ಮೈಸೂರು

ಸಿಡಿಪಿಗೆ ಅನುಮೋದನೆ ನೀಡುವಂತೆ ಮನವಿ

Published On :

ಮೈಸೂರು: ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಮನೆಗಳನ್ನು ನಿರ್ಮಿಸುವ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ರೂಪಿಸಿರುವ ನಗರಾಭಿವೃದ್ಧಿ ಯೋಜನೆ (ಸಿಡಿಪಿ)ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ಅನುಮೋದನೆ ನೀಡಬೇಕು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ. ರಾಜೀವ್ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲೆಯ ಎಲ್ಲಾ ಗೃಹ ನಿರ್ಮಾಣ ಸಹಕಾರ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿರುವ ವಿವಿಧ ಗೃಹ ನಿರ್ಮಾಣ ಸಹಕಾರ ಸಂಘಗಳು ಸದಸ್ಯರಿಗೆ ಗೃಹ ನಿರ್ಮಿಸಿಕೊಡಬೇಕಾದರೆ ಸಿಡಿಪಿಯ ಅನುಮತಿ ಪಡೆಯುವುದು ಅವಶ್ಯಕ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 2011 ರಲ್ಲಿಯೇ ಸಿಡಿಪಿ ರೂಪಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಿದೆ. ಆದರೆ, ರಾಜ್ಯ ಸರ್ಕಾರ 2013 ರಿಂದ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ಮನೆ ನಿರ್ಮಿಸಬೇಕೆಂಬ ಪ್ರತಿಯೊಬ್ಬರ ಕನಸು ಕೈಗೂಡಿದಂತಿಲ್ಲ. ಅಲ್ಲದೆ ಎಂಡಿಎ ಸಿದ್ಧಪಡಿಸಿರುವ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದಷ್ಟು ಬೇಗ ಸಿಡಿಪಿಗೆ ಅನುಮೋದನೆ ನೀಡಿದರೆ ಜನರಿಗೆ ಒಳ್ಳೆಯದಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
 ಮೈಸೂರಿನಲ್ಲಿ 13 ಲಕ್ಷದಷ್ಟು ಜನಸಂಖ್ಯೆ ಇದ್ದು. ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರವಾಗುತ್ತಿದೆ. ಸದ್ಯ 225 ಗೃಹ ನಿರ್ಮಾಣ ಸಹಕಾರ ಸಂಘಗಳಿದ್ದು, 190 ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ. ತಲಾ ಮೂರು ಮಂದಿಗೆ ಒಂದು ಮನೆ ಎಂದರೆ 13 ಲಕ್ಷ ಮಂದಿಗೆ 4 ಲಕ್ಷ ಮನೆಗಳು
ಬೇಕು. ಈಗಾಗಲೇ 1.75 ಲಕ್ಷ ಮನೆಗಳನ್ನು ನಿರ್ಮಿಸಿದ್ದು ಇನ್ನು 2 ಲಕ್ಷ ಮನೆಗಳ ನಿರ್ಮಾಣದ ಅವಶ್ಯಕತೆ  ಇದೆ. ಈ 225 ಗೃಹ ನಿರ್ಮಾಣ ಸಹಕಾರ ಸಂಘಗಳಲ್ಲಿ ಒಂದೂವರೆ ಲಕ್ಷದಷ್ಟು ಸದಸ್ಯರಿದ್ದಾರೆ. ಇವರೆಲ್ಲರ ಮನೆ ಕಟ್ಟು ಕನಸಿಗೆ ಸರ್ಕಾರ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಬಿ. ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಎಂ.ಬಿ. ಮಂಜೇಗೌಡ, ಸಹಕಾರ ಸಂಘಗಳ ಸಂಯುಕ್ತ ನಿಬಂಧಕ ಕೆ.ಎಂ. ಆಶಾ, ಪಿ. ಶಶಿಧರ್, ಉಪನಿಬಂಧಕ ಪಿ. ಶಶಿಧರ್, ವಿವಿಧ ಸಂಘಗಳ ಪದಾಧಿಕಾರಿಗಳಾದ ರಾಜೇಂದ್ರ, ಜೆ. ಪುಟ್ಟಸ್ವಾಮಿ, ಬಿ.ಎನ್. ಪಾರ್ಥಸಾರಥಿ ಇದ್ದರು. ಯೂನಿಯನ್ ಸಿಇಒ ಕೆ. ಮಲ್ಲಯ್ಯ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.