ಮೈಸೂರು

ಷರೀಫ್, ಸಾಂಗ್ಲಿಯಾನ ಹೋದರೆ ಕಾಂಗ್ರೆಸ್‌ಗೆ ನಷ್ಟ: ಸಚಿವ ಜಾರ್ಜ್

Published On :

ಮೈಸೂರು: ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಕೆ. ಜಾಫರ್ ಷರೀಫ್ ಮತ್ತು ಎಚ್.ಟಿ.  ಸಾಂಗ್ಲಿಯಾನ ಅವರು ಪಕ್ಷ ತೊರೆದರೆ ಕಾಂಗ್ರೆಸ್‌ಗೆ ಹೆಚ್ಚಿನ ನಷ್ಟವಾಗಲಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಮೈಸೂರಿಗೆ ಗುರುವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜಾಫರ್ ಷರೀಫ್ ಮತ್ತು ಸಾಂಗ್ಲಿಯಾನ ಅವರ ಮನವೊಲಿಸುವ ಕೆಲಸ ನಡೆಯುತ್ತಿದೆ. ಒಂದು ವೇಳೆ ಅವರು ಪಕ್ಷ ತೊರೆದರೆ ಕಾಂಗ್ರೆಸ್‌ಗೆ ನಷ್ಟವಾಗಲಿದೆ ಎಂದರು.
ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಸತಿ ಸಚಿವ ಹಾಗೂ ನಟ ಅಂಬರೀಷ್ ಅವರ ಆರೋಗ್ಯ ವಿಚಾರಿಸುವ ಸಲುವಾಗಿ ಮುಖ್ಯಮಂತ್ರಿಯವರ ಸೂಚನೆಯಂತೆ ಹೋಗಿ ಬಂದಿದ್ದೇನೆ. ಅಂಬರೀಷ್ ಅವರು ಸಂಪೂರ್ಣ ಗುಣಮುಖರಾಗಿದ್ದು, ಕೆಲವೇ ದಿನಗಳಲ್ಲಿ ಮರಳಿ ಬರುತ್ತಾರೆ ಎಂದರು.
ಲೊಕಸಭಾ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ನಿಗಾ ವಹಿಸುವಂತೆ ಕೇಂದ್ರ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅಗತ್ಯಕ್ಕೆ ತಕ್ಕಂತೆ ಹೊರ ರಾಜ್ಯಗಳ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು. ಇಲವಾಲ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ತಪಾಸಣೆ ವೇಳೆ 2 ಕೋಟಿ ನಾಪತ್ತೆ ಪ್ರಕರಣವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಸಂಸದ ಎಚ್.ವಿಶ್ವನಾಥ್, ಮಾಜಿ ಸಚಿವ ಟಿ. ಜಾನ್ ಇದ್ದರು. ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.
ಕಾಂಗ್ರೆಸ್ ವಿರುದ್ಧ ಪ್ರಕರಣ ದಾಖಲು
ಮೈಸೂರು: ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಜಗನ್ಮೋಹನ ಅರಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವುದಾಗಿ ಅನುಮತಿ ಪಡೆಯಲಾಗಿತ್ತು. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಒಕ್ಕೂಟವು ಚಿಂತನಾ ಸಮಾವೇಶ ಏರ್ಪಡಿಸಿತ್ತು. ಸಮಾವೇಶದಲ್ಲಿ ಭಾಗವಹಿಸಿದ್ದ ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರು ಸರ್ಕಾರದ ಪರ ಆಶ್ವಾಸನೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಈವರೆಗೂ ಜಿಲ್ಲೆಯಲ್ಲಿ ಅಬಕಾರಿ ಕಾಯ್ದೆ ಉಲ್ಲಂಘಿಸಿರುವ ಕುರಿತು 48 ಪ್ರಕರಣಗಳು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.