ಚಾಮರಾಜನಗರ ತ್ರಿಪಕ್ಷಗಳ ಪ್ರಚಾರ ಸಮರ
ಅಂಶಿ ಪ್ರಸನ್ನಕುಮಾರ್
ಮೈಸೂರು: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಮೈಸೂರು ಜಿಲ್ಲೆಯ ನಾಲ್ಕು ಹಾಗೂ ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಎಲ್ಲರೂ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಕಾಂಗ್ರೆಸ್ನಿಂದ ಹಾಲಿ ಸಂಸದ ಆರ್. ಧ್ರುವನಾರಾಯಣ, ಬಿಜೆಪಿಯಿಂದ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ, ಜೆಡಿಎಸ್ನಿಂದ ಮಾಜಿ ಸಚಿವ ಕೋಟೆ ಎಂ. ಶಿವಣ್ಣ ಅಭ್ಯರ್ಥಿಗಳಾಗಿದ್ದಾರೆ. ಈ ಮೂವರು ಕಳೆದ ಬಾರಿಯೂ ಅಭ್ಯರ್ಥಿಗಳಾಗಿದ್ದರು. ಈ ಕ್ಷೇತ್ರದಲ್ಲಿ ಬಿಎಸ್ಪಿ ಕೂಡ ಸ್ಪರ್ಧಿಸಲಿದೆ.
ಧ್ರುವನಾರಾಯಣ ಅವರ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಪ್ರತಿನಿಧಿಸುವ ಗುಂಡ್ಲುಪೇಟೆ, ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಪ್ರತಿನಿಧಿಸುವ ನಂಜನಗೂಡು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ನೆಪದಲ್ಲಿ ಚುನಾವಣೆ ಘೋಷಣೆಗೆ ಮುನ್ನವೇ ಪ್ರಚಾರ ನಡೆಸಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಕೊಳ್ಳೇಗಾಲದಲ್ಲೂ ಬಹಿರಂಗ ಸಭೆಯಲ್ಲಿ ಮಾತನಾಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಕೃಷ್ಣಮೂರ್ತಿ ಅವರು ಪ್ರಚಾರ ನಿರತರಾಗಿರುವುದರ ಜೊತೆಗೆ ಮುನಿಸಿಕೊಂಡಿರುವ ಮಾಜಿ ಶಾಸಕ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಅವರ ಮನವೊಲಿಸಲು ಯತ್ನಿಸಿದ್ದಾರೆ. ಮಾಜಿ ಸಚಿವ ವಿ. ಸೋಮಣ್ಣ ಕೂಡ ಈ ಪ್ರಯತ್ನ ನಡೆಸಿದ್ದಾರೆ.
ಕಾರ್ಯಕರ್ತರ, ಮುಖಂಡರ ಸಭೆ: ಜೆಡಿಎಸ್ ಅಭ್ಯರ್ಥಿ ಕೋಟೆ ಎಂ.ಶಿವಣ್ಣ ಅವರು ಕ್ಷೇತ್ರಾದ್ಯಂತ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ. ಆದರೆ ಮಾಜಿ ಸಚಿವ ಎಂ. ಮಹದೇವ್ ಅವರು ಪಕ್ಷದಿಂದ ದೂರವಾಗಿರುವುದರಿಂದ ತೊಂದರೆಯಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ, ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಪ್ರತಿನಿಧಿಸುವ ನಂಜನಗೂಡು, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರತಿನಿಧಿಸುವ ಟಿ. ನರಸೀಪುರ ಹಾಗೂ ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರು ಪ್ರತಿನಿಧಿಸುವ ಗುಂಡ್ಲುಪೇಟೆ ಕ್ಷೇತ್ರಗಳು ಬರುತ್ತವೆ. ಅಲ್ಲದೇ ಚಾಮರಾಜನಗರದಲ್ಲಿ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲದಲ್ಲಿ ಎಸ್. ಜಯಣ್ಣ, ಹನೂರಿನಲ್ಲಿ ಆರ್. ನರೇಂದ್ರ- ಕಾಂಗ್ರೆಸ್ ಶಾಸಕರಾಗಿದ್ದಾರೆ. ಎಚ್.ಡಿ. ಕೋಟೆಯಲ್ಲಿ ಮಾತ್ರ ಜೆಡಿಎಸ್ನ ಎಸ್. ಚಿಕ್ಕಮಾದು ಶಾಸಕರು.
ಕಾಂಗ್ರೆಸ್ನಲ್ಲಿ ಹೇಳಿಕೊಳ್ಳುವಂಥ ಯಾವುದೇ ಸಮಸ್ಯೆ ಇಲ್ಲ. ಆದರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಕಳೆದ ಲೋಕಸಭಾ ಚುನಾವಣೆ ಕಾಲಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದರಿಂದ ಬಿಜೆಪಿ ಕೇವಲ 4050 ಮತಗಳ ಅಂತರದಿಂದ ಸೋತಿತು. ಈ ಬಾರಿ ಎಲರನ್ನು ಒಗ್ಗೂಡಿಸಿಕೊಂಡು ಹೋಗುವುದೇ ದೊಡ್ಡ ಸವಾಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲದಲ್ಲಿ ಬಿಜೆಪಿ, ವರುಣದಲ್ಲಿ ಕೆಜೆಪಿ ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನೀಡಿದ್ದವು.
ಒಂದು ಕಾಲಕ್ಕೆ ಮೈಸೂರಿನಂತೆ ಚಾಮರಾಜನಗರ ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಹಾಗೂ ಜನತಾ ಪರಿವಾರ ಸಾಂಪ್ರದಾಯಿಕ ಎದುರಾಳಿಗಳು. ಆದರೆ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡದ್ದರಿಂದ ಕಾಂಗ್ರೆಸ್ಗೆ ಬಿಜೆಪಿ ಎದುರಾಳಿಯಾಗಿದೆ. ಜೆಡಿಎಸ್ಗೆ ಎಚ್.ಡಿ. ಕೋಟೆ, ನಂಜನಗೂಡು, ಹನೂರು, ಟಿ. ನರಸೀಪುರದಲ್ಲಿ ಬಲ ಇದ್ದರೂ ಅದನ್ನು ಪ್ರಬಲ ಪೈಪೋಟಿ ನೀಡುವ ಮಟ್ಟಿಗೆ ತೆಗೆದುಕೊಂಡು ಹೋಗಲು ಸಮರ್ಥ ನಾಯಕರ ಕೊರತೆ ಕಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

