಣಬೈರೆಗೌಡರು ಅರ್ಥಮಾಡಿಕೊಳ್ಳಬೇಕು. ಮೊದಲು ಮೂರು ಇಲಾಖೆಯಲ್ಲಿ ನೂರಾರು ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಿ, ಇಲಾಖೆಯನ್ನು ಬಲವರ್ಧನೆ ಮಾಡುವ ದಿಕ್ಕಿನಲ್ಲಿ ಚಿಂತನೆ ಮಾಡಬೇಕು ಎಂದರು.
ತನಿಖೆ ಮಾಡಿಸಿ: ಜಲಾನಯನ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಲಾನಯನ ಅಭಿವೃದ್ಧಿಗಾಗಿ ಕೋಟ್ಯಂತರ ರು.ಗಳನ್ನು ನೀಡಿದ್ದು, ಇದು ಸದ್ಭಳಕೆಯಾಗದೇ ಭಾರೀ ಅವ್ಯವಹಾರ ನಡೆದಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೇ ಎಂಬ ಭಾವನೆ ಮೂಡುತ್ತಿದ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಮಹೇಂದ್ರ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧ್ಯಕ್ಷ ಕೆ.ಎಸ್. ನಾಗರಾಜಪ್ಪ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಮುಖಂಡರಾದ ನಿಜಗುಣರಾಜು, ರ. ನಾರಾಯಣಗೌಡ, ಎಸ್. ಸೋಮನಾಯಕ, ವಿಜಯಕುಮಾರ್, ಸತೀಶ್, ಬಾಲಸುಬ್ರಮಣ್ಯಂ, ಕುಮಾರಸ್ವಾಮಿ, ಮೂಡ್ನಾಕೂಡು ಕುಮಾರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

