ಕಾರ್ಯಕರ್ತರ ಸಂಘಟಿತ ಹೋರಾಟ ಗೆಲವಿಗೆ ಕಾರಣ
ಕ.ಪ್ರ.ವಾರ್ತೆ , ನಂಜನಗೂಡು , ಮೇ 18
ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ನನ್ನ ಗೆಲವಿಗಾಗಿ ಹಗಲಿರುಳು ದುಡಿದಿದ್ದರ ಫಲದಿಂದ ಈ ಚುನಾವಣೆಯಲ್ಲಿ ನಾನು ಭಾರಿ ಅಂತರದಿಂದ ಗೆಲ್ಲಲು ಸಾಧ್ಯವಾಯಿತು ಎಂದು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆಯಾದ ಸಂಸದ ಆರ್. ಧ್ರುವನಾರಾಯಣ್ ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹುಲ್ಲಹಳ್ಳಿ ವೃತ್ತದಲ್ಲಿ ಭಾನುವಾರ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿ ನಂತರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ನನಗೆ 10 ಸಾವಿರ ಮತಗಳ ಹಿನ್ನಡೆಯಾಗಿತ್ತು, ಈ ಬಾರಿ 8 ಸಾವಿರಕ್ಕೂ ಅಧಿಕ ಮತವನ್ನು ನೀಡಿ ನನ್ನ ಆಯ್ಕೆಗೆ ಕಾರಣರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್, ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಗೆಲವಿನಿಂದ ಜವಾಬ್ದಾರಿ ಹೆಚ್ಚಿದೆ. ಶಿಕ್ಷಣ, ಆರೋಗ್ಯ, ವಸತಿ, ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಲು ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ನೆನೆಗುದಿಗೆ ಬಿದ್ದಿದ್ದ ನನ್ನ ಅವಧಿಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ. ರಾಜ್ಯವೂ ಸೇರಿದಂತೆ ಹಾಗೂ ದೇಶದಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವುದು ನೋವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಜನಪ್ರಿಯ ಯೋಜನೆಗಳು ಹಾಗೂ ಬಡವರ ಅಭಿವೃದ್ಧಿಗೆ ಶ್ರಮಿಸಿದ್ದರೂ ಚುನಾವಣೆಯಲ್ಲಿ ಪರಿಣಾಮ ಬೀರಲಿಲ್ಲ ಎಂದರು.
ತೀರ್ಪು ಅಂತಿಮ: ಪ್ರಜಾ ಪ್ರಭುತ್ವದಲ್ಲಿ ಮತದಾರರ ತೀರ್ಪು ಅಂತಿಮ. ಮುಂದೆ ಪಕ್ಷವನ್ನು ಸದೃಢವಾಗಿ ಬೆಳೆಸಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ಮೈಸೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದವರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದೆ ವಿಶ್ವನಾಥ್ ಅವರ ಸೋಲಿಗೆ ಕಾರಣ ಎಂದರು.
ನಂತರ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ಮಾಜಿ ಶಾಸಕ ಎಸ್. ಬಾಲರಾಜ್, ಬ್ಲಾಕ್ ಅಧ್ಯಕ್ಷರಾದ ಕೆ.ಎಸ್. ಸುಬ್ಬಣ್ಣ, ಬಿ.ಎಸ್. ಮಹದೇವಪ್ಪ, ಮುಖಂಡರಾದ ಯು.ಎನ್. ಪದ್ಮನಾಭರಾವ್, ಕೆಪಿಸಿಸಿ ಸದಸ್ಯರಾದ ಅಕ್ಬರ್ಅಲಿ, ಹುಲ್ಲಹಳ್ಳಿ ಬಸವರಾಜು, ಪುರಸಭೆ ಉಪಾಧ್ಯಕ್ಷ ದೊರೆಸ್ವಾಮಿ, ಪುರಸಭಾ ಮಾಜಿ ಅಧ್ಯಕ್ಷ ಸಿ.ಎಂ ಶಂಕರ್, ಎನ್.ಆರ್. ದೊರೆಸ್ವಾಮಿ, ಎಂ. ಶ್ರೀಧರ್, ಜಿಪಂ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾಗರಾಜು, ಎಪಿಎಂಸಿ ಸದಸ್ಯ ಮಹದೇವಸ್ವಾಮಿ, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ತಾಪಂ ಸದಸ್ಯರಾದ ಶ್ರೀಕಂಠು, ಗೋವಿಂದರಾಜು, ಪುರಸಭಾ ಸದಸ್ಯರಾದ ಅನುಸೂಯ, ಸುಂದರರಾಜು ಮತ್ತು ನಂದಕುಮಾರ್ ಇದ್ದರು.
ಅದ್ಧೂರಿ ಸ್ವಾಗತ
ಎಚ್.ಡಿ. ಕೋಟೆ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಹೆಚ್ಚು ಮತದಿಂದ ಆಯ್ಕೆಯಾದ ಸಂಸದ ಆರ್.ಧ್ರುವನಾರಾಯಣ್ ಅವರಿಗೆ ಪಟ್ಟಣದಲ್ಲಿ ಅದ್ಧೂರಿ ಸ್ವಾಗತ ದೊರಕಿತು. ಪಟ್ಟಣದ ಬಸ್ ನಿಲ್ದಾಣದ ಮುಂದಿನ ಶ್ರೀ ಮಂಜುನಾಥ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಸಂಸದರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆಗೆ ಸಂಘದ ಪದಾಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ಪಟಾಕಿ ಸಿಡಿಸಿದರು. ಸಂಘದ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಅಬ್ಜಲ್, ಗೌರವಾಧ್ಯಕ್ಷ ರಾಜ್ ಗೋಪಾಲ್, ಲಕ್ಷ್ಮಣ್, ಸಂಘದ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

