ಜಿಲ್ಲೆಯಲ್ಲಿ ಕುಡಿವ ನೀರಿಗೆ ತೊಂದ್ರೆಯಾಗದಿರಲಿ
ಮೈಸೂರು: ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವೇಳೆಯಲ್ಲಿಯೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಅಮಿತಾಪ್ರಸಾದ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಿದ ಅವರು, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ವಿಷಯದಲ್ಲಿ ಯಾವುದೇ ವ್ಯತ್ಯಯವಾಗದಂತೆ ಗಮನಹರಿಸಲು ತಿಳಿಸಿದರು.
ಬರಪೀಡಿತ ಪ್ರದೇಶಗಳಲ್ಲಿ ಮಧ್ಯಾಹ್ನದ ಬಿಸಿಯೂಟವನ್ನು ಬೇಸಿಗೆ ರಜೆ ಅವಧಿಯಲ್ಲಿ ಮುಂದುವರಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು, ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಗೆ ಸನ್ನದ್ಧವಾಗಿರಲು ಕೃಷಿ ಇಲಾಖಾ ಅಧಿಕಾರಿಗಳಿಗೆ ಹೇಳಿದರು.
ಸಭೆಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿ.ಶಿಖಾ, ನೈಸರ್ಗಿಕ ವಿಕೋಪ ಪರಿಹಾರ ನಿಧಿಯಲ್ಲಿ ಪ್ರಸ್ತುತ 9.7 ಕೋಟಿ ಲಭ್ಯವಿದೆ. ಈ ಪೈಕಿ 1.5 ಕೋಟಿ ವೆಚ್ಚಕ್ಕೆ ಮಂಜೂರಾತಿ ನೀಡಲಾಗಿದ್ದು, 8.2 ಕೋಟಿ ನಿವ್ವಳ ಹಣ ಲಭ್ಯವಿದೆ. ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲವೆಂದು ತಿಳಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಕೃತಿ ವಿಕೋಪ ನಿಧಿಯಿಂದ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ 2013-14 ಹಾಗೂ 2014-15ನೇ ಸಾಲಿನಲ್ಲಿ ವಿವಿಧ ಅನುಷ್ಠಾನಾಧಿಕಾರಿಗಳಿಗೆ 2.67 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. 228 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. ಟ್ಯಾಂಕರ್ ಮೂಲಕ ನೀರು ಪೂರೈಕೆ, ಪೈಪ್ಲೈನ್ ದುರಸ್ತಿ, ಕೊಳವೆ ಬಾವಿ ದುರಸ್ತಿಯಂತಹ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಮೇವಿನ ಕೊರತೆ ಇಲ್ಲ: ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಸದ್ಯಕ್ಕೆ ಇಲ್ಲವೆಂದು ತಿಳಿಸಿದ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ದೇವದಾಸ್ ಪ್ರಸ್ತುತ ಯಾವುದೇ ಗೋಶಾಲೆ ತೆರೆದಿಲ್ಲ, 2.57 ಲಕ್ಷ ಟನ್ ಮೇವು ಜಿಲ್ಲೆಯಲ್ಲಿ ಲಭ್ಯವಿದೆ. ಮುಂದಿನ 14 ವಾರಗಳಿಗೆ ಈ ಮೇವು ಸಾಕಾಗುತ್ತದೆ ಎಂದರು. ರೈತರಿಗೆ 17,793 ಮೇವಿನ ಬೀಜದ ಕಿರುಪೊಟ್ಟಣ ಪೂರೈಸಿದೆ. ಜಿಲ್ಲಾಧಿಕಾರಿಗಳ ಕಚೇರಿಯಿಂದ 20.65 ಲಕ್ಷ ಇಲಾಖೆಯಿಂದ 26.95 ಲಕ್ಷ ಬಿಡುಗಡೆಯಾಗಿದೆ ಎಂದು ಹೇಳಿದರು.
ಇತ್ತೀಚಿನ ಅಧಿಕ ಮಳೆಯಿಂದ ಏಪ್ರಿಲ್ ಅಂತ್ಯದವರೆಗೆ ಜಿಲ್ಲೆಯಲ್ಲಿ 6 ಪ್ರಾಣಿಗಳು ಮೃತಪಟ್ಟಿದ್ದು, 75 ಸಾವಿರ ಹಾನಿ ಅಂದಾಜಿಸಿದೆ. 402 ಮನೆಗಳು ಜಖಂಗೊಂಡಿದ್ದು, 28.76 ಲಕ್ಷ ಹಾನಿ, 342 ಎಕೆರೆ ಬೆಳೆ ನಾಶವಾಗಿದ್ದು, 27 ಲಕ್ಷ ಹಾನಿ ಅಂದಾಜಿಸಲಾಗಿದ್ದು, ಪರಿಹಾರ ವಿತರಣೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯ 21 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಜಿಪಂ ಸಿಇಒ ಪಿ.ಎ. ಗೋಪಾಲ್ ಮಾಹಿತಿ ನೀಡಿದರು. ಕುಡಿಯುವ ನೀರಿಗೆ ಸಂಬಂಧಿಸಿ ದೂರುಗಳು ಬಂದ ತಕ್ಷಣವೇ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಬರಪೀಡಿತ ಶೈಕ್ಷಣಿಕ ತಾಲೂಕುಗಳ 548 ಶಾಲೆಗಳ 49.594 ಶಾಲಾ ಮಕ್ಕಳ ಪೈಕಿ 11,500 ಶಾಲಾ ಮಕ್ಕಳು ರಜಾ ಅವಧಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
2014-15ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಹೈಬ್ರಿಡ್ ಜೋಳ ಮತ್ತು ದ್ವಿದಳ ದಾನ್ಯ ಬೆಳೆಗಳ ದೃಢೀಕೃತ ಬಿತ್ತನೆ ಬೀಜ ದಾಸ್ತಾನು ಇದ್ದು, ಸಹಾಯ ಧನದಲ್ಲಿ ವಿತರಣೆ ಕಾರ್ಯ ಪ್ರಾರಂಭವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಹಾಂತೇಶಪ್ಪ ತಿಳಿಸಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ, ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರರು, ಜಿಪಂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

